ಸಾರಾಂಶ
ಚಿಕ್ಕಮಗಳೂರು, ಹೆಣ್ಣು ಸಮಾಜದ ಕಣ್ಣಾಗಿ ಎಲ್ಲಾ ಕ್ಷೇತ್ರದಲ್ಲೂ ಮುಖ್ಯ ವಾಹಿನಿಯಲ್ಲಿರುವುದು ದೊಡ್ಡ ಹೆಮ್ಮೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು.
ಸಂತ ಜೋಸೆಫರ ಬಾಲಕಿಯರ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಹೆಣ್ಣು ಸಮಾಜದ ಕಣ್ಣಾಗಿ ಎಲ್ಲಾ ಕ್ಷೇತ್ರದಲ್ಲೂ ಮುಖ್ಯ ವಾಹಿನಿಯಲ್ಲಿರುವುದು ದೊಡ್ಡ ಹೆಮ್ಮೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಸಂತ ಜೋಸೆಫರ ಬಾಲಕಿಯರ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳ ಲಾಗಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಹೆಣ್ಣು ಸಮಾಜದ ಕಣ್ಣು, ಬದುಕಿನ ಎಲ್ಲಾ ಸವಾಲು ಎದುರಿಸುವ ಗಟ್ಟಿತನ ಅವರಲ್ಲಿದೆ. ಸಮಾಜದಲ್ಲಿ ಮಹಿಳೆಯರ ಸ್ಥಿತಿಗತಿ ಸುಧಾರಣೆಗೆ ದಿಟ್ಟ ಹೆಜ್ಜೆ ಇಡಬೇಕು. ಎಲ್ಲಾ ಕಷ್ಟದ ದಿನಗಳನ್ನು ಎದುರಿಸಿ ಎಲ್ಲಾ ಕ್ಷೇತ್ರಗಳಲ್ಲೂ ತನ್ನ ಛಾಪು ಮೂಡಿಸುವ ಮಹಿಳೆಯರ ಸ್ಥೈರ್ಯದ ವಿವರಣೆಗೆ ಬೇರೆ ಪದಗಳು ಬೇಕಿಲ್ಲ. ಮಗಳಾಗಿ, ಪತ್ನಿಯಾಗಿ, ತಾಯಿಯಾಗಿ, ಸ್ನೇಹಿತೆಯಾಗಿ ಎಲ್ಲಾ ಸಂಬಂಧಗಳನ್ನು ತುಂಬುವ ಮಹಿಳೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಂದು ದಿನ ಮೀಸಲಿರಿಸಿದೆ ಎಂದರು.ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳು, ಮಹಿಳೆಯರ ಮೇಲೆ ನಿರಂತರವಾಗಿ ಶೋಷಣೆ, ದೌರ್ಜನ್ಯ ನಡೆಯುತ್ತಿವೆ. ಇದನ್ನು ತಡೆಯಲು ಜಾಗೃತಿ ಮೂಡಿಸುವ ಅಗತ್ಯವಿದೆ. ಈ ದಿನಾಚರಣೆ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು ಎಂದ ಅವರು, ಮನೆಗಳಲ್ಲೇ ಹೆಣ್ಣು, ಗಂಡು ಎಂಬ ತಾರತಮ್ಯ ಕಾಣುತ್ತೇವೆ. ಹೆಣ್ಣು ಭ್ರೂಣ ಹತ್ಯೆಯಂತಹ ಘಟನೆಗಳಿಂದಾಗಿ ಹೆಣ್ಣುಮಕ್ಕಳ ನಶಿಸುವಿಕೆಗೆ ಕಾರಣವಾಗಿದೆ. ಹೆಣ್ಣು ಮಕ್ಕಳ ಸಂರಕ್ಷಣೆಗೆ ಹಲವಾರು ಕಾನೂನುಗಳು ಜಾರಿಗೆ ಬಂದಿವೆ. ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರದಲ್ಲಿ ತಮ್ಮನ್ನು ತಾವು ಗುರುತಿಸಿ ಕೊಂಡಿದ್ದು. ಪುರುಷರಿಗಿಂತ ಅವರು ಯಾವುದರಲ್ಲೂ ಕಡಿಮೆಯಿಲ್ಲ ಎಂಬುದನ್ನು ಇಡೀ ದೇಶಕ್ಕೆ ತೋರಿಸಿ ಕೊಟ್ಟಿರುವ ಉದಾಹರಣೆಗಳಿವೆ ಎಂದು ಹೇಳಿದರು.ಸರ್ಕಾರ ಹೆಣ್ಣು ಮಕ್ಕಳ ರಕ್ಷಣೆಗೆ ಹಲವಾರು ಕಾನೂನುಗಳನ್ನು ಜಾರಿಗೆ ತಂದಿದೆ. ಉಚಿತ ಶಿಕ್ಷಣ, ಬೇಟಿ ಬಚಾವೋ ಬೇಟಿ ಪಡಾವೋ ಮುಂತಾದ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು. ಕಾರ್ಯಕ್ರಮದಲ್ಲಿ ಸಂತ ಜೋಸೆಫರ ಕಾನ್ವೆಂಟ್ ಬಾಲಕಿಯರ ಪ್ರೌಢಶಾಲೆ ಸಹ ಶಿಕ್ಷಕ ವಿನ್ಸೆಂಟ್ ಮಾರ್ಟಿಸ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ. ರಂಗನಾಥ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೂಪಾ ಕುಮಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಪಿ. ಲೋಕೇಶ್ವರಪ್ಪ, ಜಿಲ್ಲಾ ಮಹಿಳಾ ಮಕ್ಕಳ ಅಭಿವೃದ್ಧಿ ಅಧಿಕಾರಿ ಡಿ. ಸಂತೋಷ್ ಉಪಸ್ಥಿತರಿದ್ದರು.ಕಾರ್ಯಕ್ರಮಕ್ಕೂ ಮೊದಲು ನಗರದ ತಹಸೀಲ್ದಾರ್ ಕಚೇರಿಯಿಂದ ಜಾಥಾ ಹಮ್ಮಿಕೊಳ್ಳಲಾಗಿತ್ತು. ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಕರ ಮಹಾಂತೇಶ್ ಭಜಂತ್ರಿ ಅವರು ಜಾಥಾಕ್ಕೆ ಹಸಿರು ನಿಶಾನೆ ತೋರಿಸಿದರು. 25 ಕೆಸಿಕೆಎಂ 1ಚಿಕ್ಕಮಗಳೂರಿನ ಸಂತ ಜೋಸೆಫರ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ನ್ಯಾ. ಹನುಮಂತಪ್ಪ ಅವರು ಉದ್ಘಾಟಿಸಿದರು. ಲೋಕೇಶ್ವರಪ್ಪ, ಸಿ. ರಂಗನಾಥ್ ಇದ್ದರು.