ರೈತರನ್ನು ಒಕ್ಕಲೆಬ್ಬಿಸುವ ಉದ್ದೇಶದಿಂದ ಭಯದ ವಾತಾವರಣ ಸೃಷ್ಟಿ : ಶಿವಕುಮಾರ್

| Published : Feb 21 2025, 12:50 AM IST

ಸಾರಾಂಶ

ಭದ್ರಾವತಿ: ಅರಣ್ಯ ಮತ್ತು ಕಂದಾಯ ಇಲಾಖೆಗಳು ರೈತರನ್ನು ಒಕ್ಕಲೆಬ್ಬಿಸುವ ಉದ್ದೇಶದಿಂದ ಭಯದ ವಾತಾವರಣ ಉಂಟು ಮಾಡುತ್ತಿವೆ. ಇದಕ್ಕೆ ಯಾರು ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ ಬ್ಯಾಂಕ್) ಅಧ್ಯಕ್ಷ ಬಿ.ಕೆ.ಶಿವಕುಮಾರ್ ಹೇಳಿದರು.

ಭದ್ರಾವತಿ: ಅರಣ್ಯ ಮತ್ತು ಕಂದಾಯ ಇಲಾಖೆಗಳು ರೈತರನ್ನು ಒಕ್ಕಲೆಬ್ಬಿಸುವ ಉದ್ದೇಶದಿಂದ ಭಯದ ವಾತಾವರಣ ಉಂಟು ಮಾಡುತ್ತಿವೆ. ಇದಕ್ಕೆ ಯಾರು ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ ಬ್ಯಾಂಕ್) ಅಧ್ಯಕ್ಷ ಬಿ.ಕೆ.ಶಿವಕುಮಾರ್ ಹೇಳಿದರು.

ತಾಲೂಕಿನ ಬೆಳ್ಳಿಗೆರೆ, ಉದಯನಗರ ಮತ್ತು ಬದನೆಹಾಳ್ ಗ್ರಾಮಗಳ ಹೊಳೆಹೊನ್ನೂರು ಹೋಬಳಿ ರೈತರ ಹಿತ ರಕ್ಷಣಾ ಸಮಿತಿಯಿಂದ ಅರಣ್ಯ ಮತ್ತು ಕಂದಾಯ ಇಲಾಖೆಗಳ ರೈತ ವಿರೋಧಿ ನೀತಿಯನ್ನು ಖಂಡಿಸಿ ಗುರುವಾರ ತಾಲೂಕು ಕಚೇರಿ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು. ರೈತರು ಕಳೆದ ಸುಮಾರು ೬೫-೭೦ ವರ್ಷಗಳಿಂದ ಸಾಗುವಳಿ ಪತ್ರ ಪಡೆದು ಪಹಣಿ ಮತ್ತು ಇತರೆ ಎಲ್ಲಾ ದಾಖಲೆಗಳನ್ನು ಹೊಂದಿದ್ದರೂ ರೈತರ ಜಮೀನುಗಳಿಂದ ಒಕ್ಕಲೆಬ್ಬಿಸಲು ಮುಂದಾಗಿರುವುದು ಖಂಡನೀಯ. ರೈತರಲ್ಲಿ ಭಯ ಹುಟ್ಟಿಸುವ ನಿಟ್ಟಿನಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಗಳು ವರ್ತಿಸುತ್ತಿವೆ. ಇದರ ವಿರುದ್ಧ ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗಿದೆ. ರೈತರ ಜೊತೆ ಕಾಂಗ್ರೆಸ್ ಪಕ್ಷ ಹಾಗೂ ಶಾಸಕರು ಇದ್ದಾರೆ ಎಂದರು. ನಗರಸಭೆ ಸದಸ್ಯ ಬಿ.ಕೆ.ಮೋಹನ್ ಮಾತನಾಡಿ, ತಾಲೂಕಿನ ಅರಣ್ಯ ವ್ಯಾಪ್ತಿಯಲ್ಲಿರುವ ಬಹುತೇಕ ಗ್ರಾಮಗಳ ರೈತರಿಗೆ ನೋಟಿಸ್ ನೀಡುವ ಮೂಲಕ ಭಯ ಹುಟ್ಟಿಸುವ ಕೆಲಸ ಮಾಡಲಾಗುತ್ತಿದೆ. ಇದಕ್ಕೆ ಯಾರು ಹೆದರುವ ಅಗತ್ಯವಿಲ್ಲ. ನಮ್ಮ ಹೋರಾಟ ನಾವು ಮುಂದುವರೆಸುವ ಮೂಲಕ ಅರಣ್ಯ ಮತ್ತು ಕಂದಾಯ ಇಲಾಖೆಗಳಿಗೆ ಎಚ್ಚರಿಕೆ ನೀಡಬೇಕೆಂದರು. ಪ್ರತಿಭಟನೆಯಲ್ಲಿಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್.ಕುಮಾರ್, ನಗರಸಭೆ ಸದಸ್ಯ ಚನ್ನಪ್ಪ, ಸೂಡಾ ಸದಸ್ಯ ಎಚ್.ರವಿಕುಮಾರ್, ಯುವ ಮುಖಂಡ ಬಿ.ಎಸ್.ಗಣೇಶ್, ಸಿ.ಜಯಪ್ಪ, ಮುರುಗೇಶ್, ಜುಂಜ್ಯಾನಾಯ್ಕ ಸೇರಿದಂತೆ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಹಾಗೂ ರೈತರು ಪಾಲ್ಗೊಂಡಿದ್ದರು.