ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದ್ದು, ಜಿಲ್ಲಾದ್ಯಂತ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ಕನ್ನಡಪ್ರಭ ವಾರ್ತೆ ಗದಗ

ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದ್ದು, ಜಿಲ್ಲಾದ್ಯಂತ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಯಾವುದೇ ರೀತಿಯ ಚುನಾವಣಾ ಅಕ್ರಮಗಳಿಗೆ ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬುಧವಾರ ಸಂಜೆ ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಯ ಮಾದರಿ ನೀತಿ ಸಂಹಿತೆ ಪಾಲನೆ ಕುರಿತು ಅಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರತ ಚುನಾವಣಾ ಆಯೋಗವು ಪ್ರಕಟಿಸಿದ ವೇಳಾಪಟ್ಟಿಯಂತೆ ಸೆ. 29ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದ್ದು, ಅ. 6 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅ. 7 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅ. 9ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ. ಅ. 23 ರಂದು ಬೆಳಗ್ಗೆ 8ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದ್ದು, ಅ. 27 ರಂದು ಮತಗಳ ಎಣಿಕೆ ನಡೆದು ಅ. 31ರಂದು ಸಂಪೂರ್ಣ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದರು.

ಚುನಾವಣಾ ಪ್ರಕ್ರಿಯೆಯನ್ನು ಸುಗಮ, ಪಾರದರ್ಶಕ ಹಾಗೂ ಶಾಂತಿಯುತವಾಗಿ ನಡೆಸಲು ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಚುನಾವಣೆ ಘೋಷಣೆಯಾದ ಸೆ. 22 ರಿಂದಲೇ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ರಾಜಕೀಯ ಪಕ್ಷಗಳ ಮುಖಂಡರ ಭಾವಚಿತ್ರ ಹೊಂದಿರುವ ಬಂಟಿಂಗ್, ಬ್ಯಾನರ್, ಪೋಸ್ಟರ್‌ಗಳನ್ನು 24 ಗಂಟೆಯೊಳಗೆ ತೆರವುಗೊಳಿಸುವಂತೆ ಸೂಚಿಸಲಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಡಾ. ದುರಗೇಶ ಕೆ.ಆರ್. ಮಾತನಾಡಿ, ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಗೆ ಗದಗ ಜಿಲ್ಲೆಯಲ್ಲಿ ಒಟ್ಟು 23 ಮತದಾನ ಕೇಂದ್ರ ಸ್ಥಾಪಿಸಲಾಗುವುದು. ಜಿಲ್ಲೆಯಲ್ಲಿ 12726 ಪುರುಷರು ಹಾಗೂ 7353 ಮಹಿಳೆಯರು ಸೇರಿದಂತೆ ಒಟ್ಟು 20079 ಪದವೀಧರ ಮತದಾರರು ನೋಂದಾಯಿತರಾಗಿದ್ದಾರೆ ಎಂದು ಮಾಹಿತಿ ನೀಡಿದರು. ಜಿಪಂ ಸಿಇಓ ಮುಕುಲ್ ಜೈನ್ ಮಾತನಾಡಿ, ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಬೇಕು. ವಿಶೇಷವಾಗಿ ಮತದಾನದಿಂದ ದೂರ ಉಳಿಯುವ ಸಾಧ್ಯತೆ ಇರುವ ಮತದಾರರನ್ನು ಪ್ರೇರೇಪಿಸಿ, ಚುನಾವಣಾ ಪ್ರಕ್ರಿಯೆಯಲ್ಲಿ ತಪ್ಪದೇ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಆಹಾರ ಇಲಾಖೆ ಉಪನಿರ್ದೇಶಕ ಎಂ.ಎಸ್. ಪಾಟೀಲ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಎ.ಎ. ಕಂಬಾಳಿಮಠ, ಶ್ರೀನಿವಾಸ ಮೂರ್ತಿ, ವಸಂತ ಮಡ್ಲೂರ, ಎಂ.ಎಂ. ತುಂಬರಮಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.