ಲೋಕಸಭಾ ಚುಣಾವಣೆಯಲ್ಲಿ ಕರ್ನಾಟಕದಲ್ಲಿ 20 ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ: ಡಾ.ಜಿ.ಪರಮೇಶ್ವರ್

| Published : Mar 17 2024, 01:49 AM IST

ಲೋಕಸಭಾ ಚುಣಾವಣೆಯಲ್ಲಿ ಕರ್ನಾಟಕದಲ್ಲಿ 20 ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ: ಡಾ.ಜಿ.ಪರಮೇಶ್ವರ್
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ, ತುಮಕೂರು

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದಿದೆ. ಈ ಅವಧಿಯಲ್ಲಿ ನಮ್ಮ ಸರ್ಕಾರ ಚುನಾವಣಾ ಸಂದರ್ಭದಲ್ಲಿ ನೀಡಿದ್ದ 5 ಗ್ಯಾರಂಟಿ ಯೋಜನೆಯ ಭರವಸೆಯನ್ನು ಈಡೇರಿಸಿದೆ. ಈ ಗ್ಯಾರಂಟಿ ಯೋಜನೆಗಳಿಗಾಗಿ 36 ಸಾವಿರ ಕೋಟಿ ರೂ. ಹಣ ಖರ್ಚು ಮಾಡಿದ್ದೇವೆ. ಹೀಗಾಗಿ ಈ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ನಮ್ಮ ಕೈ ಹಿಡಿಯುತ್ತಾರೆ ಎಂಬ ವಿಶ್ವಾಸ ನಮ್ಮಲ್ಲಿದೆ ಎಂದರು.

ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಸುಮಾರು 8.78 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಇನ್ನು 21ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕಿದೆ. ಈ ಸಂಬಂಧ ಈಗಾಗಲೇ ಅಂತಿಮ ಸುತ್ತಿನ ಚರ್ಚೆ ನಡೆದು ಅಭ್ಯರ್ಥಿಗಳ ಹೆಸರುಗಳನ್ನು ಶಿಫಾರಸ್ಸು ಸಹ ಮಾಡಲಾಗಿದೆ. ಕೇಂದ್ರ ಚುನಾವಣಾ ಕಮಿಟಿ ಮುಂದೆ ಕೆಪಿಸಿಸಿ ಅಧ್ಯಕ್ಷರು ಹಾಗ ರಾಜ್ಯ ಉಸ್ತುವಾರಿಗಳು ಅಭ್ಯರ್ಥಿಗಳ ಹೆಸರುಗಳನ್ನು ಮಂಡಿಸುತ್ತಾರೆ. ಇನ್ನೆರಡು ದಿನಗಳಲ್ಲಿ ಟಿಕೆಟ್ ಪಟ್ಟಿ ಘೋಷಣೆಯಾಗಲಿದೆ ಎಂದರು.

ರಾಜ್ಯಕ್ಕೆ ರಾಹುಲ್‌ಗಾಂಧಿ ಭೇಟಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ರಾಹುಲ್‌ಗಾಂಧಿಯವರ ಷೆಡ್ಯುಲ್ ಪಟ್ಟಿ ಇನ್ನು ಬಿಡುಗಡೆಯಾಗಿಲ್ಲ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದಲ್ಲಿ ಪ್ರಚಾರ ಮಾಡುತ್ತಾರೆ. ಆದರೆ ಅವರ ಷೆಡ್ಯುಲ್ ಸಹ ಇನ್ನು ಬಿಡುಗಡೆಯಾಗಿಲ್ಲ. ಅವರ ಪ್ರಚಾರದ ವೇಳಾಪಟ್ಟಿ ಬಂದ ಬಳಿಕ ಕೆಪಿಸಿಸಿ ಅಧ್ಯಕ್ಷರು ಅದನ್ನು ಪ್ರಕಟಿಸುತ್ತಾರೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಿ ಅಭ್ಯರ್ಥಿ ಘೋಷಣೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ನಮ್ಮಲ್ಲಿ ಸದ್ಯಕ್ಕೆ ಆ ವಿಚಾರದ ಬಗ್ಗೆ ಪ್ರಸ್ತಾಪ ಇಲ್ಲ. ನಮ್ಮ ಇಂಡಿಯಾ ಒಕ್ಕೂಟದ ಎಲ್ಲಾ ಪಕ್ಷಗಳು ಸೇರಿ ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ತೀರ್ಮಾನ ಮಾಡುತ್ತವೆ ಎಂದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಮೇಲಿನ ಫೋಕ್ಸೊ ಪ್ರಕರಣವನ್ನು ಸಿಐಡಿಗೆ ವಹಿಸಿದ್ದೇವೆ. ಸುಖಾ ಸುಮ್ಮನೆ ಗೊಂದಲ ಆಗಬಾರದು ಎಂಬ ಉದ್ದೇಶದಿಂದ ಈ ಪ್ರಕರಣವನ್ನು ಸಿಐಡಿಗೆ ಕೊಟ್ಟಿದ್ದೇವೆ ಎಂದ ಅವರು, ಈಗಾಗಲೇ ಯಡಿಯೂರಪ್ಪನವರು ಸಹ ಪೊಲೀಸರಿಗೆ ಹೇಳಿಕೆ ಕೊಟ್ಟಿದ್ದಾರೆ. ದೂರು ಕೊಟ್ಟಿರುವ ಮಹಿಳೆ ಸುಮಾರು 50ಪೋಕ್ಸೋ ಪ್ರಕರಣ ದಾಖಲೆ ಮಾಡಿದ್ದಾರೆ ಎಂಬ ಮಾಹಿತಿ ಇದೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ತುಮಕೂರಿನಲ್ಲಿ ಕಾಂಗ್ರೆಸ್ ಮುಖಂಡ ರಾಯಸಂದ್ರ ರವಿಕುಮಾರ್ ಮೇಲೆ ಶಾಸಕ ಶ್ರೀನಿವಾಸ್ ಹಲ್ಲೆ ನಡೆಸಿರುವ ವಿಚಾರದ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ, ಏನೋ ಗುತ್ತಿಗೆ ವಿಚಾರದಲ್ಲಿ ಇವರಿಬ್ಬರ ನಡುವೆ ಗಲಾಟೆಯಾಗಿದೆ ಎಂದು ನನಗೆ ಮಾಹಿತಿ ಬಂದಿದೆ. ಈಗ ಅವರವರೇ ಸರಿ ಹೋಗಿದ್ದಾರೆ. ಏನೂ ಸಮಸ್ಯೆ ಇಲ್ಲ ಎಂದು ಹೇಳಿದರು.