ಸಾರಾಂಶ
ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಜನಕ್ಕೆ ಅಸಮಾಧಾನ ಮೂಡಿದ್ದು, ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡುತ್ತಿದ್ದಾರೆ. ಇದನ್ನು ದೂರ ಮಾಡಿ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಂಬಿಕೆ ತರುವ ಕೆಲಸವನ್ನು ನಾವು ನೀವು ಎಲ್ಲರೂ ಒಟ್ಟಾಗಿ ಸೇರಿ ಮಾಡಬೇಕು. ಸರ್ಕಾರಿ ಆಸ್ಪತ್ರೆಯಲ್ಲಿ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಸದ್ಬಳಕೆಯಾಗಲಿ.
ಕನ್ನಡಪ್ರಭ ವಾರ್ತೆ ಕೋಲಾರಸರ್ಕಾರಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಆದ್ಯ ಕರ್ತವ್ಯ. ಆಸ್ಪತ್ರೆಗಳ ಬಗ್ಗೆ ಒಳ್ಳೆಯ ಅಭಿಪ್ರಾಯ ಮೂಡುವಂತೆ ಮಾಡಿ ಸಾರ್ವಜನಿಕರಿಗೆ ಉತ್ತಮ ಚಿಕಿತ್ಸಾ ಸೌಲಭ್ಯ ಒದಗಿಸುವಂತಾಗಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು. ನಗರದ ಹೊರವಲಯದ ಡಿಎಚ್‌ಒ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿ, ಸಾರ್ವಜನಿಕರಿಗೆ ಸೇವೆ ಸಲ್ಲಿಸಲು ಅಗತ್ಯವಾದ ಕುಂದುಕೊರತೆಗಳ ಬಗ್ಗೆ ಹಾಗೂ ಪರಿಹಾರಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.ಜನತೆಗೆ ಅಸಮಾಧಾನ
ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಜನಕ್ಕೆ ಅಸಮಾಧಾನ ಮೂಡಿದ್ದು, ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡುತ್ತಿದ್ದಾರೆ. ಇದನ್ನು ದೂರ ಮಾಡಿ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಂಬಿಕೆ ತರುವ ಕೆಲಸವನ್ನು ನಾವು ನೀವು ಎಲ್ಲರೂ ಒಟ್ಟಾಗಿ ಸೇರಿ ಮಾಡಬೇಕು. ಸರ್ಕಾರಿ ಆಸ್ಪತ್ರೆಯಲ್ಲಿ ಸರ್ಕಾರದಿಂದ ದೊರೆಯುವ ಉಚಿತ ಔಷಧಿ ಪೂರೈಕೆ, ಆಂಬ್ಯುಲೆನ್ಸ್, ಬೆಡ್ ಲಭ್ಯತೆ, ಆಕ್ಸಿಜನ್ ಕೊರತೆ ಆಗಬಾರದು. ಅವಶ್ಯಕತೆ ಇದ್ದರೆ ಮೊದಲೇ ಪೂರ್ವ ತಯಾರಿ ಮಾಡಿಕೊಳ್ಳಬೇಕು ಉಚಿತ ಚಿಕಿತ್ಸೆ ಪಡೆದುಕೊಳ್ಳುವುದು ಪ್ರತಿಯೊಬ್ಬರ ಹಕ್ಕು, ಯಾವುದೇ ಕಾರಣಕ್ಕೂ ಬಡವರು ಆರೋಗ್ಯ ವಂಚಿತರಾಗಬಾರದು ಎಂದು ತಿಳಿಸಿದರು.ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಜಗದೀಶ್ ಮಾತನಾಡಿ, ಜಿಲ್ಲಾ ಆಸ್ಪತ್ರೆಯಲ್ಲಿ ಖಾಸಗಿ ಆ್ಯಂಬುಲೆನ್ಸ್‌ಗಳನ್ನು ದೂರವಿಟ್ಟು ಲಭ್ಯವಿರುವ ನಾಲ್ಕು ಸರ್ಕಾರಿ ಆ್ಯಂಬುಲೆನ್ಸ್ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಚಿರಶಾಂತಿ ವಾಹನವನ್ನು ಕೊಟ್ಟರೆ ಅನುಕೂಲವಾಗುತ್ತದೆ ಎಂದು ಶಾಸಕರಿಗೆ ಮನವಿ ಮಾಡಿದರು. ಇದಕ್ಕೆ ಶಾಸಕ ಕೊತ್ತೂರು ಮಂಜುನಾಥ್ ಸಮ್ಮತಿ ಸೂಚಿಸಿದರು.ಅಧಿಕಾರಿಗಳ ವರ್ತನೆಗೆ ಆಕ್ರೋಶ
ಮೆಡಿಕಲ್ ಕಾಲೇಜಿಗಾಗಿ ಸಾಕಷ್ಟು ಪ್ರಯತ್ನ ಪಟ್ಟು ಅನುಮತಿ ಪಡೆಯಲಾಗಿದೆ. ಆದರೆ ಕಾಲೇಜಿಗಾಗಿ ಜಮೀನು ಪರಿಶೀಲಿಸಿವು ವಿಷಯವನ್ನು ತಮ್ಮ ಗಮನಕ್ಕೆ ತರದೆ ಅಧಿಕಾರಿಗಳು ಸ್ಥಳಪರಿಶೀಲನೆ ನಡೆಸಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನಲ್ಲಿರುವ ಆಸ್ಪತ್ರೆಗಳ ಅಭಿವೃದ್ಧಿ ಕುರಿತು ಚರ್ಚಿಸಿ, ನಿಮ್ಮ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರ ಸರಿಯಾದರೆ ಎಲ್ಲವೂ ಸರಿಹೋಗುತ್ತದೆ. ಇವುಗಳ ಕಡೆ ಅಧಿಕಾರಿಗಳು ಗಮನ ಹರಿಸಬೇಕು ಎಂದರು.ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ತಹಸೀಲ್ದಾರ್ ನಯನ, ಜಿಲ್ಲಾ ಆರೋಗ್ಯಧಿಕಾರಿ ಶ್ರೀನಿವಾಸ್ ಇದ್ದರು.