2 ವರ್ಷದಲ್ಲಿ 142 ಭರವಸೆ ಈಡೇರಿಸಿದ್ದೇವೆ: ಸಿಎಂ

| Published : May 21 2025, 12:05 AM IST

ಸಾರಾಂಶ

ರಾಜ್ಯದಲ್ಲಿ ಬಿಜೆಪಿಗೆ ಎಂದೂ ಜನಾದೇಶವಾಗಿಲ್ಲ. ‘ಆಪರೇಷನ್‌ ಕಮಲ’ದ ಮೂಲಕವೇ ಅಧಿಕಾರಕ್ಕೆ ಬಂದಿರುವ ಬಿಜೆಪಿ, ಎಂದೂ ಜನಪರ ಯೋಜನೆಗಳನ್ನು ಜಾರಿಗೊಳಿಸುವ ಕಾಳಜಿ ತೆಗೆದುಕೊಳ್ಳಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಹೊಸಪೇಟೆರಾಜ್ಯದಲ್ಲಿ ಬಿಜೆಪಿಗೆ ಎಂದೂ ಜನಾದೇಶವಾಗಿಲ್ಲ. ‘ಆಪರೇಷನ್‌ ಕಮಲ’ದ ಮೂಲಕವೇ ಅಧಿಕಾರಕ್ಕೆ ಬಂದಿರುವ ಬಿಜೆಪಿ, ಎಂದೂ ಜನಪರ ಯೋಜನೆಗಳನ್ನು ಜಾರಿಗೊಳಿಸುವ ಕಾಳಜಿ ತೆಗೆದುಕೊಳ್ಳಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕಂದಾಯ ಇಲಾಖೆ ಹಾಗೂ ವಿಜಯನಗರ ಜಿಲ್ಲಾಡಳಿತ ಸಹಯೋಗದಲ್ಲಿ ನಡೆದ ಸಮರ್ಪಣೆ ಸಂಕಲ್ಪ ಸಮಾವೇಶದಲ್ಲಿ ಅವರು ಮಾತನಾಡಿದರು.ರಾಜ್ಯದಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ ಆರಂಭಿಸಿದೆ. ಬಿಜೆಪಿ ನಾಯಕರು ರಾಜ್ಯದಲ್ಲಿ ಜನಾಕ್ರೋಶವಿದೆ ಎಂದು ತಮಟೆ ಬಾರಿಸುತ್ತಿದ್ದಾರೆ. ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಜನರನ್ನು ದಾರಿ ತಪ್ಪಿಸುವ ಮಾರ್ಗವಷ್ಟೆ. ಬಿಜೆಪಿಯಿಂದ ಈ ಹಿಂದೆ ಎಂದೂ ಜನಕಲ್ಯಾಣ ಕಾರ್ಯಕ್ರಮಗಳು ಆಗಿಲ್ಲ. ಕಾಂಗ್ರೆಸ್‌ ಸರ್ಕಾರದ ಬಗ್ಗೆ ಜನರಲ್ಲಿ ಜನಾಕ್ರೋಶವಿದ್ದರೆ ಹೊಸಪೇಟೆಯಲ್ಲಿ ಜರುಗಿದ ಸಮರ್ಪಣೆ ಸಂಕಲ್ಪ ಯಾತ್ರೆಗೆ ಮೂರು ಲಕ್ಷಕ್ಕೂ ಹೆಚ್ಚು ಜನರು ಹೇಗೆ ಭಾಗವಹಿಸುತ್ತಿದ್ದರು? ಎಂದು ಸಿಎಂ ಪ್ರಶ್ನಿಸಿದರು.

ಭರವಸೆ ಈಡೇರಿಸಿದ್ದೇವೆ:ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಭರವಸೆ ನೀಡಿದರು.

ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವು. ಜೊತೆಗೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನೂ ರೂಪಿಸಿ ಜಾರಿಗೊಳಿಸಿದ್ದೇವು. ಈಗ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ದುರ್ಬಲ ಸಮುದಾಯಗಳಿಗೆ ಆರ್ಥಿಕ ಶಕ್ತಿ ಬಂದಿದೆ. ಗ್ಯಾರಂಟಿ ಯೋಜನೆ ಜಾರಿ ವೇಳೆ ನಾವು ಯಾವುದೇ ಜಾತಿ, ಧರ್ಮ, ಪಕ್ಷ ನೋಡಿಲ್ಲ. ಎಲ್ಲರಿಗೂ ಯೋಜನೆಗಳನ್ನು ತಲುಪಿಸುವ ಹೊಣೆಗಾರಿಕೆಯಿಂದ ವರ್ತಿಸಿದ್ದೇವೆ ಎಂದು ಪ್ರತಿಪಾದಿಸಿದರು.

ಬಿಜೆಪಿ ನಾಯಕರು ಯಾವುದೇ ಕೆಲಸ ಮಾಡದೆ ಬರೀ ಸುಳ್ಳು ಹೇಳಿಕೊಂಡು ಓಡಾಡುತ್ತಾರೆ. ಅವರಿಗೆ ರಾಜಕೀಯ ಬದ್ಧತೆಯೇ ಇಲ್ಲ. ನಾಡಿನ ಬಗ್ಗೆ ಕಾಳಜಿಯೂ ಅವರಲ್ಲಿಲ್ಲ. ಕಾಂಗ್ರೆಸ್‌ ಹಾಗೂ ಬಿಜೆಪಿ ಅಧಿಕಾರದ ಅವಧಿಯಲ್ಲಿ ಜಾರಿಯಾಗಿರುವ ಯೋಜನೆಗಳ ಕುರಿತು ತುಲನೆ ಮಾಡಿದರೆ ಯಾವ ಪಕ್ಷ ಜನಪರವಾಗಿದೆ ಎಂಬುದು ನಿಮಗೂ ಗೊತ್ತಾಗುತ್ತದೆ. ಕಾಂಗ್ರೆಸ್‌ ಸರ್ಕಾರ ಮಾಡಿರುವ ಕೆಲಸಗಳ ಕುರಿತು ಚರ್ಚಿಸಲು ನಾವು ಸಿದ್ಧರಿದ್ದೇವೆ. ಒಂದೇ ವೇದಿಕೆಗೆ ಬನ್ನಿ ಚರ್ಚೆ ಮಾಡೋಣ ಎಂದು ಬಿಜೆಪಿ ನಾಯಕರಿಗೆ ಆಹ್ವಾನ ನೀಡಿದರು.

ನಮ್ಮ ರಾಜ್ಯ ಸರ್ವಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವ ಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ನಾವು ಇದೇ ಮೌಲ್ಯವನ್ನು ಪಾಲಿಸುತ್ತಿದ್ದೇವೆ ಎಂದರು.ಕೇಂದ್ರ ಅನುದಾನ ನೀಡುತ್ತಿಲ್ಲ:ಕೇಂದ್ರ ಸರ್ಕಾರದಿಂದ ಪ್ರತಿ ವರ್ಷ ನಮಗೆ ನಷ್ಟ ಆಗುತ್ತಿದೆ. ನಾವು ಪ್ರತಿ ವರ್ಷ 4.5 ಲಕ್ಷ ಕೋಟಿ ರು.ಗಳನ್ನು ತೆರಿಗೆ ರೂಪದಲ್ಲಿ ಕೊಟ್ಟರೆ ನಮಗೆ ವಾಪಸ್ ಬರುವುದು ಒಂದು ರುಪಾಯಿಗೆ 14 ಪೈಸೆ ಮಾತ್ರ. ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ಕೇಂದ್ರದಿಂದ ಪೂರ್ತಿ ಅನುದಾನ ಬಂದೇ ಇಲ್ಲ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ರಾಜ್ಯದ ಪಾಲನ್ನು ಪೂರ್ತಿ ಕೊಟ್ಟಿದೆ. ಆದರೆ, ಕೇಂದ್ರ ಸರ್ಕಾರ ತಮ್ನ ಪಾಲನ್ನು ಕೊಡದೆ ಉಳಿಸಿಕೊಂಡು ಅನ್ಯಾಯ ಮಾಡುತ್ತಿದೆ. 15ನೇ ಹಣಕಾಸು ಯೋಜನೆಯಲ್ಲಿ ರಾಜ್ಯಕ್ಕೆ ಕೇಂದ್ರ ಅನ್ಯಾಯ ಮಾಡಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ ₹5,300 ಕೋಟಿಯಲ್ಲಿ ಬಿಡಿಗಾಸನ್ನೂ ಬಿಡುಗಡೆ ಮಾಡಲಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರು. ಅದನ್ನೂ ಈಡೇರಿಸಲಿಲ್ಲ ಎಂದು ಟೀಕಿಸಿದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಾದ ಅನುದಾನ ನೀಡದೆ ಅನ್ಯಾಯವಾಗುತ್ತಿರುವ ಬಗ್ಗೆ ಪಕ್ಷದ ಸಂಸದರು ಧ್ವನಿ ಎತ್ತುತ್ತಿಲ್ಲ. ಇದರಿಂದ ಒಕ್ಕೂಟ ವ್ಯವಸ್ಥೆಯ ಘನತೆ ಹಾಳಾಗುತ್ತಿದ್ದರೂ ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ ಎಂದು ಟೀಕಿಸಿದರು.

ಗ್ಯಾರಂಟಿ ಯೋಜನೆಗಳಿಂದಾಗಿರುವ ಅನುಕೂಲಗಳ ಕುರಿತು ಪ್ರಸ್ತಾಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ₹2,000 ಕೊಡುತ್ತಿದ್ದೇವೆ. 1.30 ಕೋಟಿ ಕುಟುಂಬಗಳಿಗೆ ಗೃಹಜ್ಯೋತಿ ಯೋಜನೆಯಡಿ ಅನುಕೂಲ ಒದಗಿಸಿದ್ದೇವೆ. ಜತೆಗೆ ಇಡೀ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದೇವೆ ಎಂದು ವಿವರಿಸಿದರು.

===2014ರಲ್ಲಿ ₹10,000 ಇದ್ದ ಚಿನ್ನದ ಬೆಲೆ ಈಗ ಲಕ್ಷ ರು. ಆಗಿದೆ. ಗ್ಯಾಸ್ ಬೆಲೆ ₹400 ಇದ್ದದ್ದು ಈಗ ₹850 ಆಗಿದೆ. ಡೀಸೆಲ್, ಪೆಟ್ರೋಲ್, ಎಣ್ಣೆ, ಕಾಳು, ಬೇಳೆ, ರಸಗೊಬ್ಬರ ಎಲ್ಲದರ ಬೆಲೆಯನ್ನೂ ಆಕಾಶಕ್ಕೆ ಏರಿಸಿರುವ ಕೇಂದ್ರದ ಮೋದಿಯವರ ಸರ್ಕಾರದ ವಿರುದ್ಧ ಜನಾಕ್ರೋಶವಿದೆ. ಜನಪರ ಆಡಳಿತ ನೀಡಿರುವ ನಮ್ಮ ಸರ್ಕಾರದ ಬಗ್ಗೆ ಜನರಲ್ಲಿ ಒಳ್ಳೆಯ ಅಭಿಪ್ರಾಯವಿದೆ ಎಂದರು.