ಸಾರಾಂಶ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ 28 ಕ್ಷೇತ್ರದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ದೆಹಲಿಗೆ ನಿಮ್ಮನ್ನು ನೋಡಲು ಬರುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿಗೆ ಭರವಸೆ ನೀಡಿದರು.
ಪ್ರಧಾನಿ ಮೋದಿ ಸರ್ಕಾರ ದೇಶದ ಗಡಿ ಕಾಯುವ ರಕ್ಷಣಾ ವ್ಯವಸ್ಥೆ ಜೊತೆಗೆ ಕಿಸಾನ್ ಸಮ್ಮಾನ್ ಮೂಲಕ ರೈತರಿಗೆ ₹6 ಸಾವಿರ ಕೊಡುತ್ತಿದೆ.
ನಾನು ಅಧಿಕಾರದಲ್ಲಿ ಇದ್ದಾಗ ಕೇಂದ್ರದಿಂದ ₹6 ಸಾವಿರ ಜೊತೆಗೆ ರಾಜ್ಯ ಸರ್ಕಾರದಿಂದ ₹4 ಸಾವಿರ ಸೇರಿಸಿ ₹10 ಸಾವಿರ ಕೊಡುತ್ತಿದ್ದೇವು. ಆದರೆ, ಈಗ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಅದನ್ನು ನಿಲ್ಲಿಸಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಆರೋಪಿಸಿದರು.
ನಗರದ ಅಲ್ಲಮಪ್ರಭು ಮೈದಾನದಲ್ಲಿ ಸೋಮವಾರ ಬಿಜೆಪಿ ಪಕ್ಷದಿಂದ ಹಮ್ಮಿಕೊಂಡಿದ್ದ ಪ್ರಧಾನಿ ಮೋದಿ ಅವರ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಅವರು ಮಾತನಾಡಿದರು.
ಕಳೆದ 10 ವರ್ಷದಲ್ಲಿ ಭಾರತವನ್ನು ವಿದೇಶಿಗರು ತಿರುಗಿ ನೋಡುವಂತೆ ಮೋದಿ ಅಭಿವೃದ್ಧಿ ಮಾಡಿದ್ದಾರೆ. ಮೋದಿ ನೇತೃತ್ವದಲ್ಲಿ ಐದನೇ ಆರ್ಥಿಕ ಶಕ್ತಿಯಾಗಿ ಬೆಳವಣಿಗೆ ಆಗಿದೆ. ಇನ್ನು ಕೆಲವೇ ವರ್ಷದಲ್ಲಿ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ತಲುಪಲಿದ್ದೇವೆ ಎಂದರು.
ಕಳೆದ ಬಾರಿ ಶಿವಮೊಗ್ಗ ವಿಮಾನ ನಿಲ್ದಾಣದ ಜೊತೆಗೆ ಅನೇಕ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಮೋದಿ ನೀಡಿದ್ದರು. ನನ್ನ ಅಧಿಕಾರಾವಧಿಯಲ್ಲಿ ಮಲೆನಾಡಿನ ಅನೇಕ ಜಲಂತ ಸಮಸ್ಯೆಗಳಿಗೆ ಮುಕ್ತಿ ನೀಡಲಾಗಿದೆ. 15 ವರ್ಷಗಳಲ್ಲಿ ಮಲೆನಾಡಿನಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗಿದೆ ಎಂದು ತಿಳಿಸಿದರು.