ಗ್ಯಾರಂಟಿಗೆ ಮರುಳಾಗದೆ ರಾಘವೇಂದ್ರ ಗೆಲ್ಲಿಸಿ: ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ

| Published : Apr 30 2024, 02:11 AM IST

ಗ್ಯಾರಂಟಿಗೆ ಮರುಳಾಗದೆ ರಾಘವೇಂದ್ರ ಗೆಲ್ಲಿಸಿ: ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ಬಹಿರಂಗ ಸಭೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಸೇರಿ ಇನ್ನಿತರರು ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಭದ್ರಾವತಿ

ರಾಜ್ಯದ ಕಾಂಗ್ರೆಸ್ ಸರ್ಕಾರದ ಯೋಜನೆಗಳಿಗೆ ಮತದಾರರು ಮರುಳಾಗದೆ, ದೇಶದಲ್ಲಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವ ನಿಟ್ಟಿನಲ್ಲಿ ಈ ಬಾರಿ ಚುನಾವಣೆಯಲ್ಲಿ ಸಂಸದ ಬಿ.ವೈ ರಾಘವೇಂದ್ರರನ್ನು ಬೆಂಬಲಿಸುವಂತೆ ಜಾತ್ಯತೀತ ಜನತಾದಳ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರ ಸ್ವಾಮಿ ಮನವಿ ಮಾಡಿದರು.

ಅವರು ಸೋಮವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿ, ಈ ಬಾರಿ ಸಹ ಕೇಂದ್ರದಲ್ಲಿ ನರೇಂದ್ರ ಮೋದಿಯವರ ಸರ್ಕಾರ ಬರುವುದು ಬಹುತೇಕ ಖಚಿತವಾಗಿದೆ ಎಂದರು.

ರಾಜ್ಯದ ಸರ್ಕಾರದ ದುರಾಡಳಿತ ಕೊನೆಯಾಗಬೇಕು. ಈ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಜಾತ್ಯತೀತ ಜನತಾದಳ ಹೋರಾಟ ನಡೆಸುತ್ತಿವೆ. ಈ ಹಿನ್ನೆಲೆ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಈ ಬಾರಿ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶಕ್ತಿ ಮೀರಿ ಶ್ರಮಿಸಬೇಕೆಂದರು.

ಭಾರತೀಯ ಜನತಾದಳ ಅಭ್ಯರ್ಥಿ ಬಿ.ವೈ ರಾಘವೇಂದ್ರ ಮಾತನಾಡಿ, ಕಳೆದ 10 ವರ್ಷಗಳ ನನ್ನ ಅವಧಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಶಕ್ತಿ ಮೀರಿ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದೇನೆ. ಪ್ರತಿಯೊಬ್ಬರ ಏಳಿಗೆ ಬಯಸುವ ಪಕ್ಷ ನಮ್ಮದಾಗಿದೆ. ಕಾಂಗ್ರೆಸ್ ಪಕ್ಷದ ಸುಳ್ಳು ಭರವಸೆಗಳಿಗೆ ಮತದಾರರು ಕಿವಿಗೊಡಬಾರದು. ದೇಶದ ಭವಿಷ್ಯದ ದೃಷ್ಟಿಯಿಂದ ಈ ಬಾರಿ ಚುನಾವಣೆಯಲ್ಲಿ ಪುನಃ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿಸುವ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸಬೇಕೆಂದರು.

ವೇದಿಕೆಯಲ್ಲಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದ ಪರ‍್ಯನಾಯ್ಕ, ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ, ಬಿಜೆಪಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸಿ. ಮಂಜುಳ, ಮಾಜಿ ಶಾಸಕ ರಘುಪತಿ ಭಟ್, ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಜೆಡಿಎಸ್ ನಗರ ಅಧ್ಯಕ್ಷ ಆರ್. ಕರುಣಾಮೂರ್ತಿ, ಗ್ರಾಮಾಂತರ ಅಧ್ಯಕ್ಷ ಧರ್ಮಕುಮಾರ್, ಮುಖಂಡರುಗಳಾದ ವಿ. ಕದಿರೇಶ್ ಜೆ.ಪಿ ಯೋಗೇಶ್, ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್ ಸೇರಿದಂತೆ ಜೆಡಿಎಸ್ ಮತ್ತು ಬಿಜೆಪಿ ಎರಡೂ ಪಕ್ಷಗಳ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರುಗಳು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.