ತನ್ನದೇ ಆದ ಸಂವಿಧಾನವನ್ನು ಅಳವಡಿಸಿಕೊಳ್ಳುವ ಮೂಲಕ ಪ್ರಜಾಪ್ರಭುತ್ವದ ಪದ್ದತಿಯಲ್ಲಿ ಸಾಗಿ ಬಂದ ನಮ್ಮ ದೇಶವು ಜಗತ್ತಿನಲ್ಲಿ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ.

ತಾಲೂಕಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ

ಕನ್ನಡಪ್ರಭ ವಾರ್ತೆ ಮುಂಡಗೋಡ

ತನ್ನದೇ ಆದ ಸಂವಿಧಾನವನ್ನು ಅಳವಡಿಸಿಕೊಳ್ಳುವ ಮೂಲಕ ಪ್ರಜಾಪ್ರಭುತ್ವದ ಪದ್ದತಿಯಲ್ಲಿ ಸಾಗಿ ಬಂದ ನಮ್ಮ ದೇಶವು ಜಗತ್ತಿನಲ್ಲಿ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ ಎಂದು ಮುಂಡಗೋಡ ತಹಸೀಲ್ದಾರ ಶಂಕರ ಗೌಡಿ ಹೇಳಿದರು.

ಸೋಮವಾರ ಇಲ್ಲಿಯ ತಾಲೂಕಾ ಕ್ರೀಡಾಂಗಣದಲ್ಲಿ ೭೭ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ನಮ್ಮ ಸಂವಿಧಾನ ನಮಗೆ ಮೂಲಭೂತ ಹಕ್ಕುಗಳನ್ನು ನೀಡಿದ್ದು, ಅವುಗಳ ರಕ್ಷಣೆಗೆ ಮಾರ್ಗಗಳನ್ನು ಕೊಟ್ಟಿದೆ. ಜಾತಿ, ಭಾಷೆ, ಪ್ರದೇಶ, ಲಿಂಗ ಇವೆಲ್ಲವನ್ನು ಮೀರಿ ಪ್ರತಿಯೊಬ್ಬರಿಗೂ ಸಮಾನ ಹಕ್ಕು ನೀಡಿದೆ. ಹಕ್ಕುಗಳನ್ನು ಅನುಭವಿಸುವ ನಾವುಗಳು ಕರ್ತವ್ಯಗಳ ಕಡೆಗೂ ಗಮನ ನೀಡುವ ಅವಶ್ಯಕತೆ ಇದೆ. ಸಾಕಷ್ಟು ಸಮಸ್ಯೆಗಳ ನಡುವೆಯೂ ಸಹ ನಮ್ಮ ದೇಶ ಜಗತ್ತಿನ ಅಗ್ರ ಗಣ್ಯ ರಾಷ್ಟ್ರಗಳಲ್ಲಿ ಒಂದೆನಿಸಿಕೊಂಡಿದ್ದು, ವಿಜ್ಞಾನ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಜಗತ್ತಿನ ಮುಂಚೂಣಿ ದೇಶಗಳಲ್ಲಿ ಒಂದಾಗಿ ಹೊರಹೊಮ್ಮಿದೆ ಎಂದು ಬಣ್ಣಿಸಿದರು.

ಈ ಸಂದರ್ಭ ಜಿಪಂ ಮಾಜಿ ಉಪಾಧ್ಯಕ್ಷ ಎಲ್.ಟಿ. ಪಾಟೀಲ, ಕಸಾಪ ಅಧ್ಯಕ್ಷ ವಸಂತ ಕೊಣಸಾಲಿ, ಸಿಪಿಐ ರಂಗನಾಥ ನೀಲಮ್ಮನವರ, ರಾಜ್ಯ ಸರಕಾರಿ ನೌಕರ ಸಂಘದ ಅಧ್ಯಕ್ಷ ಸುಭಾಸ ಡೋರಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಸುಮಾ, ಪಪಂ ಮುಖ್ಯಾಧಿಕಾರಿ ಸಂತೋಷಕುಮಾರ ಹಾಲಕಲ್ಲಾಪುರ, ಪಪಂ ಮಾಜಿ ಉಪಾಧ್ಯಕ್ಷೆ ರಹಿಮಾಬಾನು ಕುಂಕೂರ, ಸದಸ್ಯ ಅಶೋಕ ಚಲವಾದಿ, ನಿರ್ಮಲಾ ಬೆಂಡ್ಲಗಟ್ಟಿ, ಮಹ್ಮದಗೌಸ ಮಖಾಂದಾರ, ಅಲ್ಲಾವುದ್ದಿನ ಕಮಡೊಳ್ಳಿ, ನಾಗರಾಜ ಹಂಚಿನಮನಿ, ಚಂದ್ರಶೇಖರ ಕರಿಗಾರ ಹಾಗೂ ವಿವಿಧ ಸಂಘ-ಸಂಸ್ಥೆ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರು, ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಬಳಿಕ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.