ಸಾರಾಂಶ
ದೇಶ ನಮಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ ದೇಶಕ್ಕಾಗಿ ನಾವು ಏನು ಮಾಡಿದ್ದೇವೆ ಎನ್ನುವುದು ಮುಖ್ಯ.
ಕನ್ನಡಪ್ರಭ ವಾರ್ತೆ ಕೊಪ್ಪಳ
ದೇಶ ನಮಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ ದೇಶಕ್ಕಾಗಿ ನಾವು ಏನು ಮಾಡಿದ್ದೇವೆ ಎನ್ನುವುದು ಮುಖ್ಯ. ಆ ನಿಟ್ಟಿನಲ್ಲಿ ಗಣರಾಜೋತ್ಸವ ದಿನಾಚರಣೆಯ ಈ ಸಂದರ್ಭ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.ಭಾನುವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ 76ನೇ ಗಣರಾಜೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ನಾವು ಮಾಡುವ ಕೆಲಸ ನಮ್ಮ ಜನರಿಗೆ ಉಪಯೋಗವಾಗುವ ರೀತಿಯಲ್ಲಿ ಇರಬೇಕು ಮತ್ತು ಅಂತಹ ಯೋಜನೆ ರೂಪಿಸಬೇಕು. ಮುಂದಿನ 5 ವರ್ಷದ ಕೃಷಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಅಭಿವೃದ್ಧಿ ಯೋಜನೆ ಜಿಲ್ಲೆಯಲ್ಲಿ ಮಾಡಿದ್ದೇವೆ. ಪ್ರವಾಸೋದ್ಯಮ 5 ವರ್ಷದ ಬ್ರ್ಯಾಂಡ್ ಮಾಡಿ ನಮ್ಮ ಜಿಲ್ಲೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಬೇಕಿದೆ. ಇದಕ್ಕೆ ಎಲ್ಲಾ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಜಾರಿಗೆ ತರುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದು ಹೇಳಿದರು.ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಯಿಂದ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕೆಲಸ ಕಾರ್ಯಗಳು ನಡೆಯುತ್ತಿವೆ. ನಮ್ಮ ಜಿಲ್ಲೆಯ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ಅವರಿಗೆ ಪದ್ಮಶ್ರೀ ಪ್ರಶಸ್ತಿ ಬಂದಿರುವುದು ಸಂತಸ ತಂದಿದೆ ಎಂದು ಹೇಳಿದರು.
ಈ ಸಂದರ್ಭ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಿಪಂ ಮುಖ್ಯ ಲೆಕ್ಕಾಧಿಕಾರಿ ಅಮೀನ್ ಅತ್ತಾರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ಆಹಾರ ಇಲಾಖೆ ಉಪನಿರ್ದೇಶಕ ಸೋಮಶೇಖರ ಬಿರಾದಾರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಪುಷ್ಪನವನ ಸಲ್ಲಿಕೆ:ಧ್ವಜಾರೋಹಣ ಕಾರ್ಯಕ್ರಮದ ಬಳಿಕ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಡಿಸಿ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದು, ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.