ಸಾರಾಂಶ
ಕೊಪ್ಪಳ:
ಗೃಹಲಕ್ಷ್ಮೀ, ಶಕ್ತಿ ಯೋಜನೆಯಿಂದ ಮಹಿಳೆ ಸದೃಢ ಆಗಿದ್ದಾಳೆ ಎಂದು ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು.ನಗರದ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಜೀಂ ಪ್ರೇಮಜೀ ಫೌಂಡೇಶನ್, ಭಾಗ್ಯನಗರದ ವಾಸವಿ ಕ್ಲಬ್ ಹಾಗೂ ಪಾನಘಂಟಿ ಫೌಂಡೇಶನ್ ಸಹಯೋಗದಲ್ಲಿ ಜರುಗಿದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಿಳಾ ಶಿಕ್ಷಣಕ್ಕಾಗಿ ಹೋರಾಡಿದ ಸಾವಿತ್ರಿಬಾಯಿಫುಲೆ ಅವರ ತತ್ವಾದರ್ಶ ಅಳವಡಿಸಿಕೊಂಡು ಸಮಾಜದ ಪರಿವರ್ತನೆ, ಅಭಿವೃದ್ಧಿಗೆ ಶ್ರಮಿಸಬೇಕು. ಮಹಿಳೆಯರು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಅಭಿವೃದ್ಧಿ ಹೊಂದಿದರೆ ಈ ದೇಶ ಅಭಿವೃದ್ಧಿಯಾಗಲಿದೆ ಎಂದರು.ರಾಜ್ಯ ಸರ್ಕಾರ ಜಾರಿಗೆ ತಂದ ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರು ಆರ್ಥಿಕವಾಗಿ ಸದೃಢರಾಗಿದ್ದಾರೆ. ಶಕ್ತಿ ಯೋಜನೆ ಮಹಿಳೆಯರಿಗೆ ನಿತ್ಯದ ಓಡಾಟದ ಜತೆಗೆ ಐತಿಹಾಸಿಕ ಮತ್ತು ಪುಣ್ಯಸ್ಥಳಗಳ ಭೇಟಿಗೂ ಅನುಕೂಲವಾಗಿದೆ ಎಂದರು.
ಜಿಲ್ಲಾಧಿಕಾರಿ ನಲಿನ್ ಅತುಲ್ ಮಾತನಾಡಿ, ಮಕ್ಕಳ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಕಾರ್ಯ ನಿರ್ವಹಿಸುವಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ. ಉದ್ಯೋಗಸ್ತ ಮಹಿಳೆಯರಿಗೆ ಹೆರಿಗೆ ರಜೆ ವಿಸ್ತರಿಸಿ ಅನುಕೂಲ ಕಲ್ಪಿಸಿದೆ ಎಂದು ಹೇಳಿದರು.ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ದರಗದ ಮಾತನಾಡಿ, ಶರಣರ ವಚನಗಳಲ್ಲಿ ಹೆಣ್ಣುಮಕ್ಕಳ ಶ್ರಮ ಮತ್ತು ಕೆಲಸ ಕಾರ್ಯಗಳ ಕುರಿತು ವರ್ಣಿಸಲಾಗಿದೆ. ಮಹಿಳೆಯರು ಆರ್ಥಿಕವಾಗಿ ಮುಂದುವರೆಯಲು ಉದ್ಯೋಗದ ಅವಶ್ಯಕತೆ ಮುಖ್ಯವಾಗಿದೆ. ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಸಮಾಜದ ಪರಿವರ್ತನೆಗೆ ಮಹಿಳೆಯರ ಪಾತ್ರ ಪ್ರಮುಖವಾಗಿದೆ ಎಂದರು.
ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೇಯ ಮಾತನಾಡಿ, ಸರ್ಕಾರ ಬಜೆಟ್‌ನಲ್ಲಿ ಮಹಿಳೆಯರ ಅಭಿವೃದ್ಧಿಗೆ ಒತ್ತು ನೀಡಿ ಸ್ವ-ಸಹಾಯ ಸಂಘಗಳಿಂದ ಸಾಲ ಪಡೆದು ವಿವಿಧ ಉದ್ಯಮಗಳಲ್ಲಿ ತೊಡಗಿ ಆರ್ಥಿಕವಾಗಿ ಸದೃಢರಾಗಲು ಸಹಾಯಕವಾಗಿದೆ. ಮಕ್ಕಳ ಲಾಲನೆ-ಪಾಲನೆಯಲ್ಲಿ ಜಿಲ್ಲೆಯ ಅಂಗನವಾಡಿ ಶಾಲೆಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಥಮ ಸ್ಥಾನದಲ್ಲಿವೆ ಎಂದು ಹೇಳಿದರು.ಪ್ರಶಸ್ತಿ ಪ್ರದಾನ:
ವಿವಿಧ ಕೇತ್ರಗಳಲ್ಲಿ ಸಾಧನಗೈದ ಮಕ್ಕಳಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಇಲಾಖೆಯಡಿಯಲ್ಲಿ ಅತ್ಯುತ್ತಮ ಕೆಲಸ ಕಾರ್ಯ ನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಅಂಗನವಾಡಿ ಸಹಾಯಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗೆ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಮಹಿಳಾ ಮತ್ತು ಮಕ್ಕಳ ಉಪನಿರ್ದೇಶಕ ಪರುಶುರಾಮ ವೈ ಶೆಟ್ಟೆಪ್ಪನವರ, ಜಿಲ್ಲಾ ನಿರೂಪಣಾಧಿಕಾರಿ ಗಂಗಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತೇಶ ಪೂಜಾರ, ಯುನಿಸೆಫ್ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆಯ ಹರೀಶ ಜೋಗಿ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಯೋಜನಾಧಿಕಾರಿ ಅನ್ನಪೂರ್ಣ ಸೇರಿದಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಿಬ್ಬಂದಿ, ಮಹಿಳೆಯರಿದ್ದರು.