ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ನಿಗಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಶಾಸಕ ಸುರೇಶ್‌ಗೌಡ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಸೌಲಭ್ಯ ಒದಗಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ ವಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡಪ್ರಭ ವಾರ್ತೆ ತುಮಕೂರು
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ನಿಗಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಶಾಸಕ ಸುರೇಶ್‌ಗೌಡ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಸೌಲಭ್ಯ ಒದಗಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ ವಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಶುಕ್ರವಾರ ತುಮಕೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಸುರೇಶ್‌ಗೌಡರ ಅಧ್ಯಕ್ಷತೆಯಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ದೇವರಾಜ ಆರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕರ್ನಾಟಕ ಅದಿ ಜಾಂಬವ ಅಭಿವೃದ್ಧಿ ನಿಗಮ, ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ತಾಂಡ ಅಭಿವೃದ್ಧಿ ನಿಗಮ ಮತ್ತಿತರ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.2023-24, 2024-25 ಮತ್ತು 2025-26 ನೇ ಸಾಲಿನ ಯೋಜನೆಗಳು ಹಾಗೂ ಹಾಗೂ ಇನ್ನಿತರ ಸೌಲಭ್ಯಗಳ ಕುರಿತಂತೆ ಪ್ರಗತಿ ಪರಿಶೀಲನೆ ನಡೆಸಿದರು.ಬಹುತೇಕ ನಿಗಮಗಳು ತಮ್ಮ ವಾರ್ಷಿಗ ಗುರಿ ಸಾಧಿಸಿಲ್ಲ. ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳನ್ನು ಆಯ್ಕೆ ಮಾಡಿ ಅವರಿಗೆ ಕೊಳವೆಬಾವಿ ಕೊರೆಯುವುದರಲ್ಲಿ ಆಸಕ್ತಿ ತೋರಿಸಿಲ್ಲ. ಈಗಾಗಲೇ ಕೊರೆದಿರುವ ಪ್ರಕರಣಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸದೆ ನಿರ್ಲಕ್ಷ ಮಾಡಿರುವುದನ್ನು ಗಮನಿಸಿದ ಶಾಸಕರು, ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸಿಲ್ಲ ಏಕೆ? ಎಂದು ಶಾಸಕ ಸುರೇಶ್‌ಗೌಡ ಖಾರವಾಗಿ ಪ್ರಶ್ನಿಸಿದರು. ಶಾಸಕರ ಪ್ರಶ್ನೆಗೆ ಸಮರ್ಪಕ ಉತ್ತರ ನೀಡುವಲ್ಲಿ ಅಧಿಕಾರಿಗಳು ವಿಫಲರಾದರು. ಸರ್ಕಾರದ ಕಾರ್ಯಕ್ರಮಗಳನ್ನು ಫಲಾನುಭವಿಗಳಿಗೆ ತಲುಪಿಸುವಲ್ಲಿ ತೀವ್ರ ನಿರ್ಲಕ್ಷ, ನಿರಾಸಕ್ತಿ ವಹಿಸಿದ್ದೀರಿ ಎಂದು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.
ಸಾರಥಿ ಪಲಾನುಭವಿಗಳಿಗೆ ನೇರಸಾಲ, ಗಂಗಾಕಲ್ಯಾಣ ಯೋಜನೆ, ಸ್ವಾವಲಂಬಿ ಯೋಜನೆ, ಮುಂತಾದ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಫಲಾನುಭವಿಗಳಿಂದ, ರೈತರಿಂದ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸೌಲಭ್ಯಗಳನ್ನು ತಲುಪಿಸಬೇಕು. ಲಂಚ ಪಡೆದು ಸವಲತ್ತು ನೀಡಿದರೆ ಸಹಿಸುವುದಿಲ್ಲ ಎಂದು ಶಾಸಕರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀನಾರಾಯಣಸ್ವಾಮಿ, ಸಹಾಯಕ ನಿರ್ದೇಶಕ ಮಂಜುನಾಥ್, ತಾಲ್ಲೂಕು ಪಂಚಾಯ್ತಿ ಯೋಜನಾಧಿಕಾರಿ ಲೋಕೇಶ್, ದೇವರಾಜು ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಪಕರಾದ ವೆಂಕಟರಾಜು ಸೇರಿದಂತೆ ವಿವಿಧ ನಿಗಮಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.