ಕನ್ನಡಪ್ರಭ ವಾರ್ತೆ ತುಮಕೂರುತೀವ್ರ ಬೇಸಿಗೆ ಆರಂಭವಾಗಿದ್ದು, ತುಮಕೂರು ಜಿಲ್ಲೆಯಲ್ಲಿ 100 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗುವ ಬಗ್ಗೆ ಗುರುತಿಸಿದ್ದು, ಈ ಹಳ್ಳಿಗಳಿಗೆ ಕುಡಿಯುವ ನೀರಿನ ಯಾವುದೇ ಸಮಸ್ಯೆಯಾಗದಿರುವಂತೆ ಸೂಕ್ತ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ. ನಗರದ ಸ್ಮಾರ್ಟ್ ಸಿಟಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಹಂತದ ಅಧಿಕಾರಿಗಳೊಂದಿಗೆ ಕುಡಿಯುವ ನೀರಿನ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು. ತುಮಕೂರು ಜಿಲ್ಲೆಯ ಪಾವಗಡ ಹೊರತುಪಡಿಸಿ ಎಲ್ಲಾ ತಾಲೂಕುಗಳೂ ಸೇರಿದಂತೆ 100 ಹಳ್ಳಿಗಳಲ್ಲಿ ಕುಡಿಯುವ ನೀರಿನ ತತ್ವಾರ ಎದುರಾಗಬಹುದೆಂದು ಗುರುತಿಸಲಾಗಿದ್ದು, ಈ ಹಳ್ಳಿಗಳಲ್ಲಿ ಈಗಾಗಲೇ ಟ್ಯಾಂಕರ್ ಮೂಲಕ, ಖಾಸಗಿ ಬೋರ್‌ವೆಲ್‌ಗಳ ಮೂಲಕ ಹಾಗೂ ಸಮೀಪದ ನೀರಿನ ಲಭ್ಯತೆಯನುಸಾರ ಸರಬರಾಜಿಗೆ ಕ್ರಮಕೈಗೊಳ್ಳಲಾಗಿದೆ. ಇದಲ್ಲದೆ 4ನೇ ಹಂತವಾಗಿ ಈ ಮೂರೂ ಕ್ರಮಗಳು ಸಾಧ್ಯವಾಗದಿದ್ದಲ್ಲಿ ಬೋರ್‌ವೆಲ್ ಕೊರೆಸಿ ನೀರು ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಬೋರ್‌ವೆಲ್ ಕೊರೆಸಲು ಬೇಕಿರುವ ಅನುಮತಿಯನ್ನು ಜಿಲ್ಲಾಧಿಕಾರಿ ಅಥವಾ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಕ್ಷಣ ನೀಡುವಂತೆ ಹಾಗೂ ಬೆಸ್ಕಾಂ ಅಧಿಕಾರಿಗಳು ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಿಸಿದಂತೆ ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪ್ರಸಕ್ತ ಬೇಸಿಗೆಗೆ ಯಾವುದೇ ನೀರಿನ ಸಮಸ್ಯೆ ಉದ್ಭವಿಸದಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಅವರು ತಿಳಿಸಿದರು.
ನಗರ ಸ್ಥಳೀಯ ಸಂಸ್ಥೆಗಳಲ್ಲೂ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಗಳಿದ್ದು, ಕನಿಷ್ಠ 2 ದಿನಕ್ಕೊಮ್ಮೆಯಾದರೂ ನೀರು ಸರಬರಾಜು ಮಾಡುವ ಮೂಲಕ ಸಾರ್ವಜನಿಕರಿಗೆ ನೆರವಾಗುವಂತೆ ಸೂಚಿಸಿರುವುದಾಗಿ ಸಚಿವರು ತಿಳಿಸಿದರು. ತುಮಕೂರು ನಗರದ ನೀರಿನ ಮೂಲವಾಗಿರುವ ಹೇಮಾವತಿ ನೀರಿನ ಶೇಖರಣಾ ಘಟಕ ಬುಗುಡನಹಳ್ಳಿ ಕೆರೆಯಲ್ಲಿ ನೀರಿನ ಪ್ರಮಾಣದ ಆಧಾರದ ಮೇಲೆ ಹೇಮಾವತಿ ನೀರು ಹರಿಸುವಂತೆ ಈಗಾಗಲೇ ಹಾಸನದ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಲಾಗಿದೆ. ಜಿಲ್ಲಾಡಳಿತವು ಸರ್ಕಾರಕ್ಕೆ ಮನವಿಯನ್ನೂ ಸಲ್ಲಿಸಲಿದ್ದು, ಕನಿಷ್ಠ ೨ ಟಿಎಂಸಿ ನೀರು ಹರಿಸುವಂತೆ ಕೋರುವುದಾಗಿ ಅವರು ತಿಳಿಸಿದರು.ಕೋಟ್ಯಾಂತರ ರೂಪಾಯಿ ಹೂಡಿಕೆ ಮಾಡಿ ತೋಟಗಾರಿಕೆ ಬೆಳೆ ಬೆಳೆದಿರುವ ರೈತರು ಸಂಕಷ್ಟಕ್ಕೀಡಾಗಿರುವುದು ಅತ್ಯಂತ ನೋವಿನ ವಿಚಾರ. ಸರ್ಕಾರ ಎಂದಿಗೂ ರೈತರ ಪರವಾಗಿ ನಿಲ್ಲಲಿದ್ದು, ಪರಿಹಾರ ಒದಗಿಸಲು ಸೂಕ್ತ ಕ್ರಮವಹಿಸಲಿದೆ. ರೈತರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವರು ತಿಳಿಸಿದರು. ಶಿರಾ ತಾಲೂಕಿನಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಿಸುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು. ಬಡವರಿಗಾಗಿ ನಿರ್ಮಿಸಿರುವ 1800 ಮನೆಗಳನ್ನು ಸದ್ಯದಲ್ಲಿಯೇ ಹಂಚಿಕೆ ಮಾಡಲು ಕ್ರಮವಹಿಸಲಾಗುವುದು ಎಂದು ಸಚಿವರು ತಿಳಿಸಿದರು. ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವಿಜ ಮಾಧ್ಯಮಗೋಷ್ಠಿಯಲ್ಲಿ ಉಪಸ್ಥಿತರಿದ್ದರು.