ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಭಾರತದ ಸಂವಿಧಾನ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ಪುತ್ಥಳಿಯ ಮುಂಭಾಗ ಗುರುವಾರ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಬೋಧಿಸಲಾಯಿತು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಭಾರತದ ಸಂವಿಧಾನ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ಪುತ್ಥಳಿಯ ಮುಂಭಾಗ ಗುರುವಾರ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಬೋಧಿಸಲಾಯಿತು.ಬಾಗಲಕೋಟೆ ಶಾಸಕ ಉಮೇಶ ಮೇಟಿ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷ ಅನೀಲ ದಡ್ಡಿ, ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಪುಷ್ಪಮಾಲೆ ಅರ್ಪಿಸಿ ಗೌರವ ಸಲ್ಲಿಸಿದರು.
ನಂತರ ಜಿಲ್ಲಾಧಿಕಾರಿ ಸಂಗಪ್ಪ ಅವರ ನೇತೃತ್ವದಲ್ಲಿ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದಲಾಯಿತು. ಈ ಸಂದರ್ಭದಲ್ಲಿ ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಎಲ್ಲರಿಗೂ ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯ ಕಲ್ಪಿಸುವ ಸಂವಿಧಾನದ ಮಹತ್ವವನ್ನು ಸ್ಮರಿಸಲಾಯಿತು.ಭಾರತದ ಪ್ರಜೆಗಳಾದ ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುವದಕ್ಕಾಗಿ ಭಾರತದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಯನ್ನು ದೊರೆಯುವಂತೆ ಮಾಡುವುದಾಗಿ ತಿಳಿಸಲಾಯಿತು. ಅಲ್ಲದೇ, ವ್ಯಕ್ತಿಗೌರ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲಿ ಭ್ರಾತೃತ್ವ ಭಾವನೆಯನ್ನು ಮೂಡಿಸುವುದಕ್ಕೆ ದೃಢಸಂಕಲ್ಪ ಮಾಡಬೇಕು. ನಮ್ಮ ಸಂವಿಧಾನ ಸಭೆಯಲ್ಲಿ 1949ನೇ ನವೆಂಬರ 26ನೇ ದಿನದಂದು ಈ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡು ಅಂಗೀಕರಿಸಿ, ಶಾಸನವಾಗಿ ವಿಧಿಸಿಕೊಂಡಿರುವುದಾಗಿ ಪ್ರತಿಜ್ಞೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಯ ತಾಲೂಕು ಅಧ್ಯಕ್ಷ ಎಸ್.ಎಂ.ರಾಂಪೂರ, ಅಪರ ಜಿಲ್ಲಾಧಿಕಾರಿ ಮಂಜುನಾಥ ಡೊಂಬರ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು ಅಲ್ಲಾಪೂರ, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮ ಉಕ್ಕಲಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸದಾಶಿವ ಬಡಿಗೇರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.