ಸಾರಾಂಶ
ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಪ್ರಚಾರದಲ್ಲಿ ಬಳಸಿಕೊಂಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದವರ ವಿರುದ್ಧ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ವಾಗ್ದಾಳಿ ನಡೆಸಿದ್ದಾರೆ.
ದಾವಣಗೆರೆ : ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳಿಂದಲೇ ಪ್ರಚಾರ ಮಾಡಿದ್ದವರಿಗೆ ಆಗ ಇಲ್ಲದ ಆಕ್ಷೇಪ ಈಗ ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದರ ಬಗ್ಗೆ ಯಾಕಿದೆ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ತಮ್ಮ ಎದುರಾಳಿಗಳ ನಡೆಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ನಗರದ ಕುವೆಂಪು ಕನ್ನಡ ಭವನದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರಕ್ಕೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಪ್ರಣಾಳಿಕೆಯನ್ನೇ ನಾನು ಲೋಕಸಭಾ ಚುನಾವಣಾ ಪ್ರಚಾರ ವೇಳೆ ಹೇಳಿದ್ದೇನೆ. ಈಗ ಅದರ ಬಗ್ಗೆ ಆಕ್ಷೇಪಣೆ ಮಾಡುವುದಕ್ಕೆ ಏನಿದೆ ಎಂದು ಪ್ರಶ್ನಿಸಿದರು.
ಲೋಕಸಭೆ ಚುನಾವಣೆಯಲ್ಲಿ ಸೋತಿರುವ ಹತಾಶೆ ಇದೆ. ಹೈಕೋರ್ಟ್‌ನಿಂದ ನೋಟಿಸ್ ಬಂದ ಬಗ್ಗೆ ನಾನು ಮಾತನಾಡುವುದಿಲ್ಲ. ಜನರಿಗೆ ಯಾವುದು ಸರಿ ಎಂಬುದು ಗೊತ್ತಿದೆ. ಎಸ್.ಎಸ್.ಮಲ್ಲಿಕಾರ್ಜುನ ಮೂರು ಸಲ ಸೋತಿದ್ದಾರೆ. 25 ವರ್ಷಗಳ ಬಳಿಕ ದಾವಣಗೆರೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿದೆ. ಇದು ಯಾಕೆಂಬುದನ್ನು ಸೋತವರೇ ಅರ್ಥ ಮಾಡಿಕೊಳ್ಳಲಿ ಎಂದು ತಮ್ಮ ವಿರುದ್ಧ ಹೈಕೋರ್ಟ್ ಮೊರೆ ಹೋಗಿರುವ ಪರಾಜಿತ ಬಿಜೆಪಿ ಅಭ್ಯರ್ಥಿಗೆ ಸಂಸದೆ ಟಾಂಗ್ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್ ಜಾರಿಗೊಂಡ ಬಗ್ಗೆ ನಾನು ಮಾತನಾಡುವುದಿಲ್ಲ. ಅದು ನ್ಯಾಯಾಲಯದ ಪ್ರಕ್ರಿಯೆಯಾಗಿದೆ. ಆದರೆ, ಸಿದ್ದರಾಮಯ್ಯನವರ ಪರವಾಗಿ ಜಿಲ್ಲಾ ಕಾಂಗ್ರೆಸ್ ಇರುತ್ತದೆ. ನಾವು ಈಗಾಗಲೇ ಈ ಮಾತನ್ನು ಹೇಳಿಯೂ ಆಗಿದೆ ಎಂದು ಡಾ.ಪ್ರಭಾ ಮಲ್ಲಿಕಾರ್ಜುನ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
- - - (ಫೋಟೋ: ಡಾ.ಪ್ರಭಾ, ಸಂಸದೆ)