ಕನ್ನಡಪ್ರಭ ವಾರ್ತೆ ಶಿವಮೊಗ್ಗ

ರಾಜ್ಯದಲ್ಲಿನ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಹರಿಜನ ಮತ್ತು ಗಿರಿಜನ ಫಲಾನುಭವಿಗಳು ತಮ್ಮ ಜಾತಿ ಪ್ರಮಾಣ ಪತ್ರವನ್ನು ಆಯಾ ನ್ಯಾಯಬೆಲೆ ಅಂಗಡಿಗಳಿಗೆ ನೀಡಿ ಮ್ಯಾಪಿಂಗ್ ಮಾಡಿಸಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯದರ್ಶಿಗಳು ಹೊರಡಿಸಿರುವ ಸುತ್ತೋಲೆಯಿಂದ ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ ಒಳಗಾಗಿದ್ದು, ಕೂಡಲೇ ಈ ಸುತ್ತೋಲೆಯನ್ನು ವಾಪಾಸ್ ಪಡೆಯಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಆಗ್ರಹಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆಹಾರ ಇಲಾಖೆಯ ಮೇಲಾಧಿಕಾರಿಗಳ ಎಡಬಿಡಂಗಿ ನಿರ್ದೇಶನದಿಂದಾಗಿ ಫಲಾನುಭವಿಗಳು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ನ್ಯಾಯ ಬೆಲೆ ಅಂಗಡಿಗಳ ಮಾಲೀಕರು ಒತ್ತಾಯ ಮಾಡುತ್ತಿದ್ದಾರೆ. ಆದರೆ, ಇದು ಯಾವ ಕಾರಣಕ್ಕೆ ಎಂಬ ಮಾಹಿತಿಯನ್ನು ಸುತ್ತೋಲೆಯಲ್ಲಿ ತಿಳಿಸಿಲ್ಲ ಎಂದು ಆರೋಪಿಸಿದರು.

ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಎಸ್‌ಸಿ, ಎಸ್‌ಟಿ ಫಲಾನುಭವಿಗಳು ಆಯಾ ತಾಲೂಕು ಮತ್ತು ನಾಡಾ ಕಚೇರಿಗೆ ಜಾತಿ ಪ್ರಮಾಣ ಪತ್ರ ಮಾಡಿಸಲು ಬೆಳಗ್ಗೆಯಿಂದ ಸಂಜೆಯವರೆಗೆ ಅಲೆಯುವಂತಾಗಿದೆ ಎಂದರು.

ಜಾತಿ ಪ್ರಮಾಣ ಪತ್ರ ಮಾಡಿಸಿ ಕೊಡದೆ ಹೋದರೆ ಫಲಾನುಭವಿಗಳಿಗೆ ನೀಡುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಸ್ಥಗಿತಗೊಳ್ಳಬಹುದು ಎಂಬ ಆತಂಕದಲ್ಲಿ ಫಲಾನುಭವಿಗಳು ಜಾತಿ ಪ್ರಮಾಣ ಪತ್ರಕ್ಕಾಗಿ ಕಚೇರಿಗೆ ಅಲೆಯುತ್ತಿದ್ದಾರೆ. ಆದ್ದರಿಂದ ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು.


ಗೋಷ್ಠಿಯಲ್ಲಿ ಪ್ರಮುಖರಾದ ಎಚ್.ಎಂ.ಸಂಗಯ್ಯ, ಶಂಕ್ರನಾಯ್ಕ, ಎಲ್.ಆದಿಶೇಷ, ಚಂದ್ರಪ್ಪ, ಅಲೀಂ ಖಾನ್ ಇದ್ದರು.