ಕನಿಷ್ಠ ವೇತನ ಜಾರಿ ಹಾಗೂ ಸೇವೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಗದಗ-ಬೆಟಗೇರಿ ನಗರಸಭೆಯಲ್ಲಿ ಕಸ ಸಂಗ್ರಹಿಸುವ ಮಹಿಳಾ ಪೌರ ಕಾರ್ಮಿಕರು ಗುರುವಾರ ನಗರದ ಗಾಂಧಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಗದಗ ನಗರದ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ; ಪ್ರತಿಭಟನೆ ವೇಳೆ ಕುಸಿದು ಬಿದ್ದ ಕಾರ್ಮಿಕ ಮಹಿಳೆ

ಕನ್ನಡಪ್ರಭ ವಾರ್ತೆ ಗದಗ

ಕನಿಷ್ಠ ವೇತನ ಜಾರಿ ಹಾಗೂ ಸೇವೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಗದಗ-ಬೆಟಗೇರಿ ನಗರಸಭೆಯಲ್ಲಿ ಕಸ ಸಂಗ್ರಹಿಸುವ ಮಹಿಳಾ ಪೌರ ಕಾರ್ಮಿಕರು ಗುರುವಾರ ನಗರದ ಗಾಂಧಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಕಳೆದ ಹಲವು ದಿನಗಳಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಕಾರ್ಮಿಕರು, ಸರ್ಕಾರ ಹಾಗೂ ಜಿಲ್ಲಾಡಳಿತ ತಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಹಲವಾರು ವರ್ಷಗಳಿಂದ ನಗರ ಸ್ವಚ್ಛತೆಗಾಗಿ ದುಡಿಯುತ್ತಿದ್ದರೂ ಕನಿಷ್ಠ ವೇತನ ಸೇರಿದಂತೆ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ ಎಂದು ಆರೋಪಿಸಿದರು.

ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ ರಾಜ್ಯ ಸರ್ಕಾರ, ಗದಗ ಜಿಲ್ಲಾಡಳಿತ ಹಾಗೂ ನಗರಸಭೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸುಮಾರು ಒಂದೂವರೆ ತಾಸಿಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದ್ದರಿಂದ ವಿವಿಧ ಊರುಗಳಿಗೆ ತೆರಳುತ್ತಿದ್ದ ಪ್ರಯಾಣಿಕರು ಹಾಗೂ ವಾಹನ ಸವಾರರು ಪರದಾಡುವಂತಾಯಿತು.ಕುಸಿದು ಬಿದ್ದ ಕಾರ್ಮಿಕ ಮಹಿಳೆ:

ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೌರಕಾರ್ಮಿಕ ಮಹಿಳೆ ಜ್ಯೋತಿ ಹೊಸಳ್ಳಿ ಏಕಾಏಕಿ ಕುಸಿದು ಬಿದ್ದ ಘಟನೆ ನಡೆಯಿತು. ತಕ್ಷಣ ಆ್ಯಂಬುಲೆನ್ಸ್‌ಗೆ ಕರೆ ಮಾಡಲಾಯಿತಾದರೂ ಅದು ಸ್ಥಳಕ್ಕೆ ಆಗಮಿಸುವುದು ತಡವಾದ ಹಿನ್ನೆಲೆ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಮತ್ತು ಜಿಲ್ಲಾಡಳಿತ ಬಡವರ, ದಲಿತರ ಜೀವದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಂತರ ಸ್ಥಳಕ್ಕೆ ಆಗಮಿಸಿದ ಆ್ಯಂಬುಲೆನ್ಸ್ ಮೂಲಕ ಅಸ್ವಸ್ಥಗೊಂಡಿದ್ದ ಮಹಿಳೆಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು.

ಅಧಿಕಾರಿಗಳು ತರಾಟೆಗೆ:

ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಆಗಮಿಸಿ ತಮ್ಮ ಬೇಡಿಕೆಗಳ ಕುರಿತು ಸ್ಪಷ್ಟ ಭರವಸೆ ನೀಡಬೇಕು ಎಂದು ಕಾರ್ಮಿಕರು ಪಟ್ಟು ಹಿಡಿದರು. ಪ್ರತಿಭಟನಾ ಸ್ಥಳಕ್ಕೆ ನಗರಸಭೆ ಕಮಿಷನರ್ ಆಗಮಿಸುತ್ತಿದ್ದಂತೆ, ಕಾರ್ಮಿಕರು ತಮ್ಮ ಸಮಸ್ಯೆಗಳನ್ನು ತಕ್ಷಣ ಪರಿಹರಿಸದಿರುವುದಕ್ಕೆ ಅವರನ್ನು ತರಾಟೆಗೆ ತೆಗೆದುಕೊಂಡರು. ಪ್ರತಿಭಟನಾಕಾರರ ಮನವಿ ಸ್ವೀಕರಿಸಿದ ನಗರಸಭಯ ಕಮಿಷನರ್ ರಾಜಾರಾಂ ಪವಾರ ನಿಮ್ಮ ಬೇಡಿಕೆಗಳನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕ ಕಾರ್ಮಿಕರು ಪ್ರತಿಭಟನೆ ಹಾಗೂ ರಸ್ತೆ ತಡೆ ಕೈಬಿಟ್ಟರು.

ನಗರಸಭೆ ಮಾಜಿ ಉಪಾಧ್ಯಕ್ಷ ಕೃಷ್ಣಾ ಪರಾಪೂರ, ಅಶೋಕ ಕುಡತಿನ್ನಿ, ಗಣೇಶ ಹುಬ್ಬಳ್ಳಿ, ಎಸ್.ಎನ್. ಬಳ್ಳಾರಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.ನಗರದ ಸ್ವಚ್ಛತೆಗಾಗಿ ಹಗಲು ರಾತ್ರಿ ಎನ್ನದೆ ದುಡಿಯುತ್ತಿರುವ ಮಹಿಳಾ ಪೌರ ಕಾರ್ಮಿಕರ ಸಮಸ್ಯೆಗಳನ್ನು ಸರ್ಕಾರ ನಿರ್ಲಕ್ಷ್ಯ ಮಾಡಬಾರದು. ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರಿಗೆ ಕನಿಷ್ಠ ವೇತನದ ಜೊತೆಗೆ ಸೇವಾ ಭದ್ರತೆ ಕಲ್ಪಿಸಬೇಕು. ಅಧಿಕಾರಿಗಳು ಕೇವಲ ಭರವಸೆ ನೀಡದೆ, ಕೂಡಲೇ ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಂಡು ಕಾರ್ಮಿಕರಿಗೆ ನ್ಯಾಯ ಒದಗಿಸಬೇಕು. ಅವರ ಬೇಡಿಕೆ ಈಡೇರುವವರೆಗೆ ಹೋರಾಟಕ್ಕೆ ನಮ್ಮ ಬೆಂಬಲ ಇರಲಿದೆ ಎನ್ನುತ್ತಾರೆ ನಗರಸಭೆ ಸದಸ್ಯ ಕೃಷ್ಣಾ ಪರಾಪೂರ.