ತಮ್ಮ ಬದುಕಿನುದ್ದಕ್ಕೂ ತಾಯಿ, ಸಹೋದರಿ, ಹೆಂಡತಿ, ಮಗಳು ಹೀಗೆ ಹತ್ತುಹಲವು ಜವಾಬ್ದಾರಿಗಳನ್ನು ನಿಭಾಯಿಸಿ, ಕುಟುಂಬದ ಜೊತೆಗೆ ಸಮಾಜವನ್ನು ಮುನ್ನಡೆಸುವ ಶಕ್ತಿ ಮಹಿಳೆಯರಿಗಿದೆ. ಅಂತಹ ಮಹಿಳೆಯರು ಸ್ವಾವಲಂಬಿಗಳಾದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು.
ಉಡುಪಿ: ತಮ್ಮ ಬದುಕಿನುದ್ದಕ್ಕೂ ತಾಯಿ, ಸಹೋದರಿ, ಹೆಂಡತಿ, ಮಗಳು ಹೀಗೆ ಹತ್ತುಹಲವು ಜವಾಬ್ದಾರಿಗಳನ್ನು ನಿಭಾಯಿಸಿ, ಕುಟುಂಬದ ಜೊತೆಗೆ ಸಮಾಜವನ್ನು ಮುನ್ನಡೆಸುವ ಶಕ್ತಿ ಮಹಿಳೆಯರಿಗಿದೆ. ಅಂತಹ ಮಹಿಳೆಯರು ಸ್ವಾವಲಂಬಿಗಳಾದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು.
ಅವರು ಜಿಲ್ಲಾಡಳಿತ ವತಿಯಿಂದ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಮಹಿಳೆಯರು ನಾಯಕರಾದರೇ ಯಾವುದೇ ಗೊಂದಲಕ್ಕೆ ಆಸ್ಪದ ನೀಡದೆ ಆಡಳಿತ ನಡೆಸುತ್ತಾರೆ. ಅದಕ್ಕಾಗಿಯೇ ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಗಳಲ್ಲಿ ಮಹಿಳೆಯರಿಗೆ ಶೇ. 33 ಪ್ರಾತಿನಿಧ್ಯತೆ ನೀಡಲಾಯಿತು. ಇಂದಿನ ಸರ್ಕಾರ ಇದನ್ನು ಕಾನೂನಾಗಿ ಪರಿವರ್ತಿಸಿ ಮಹಿಳೆಯರಿಗೆ ನ್ಯಾಯ ಒದಗಿಸಬೇಕು ಎಂದವರು ಅಭಿಪ್ರಾಯಪಟ್ಟರು.
ಜಿಲ್ಲಾ ಮಹಿಳಾ ಮಂಡಳಿಯ ಒಕ್ಕೂಟಕ್ಕೆ ಸ್ವಂತ ಕಟ್ಟಡದ ಅವಶ್ಯಕತೆ ಇದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಸರ್ಕಾರದ ಗಮನ ಸೆಳೆದು ಸ್ವಂತ ಕಟ್ಟಡದ ಕನಸನ್ನು ನನಸು ಮಾಡಲಾಗುವುದು ಎಂದರು.ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಮಾತನಾಡಿ, ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಶೇ. 50 ಆದಾಗ ಸಮಾನತೆಯ ಉದ್ದೇಶ ಸಾಕಾರವಾಗುವುದು, ಮಹಿಳೆಯರು ಸಿಕ್ಕಿರುವ ಅವಕಾಶಗಳನ್ನು ಉಪಯೋಗಿಸಿಕೊಂಡು ನಾಯಕತ್ವ ಗುಣ ತೋರಿಸಬೇಕು ಎಂದರು.ಈ ಸಂದರ್ಭದಲ್ಲಿ ಮಹಿಳೆಯರು ಉತ್ಪಾದಿಸಿದ ವಸ್ತುಗಳ ಮಳಿಗೆಗಳನ್ನು ಅನಾವರಣಗೊಳಿಸಲಾಯಿತು.ಅತ್ಯತ್ತಮ ಸೇವೆಗಾಗಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿವೃತ್ತ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಹೆಣ್ಣು ಮಗಳನ್ನು ಉಳಿಸಿ, ಹೆಣ್ಣು ಮಗಳನ್ನು ಓದಿಸಿ ಸಹಿ ಸಂಗ್ರಹಣೆ ಅಭಿಯಾನ ನಡೆಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ರಕ್ಷಣಾಧಿಕಾರಿ ನಾಗರತ್ನ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಶೋಭಾ ಕಲ್ಕೂರ, ಹಿರಿಯರಾದ ಸರಳ ಕಾಂಚನ್, ಶ್ಯಾಮಲಾ ಸಿ.ಕೆ. ಮತ್ತಿತರರು ಉಪಸ್ಥಿತರಿದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಅನುರಾಧಾ ಹಾದಿಮನಿ ಸ್ವಾಗತಿಸಿ, ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ವಸಂತಿ ರಾವ್ ಕೊರಡ್ಕಲ್ ವಂದಿಸಿ, ಸಂಗೀತ ನಿರೂಪಿಸಿದರು.