ಸಾರಾಂಶ
ಕನ್ನಡಪ್ರಭ ವಾರ್ತೆ ಮಂಗಳೂರು
ವಕ್ಫ್ ಆಸ್ತಿ ಒತ್ತುವರಿ ತೆರವುಗೊಳಿಸಲು 2019ರಲ್ಲಿ ಬಿಜೆಪಿ ಸರ್ಕಾರವೇ ನೋಟಿಸ್ ಜಾರಿ ಮಾಡಿತ್ತು. ಒಕ್ಕಲೆಬ್ಬಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದೂ ಬಿಜೆಪಿಯೇ. ಈಗ ಇದರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದೂ ಕೂಡ ಬಿಜೆಪಿಯೇ. ಇದೇ ಬಿಜೆಪಿಯ ನಿಜಬಣ್ಣ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಟೀಕಿಸಿದ್ದಾರೆ.ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚೂ ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು. ಈಗ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ. ಬಿಜೆಪಿ ಅವಧಿಯಲ್ಲಿ ಸುಮಾರು 216 ವಕ್ಫ್ ಆಸ್ತಿ ಪ್ರಕರಣಗಳಲ್ಲಿ ನೋಟಿಸ್ ನೀಡಲಾಗಿತ್ತು. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಎಚ್.ಡಿ. ಕುಮಾರಸ್ವಾಮಿ ಇದ್ದಾಗ ಏಕೆ ನೋಟಿಸ್ ಕೊಟ್ಟಿದ್ದರು ಎಂದು ಪದ್ಮರಾಜ್ ಪ್ರಶ್ನಿಸಿದರು.ವಕ್ಫ್ ಬೋರ್ಡ್ ಆಸ್ತಿ ವಿಚಾರವಾಗಿ ರೈತರಿಗೆ ಯಾವುದೇ ನೋಟಿಸ್ ನೀಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೊಟ್ಟಿರುವ ನೋಟಿಸನ್ನು ವಾಪಸ್ ಪಡೆಯಲು ಸೂಚಿಸಿದ್ದಾರೆ. ಆದರೂ ಅನಗತ್ಯ ಗೊಂದಲ ಸೃಷ್ಟಿಸಿ ಪ್ರತಿಭಟನೆ, ಹೋರಾಟ ಮಾಡುತ್ತಿರುವುದು ಕರ್ನಾಟಕದ ಉಪಚುನಾವಣೆ ಮತ್ತು ಮಹಾರಾಷ್ಟ್ರದಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಲ್ಲಿ ಗೊಂದಲ ಮೂಡಿಸಲು ಯತ್ನಿಸಿದ್ದಾರೆ ಎಂದು ಟೀಕಿಸಿದರು.