ಸಾರಾಂಶ
ಭ್ರೂಣ ಹತ್ಯೆ ನಿಷೇಧ ಮತ್ತು ನಿಯಂತ್ರಣ ಕಾಯ್ದೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಅರಿವು ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಹೆಣ್ಣು ಮಕ್ಕಳನ್ನು ಭ್ರೂಣದಲ್ಲಿ ಹತ್ಯೆ ಮಾಡುವುದು ಅಪರಾಧ. ಹೆಣ್ಣು ಮತ್ತು ಗಂಡು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಸಮಾನವಾಗಿ ಗೌರವಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಹನುಮಂತಪ್ಪ ಹೇಳಿದರು.
ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ನಗರದ ಡಿಎಸಿಜಿ ಸರ್ಕಾರಿ ಪಾಲಿಟೆಕ್ನಿಕ್ ಸಭಾಂಗಣದಲ್ಲಿ ನಡೆದ ಭ್ರೂಣ ಹತ್ಯೆ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಕುರಿತ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದಾರಿ ತಪ್ಪುತ್ತಿದ್ದಾರೆ. ಮಕ್ಕಳು ಶಾಲಾ ಅವಧಿಯಲ್ಲಿ ಶಿಕ್ಷಣದ ಕಡೆಗೆ ಗಮನ ನೀಡಬೇಕು. ಜೀವನದಲ್ಲಿ ಮಕ್ಕಳು ಗುರಿ ಇಟ್ಟುಕೊಂಡು ವಿದ್ಯಾಭ್ಯಾಸ ಮಾಡಬೇಕು. ಗುರಿ ಸಾಧಿಸುವವರೆಗೆ ಪ್ರಯತ್ನ ಬಿಡಬಾರದು ಎಂದು ಕರೆ ನೀಡಿದರು.
ಸಂವಿಧಾನದ ಆಶಯದಂತೆ ಕಾನೂನಾತ್ಮಕವಾಗಿ ಮಕ್ಕಳನ್ನು ರಕ್ಷಣೆ ಮಾಡಬೇಕು. ಸರ್ಕಾರ ಮಕ್ಕಳ ರಕ್ಷಣೆ ಕುರಿತು ಹಲವಾರು ಯೋಜನೆ ಜಾರಿ ಮಾಡಿದ್ದು, ಮಕ್ಕಳು ಬೆಳೆದು ಸಮುದಾಯ ರಾಜ್ಯ, ದೇಶ ಮುನ್ನಡೆಸಬೇಕು. ಗ್ರಾಮೀಣ ಭಾಗ ಗಳಲ್ಲಿ ಬಾಲ್ಯ ವಿವಾಹದ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿವೆ. 18 ವರ್ಷದೊಳಗಿನ ಹೆಣ್ಣು ಹಾಗೂ 21 ವರ್ಷದೊಳಗಿನ ಗಂಡು ಮಕ್ಕಳಿಗೆ ವಿವಾಹ ಮಾಡಿಸುವುದು ಶಿಕ್ಷಾರ್ಹ ಅಪರಾಧ ಎಂದರು.ಮಕ್ಕಳು ನಮ್ಮ ನಡುವೆ ಓಡಾಡುವ ಚೇತನಗಳು, ಅವರ ರಕ್ಷಣೆ ಪ್ರತಿಯೊಬ್ಬರ ಜವಬ್ದಾರಿ. ಮಕ್ಕಳನ್ನು ರಕ್ಷಣೆ ಮಾಡುವುದು ತಾಯಿ ಗರ್ಭದಲ್ಲಿರುವಾಗಲೇ ಹಲವಾರು ಕಾನೂನಾತ್ಮಕ ರಕ್ಷಣೆ ಹಾಗೂ ಯೋಜನೆಗಳ ಫಲ ಪಡೆದು ಜನಿಸುತ್ತದೆ. ಮಕ್ಕಳು ದೇಶದ ಆಸ್ತಿ, ಮಕ್ಕಳು ನಂಬಿಕೆ, ನೆಮ್ಮದಿ, ಸುಖ ಸಂತೋಷದ ಹಾಗೂ ಕಲಿಯುವ ವಾತಾವರಣ ದಲ್ಲಿ ಬೆಳೆದು ಬಂದರೆ ಅವರಿಗೆ ಅರ್ಥಪೂರ್ಣ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಿಎಸಿಜಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಶುಂಪಾಲ ಟಿ.ಆರ್. ಶ್ರೀಧರಮೂರ್ತಿ ಮಾತನಾಡಿ, ನಾವು ಪ್ರತಿದಿನ ಮಕ್ಕಳಿಗೆ ಪಠ್ಯದ ಬಗ್ಗೆ ಮಾಹಿತಿ ನೀಡುತ್ತಿರುತ್ತೇವೆ ಆದರೆ ಇಂದು ನ್ಯಾಯಾಧೀಶರು ಮಕ್ಕಳಿಗೆ ತಮ್ಮ ಅನುಭವ ಮತ್ತು ಪ್ರಕರಣದ ಉದಾಹರಣೆ ನೀಡಿ ಅರ್ಥ ಗರ್ಭಿತ ಮಾಹಿತಿ ನೀಡಿರುತ್ತಾರೆ. ಎಲ್ಲಾ ವಿದ್ಯಾರ್ಥಿ ಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಮಹಾಂತೇಶ್ ಭಜಂತ್ರಿ ಮಾತನಾಡಿ, ಸಂವಿಧಾನದ ಡಿ ಮಕ್ಕಳಿಗೂ ಕೂಡಾ ಹಕ್ಕುಗಳಿದ್ದು ಅವುಗಳ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಮಕ್ಕಳಿಗೆ ಸಮಸ್ಯೆ ಬಂದ ಸಮಯ ದಲ್ಲಿ ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡಿದ್ದಲ್ಲಿ ತುರ್ತಾಗಿ ಸ್ಪಂದಿಸಿ ಮಕ್ಕಳ ರಕ್ಷಣೆ ಮಾಡಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪಿ. ಲೋಕೇಶ್ವರಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಸಂತೋಷ್, ಡಿಎಸಿಜಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಯಾಂತ್ರಿಕ ವಿಭಾಗ ವಿಭಾಗಾಧಿಕಾರಿ ಡಾ. ಸುನೀಲ್‌ಕುಮಾರ್ ಉಪಸ್ಥಿತರಿದ್ದರು. 9 ಕೆಸಿಕೆಎಂ 2ಚಿಕ್ಕಮಗಳೂರಿನ ಡಿಎಸಿಜಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಅರಿವು ಕಾರ್ಯಕ್ರಮವನ್ನು ನ್ಯಾ. ಹನುಮಂತಪ್ಪ ಉದ್ಘಾಟಿಸಿದರು.