ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆ ಮತ್ತು ಮಹಿಳಾ ಸಬಲೀಕರಣವಾಗಿದೆ ಜೊತೆಗೆ ಬಡವರನ್ನು ಮುಖ್ಯವಾಹಿನಿಗೆ ತರುವ ಕೆಲಸವಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆ ಮತ್ತು ಮಹಿಳಾ ಸಬಲೀಕರಣವಾಗಿದೆ ಜೊತೆಗೆ ಬಡವರನ್ನು ಮುಖ್ಯವಾಹಿನಿಗೆ ತರುವ ಕೆಲಸವಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಇಲ್ಲಿನ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಹಾರ ಮತ್ತು ನಾಗರೀಕ ಇಲಾಖೆ, ಇಂಧನ ಇಲಾಖೆ, ಸಾರಿಗೆ ಇಲಾಖೆ, ಉದ್ಯೋಗ ವಿನಿಮಯ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಜಿಲ್ಲಾ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಶಿವಮೊಗ್ಗ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಕುರಿತಾದ ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಸರ್ಕಾರ ರೈತರ ಹಿಂದುಳಿದವರ, ಬಡವರ ಮತ್ತು ಮಹಿಳೆಯರ ಪರವಾಗಿದ್ದು, ಪಂಚ ಗ್ಯಾರಂಟಿ ಯೋಜನೆಗಳಿಂದಾಗಿ ಜನರ ಬಳಿ ದುಡ್ಡು ಬಂದು ಖರ್ಚು ಸಹ ಹೆಚ್ಚಾಗಿದೆ. ಇದರಿಂದ ಸರ್ಕಾರಕ್ಕೆ ತೆರಿಗೆ ರೂಪದಲ್ಲಿ ಆದಾಯ ಬರುತ್ತದೆ ಎಂದರು.

ಶಕ್ತಿ ಮತ್ತು ಗೃಹ ಲಕ್ಷ್ಮಿ ಯೋಜನೆಗಳಿಂದ ಮಹಿಳೆಯರು ಸ್ವಾವಲಂಬಿಗಳಾಗಿ, ಖರ್ಚು ಮಾಡಿದ್ದಾರೆ. ಇದರಿಂದ ದೇವಸ್ಥಾನದ ಆದಾಯ ಕೂಡ ಹೆಚ್ಚಿದೆ. ಗೃಹಜ್ಯೋತಿಯಿಂದ ಓದುವ ಮಕ್ಕಳಿಗೆ ಬಹಳ ಅನುಕೂಲವಾಗಿದೆ. ರಾಜ್ಯದ ಆರ್ಥಿಕ ವ್ಯವಸ್ಥೆ ಸರಿಪಡಿಸಲು ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿದೆ. ಗ್ಯಾರಂಟಿ ಪ್ರಾಧಿಕಾರ ಕ್ಯಾಬಿನೆಟ್‌ಗಿಂತ ಉತ್ತಮ ಕೆಲಸ ಮಾಡುತ್ತಿದೆ ಎಂದರು.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಮಾತನಾಡಿ, ಸಿದ್ದರಾಮಯ್ಯನವರು ರಾಜ್ಯದಲ್ಲಿ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ಬಸವಣ್ಣನವರ ತತ್ವದ ಆಧಾರದಲ್ಲಿ ಅಧಿಕಾರ ನಡೆಸಿ ರೈತರಿಗೆ, ಜನರಿಗೆ, ವಿದ್ಯಾರ್ಥಿಗಳಿಗೆ ಅತ್ಯುತ್ತಮ ಯೋಜನೆಗಳನ್ನು ನೀಡಿದ್ದಾರೆ. ಸಿದ್ದರಾಮಯ್ಯನವರು ನೀಡಿದ್ದ 165 ಭರವಸೆಗಳನ್ನು ಈಡೇರಿಸಿದ್ದಾರೆ ಎಂದರು.

ರಾಜ್ಯದ ಆರ್ಥಿಕ ಪರಿಸ್ಥಿತಿ ಚೇತರಿಕೆ ಕಂಡಿದೆ. ತಲಾ ಆದಾಯ ಮತ್ತು ಜಿಎಸ್‌ಟಿಯಲ್ಲಿ ರಾಜ್ಯ ಮೊದಲನೇ ಸ್ಥಾನದಲ್ಲಿದೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ನಷ್ಟವೇನೂ ಆಗಿಲ್ಲ. ಲಾಭವೇ ಆಗುತ್ತಿದೆ. ಇದೀಗ ಎಲ್ಲ ರಾಜ್ಯಗಳಲ್ಲಿ ನಮ್ಮಂತೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಈವರೆಗೆ 600 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿ ಗೋಲ್ಡನ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ ನಿರ್ಮಿಸಲಾಗಿದೆ. ಇನ್ನು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಜನರ ದಟ್ಟಣೆ ತಗ್ಗಿಸಲು ಹೊಸದಾಗಿ 3000 ಬಸ್ ಖರೀದಿಸಲಾಗಿದೆ, ನೇಮಕಾತಿಯನ್ನೂ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ಕೋವಿಡ್ ಸಮಯದಲ್ಲಿ ಸ್ಥಗಿತಗೊಂಡಿದ್ದ ಬಸ್‌ಗಳ ಓಡಾಟ ರಿಶೆಡ್ಯೂಲ್ ಮಾಡಲಾಗುವುದು ಎಂದ ಅವರು ಗ್ಯಾರಂಟಿ ಯೋಜನೆಗಳನ್ನು ಇನ್ನೂ ಯಶಸ್ವಿಗೊಳಿಸಲು ನಮ್ಮ ತಂಡ ಶ್ರಮಿಸಲಿದೆ ಎಂದರು.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ಜಾರಿಯಾಗಿವೆ. ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ರು. 4.968 ಕೋಟಿ ಹಣವನ್ನು ಮೀಸಲು ಇಡಲಾಗಿದ್ದು, ಈವರೆಗೆ 1,13,000 ಕೋಟಿ ರು. ಹಣ ಜನ ಸಾಮಾನ್ಯರ ಖಾತೆಗೆ ಜಮೆ ಮಾಡಲಾಗಿದೆ. 1.25 ಸಾವಿರ ಕೋಟಿ ರು. ಹಣವನ್ನು ಅಭಿವೃದ್ಧಿ ಕಾಮಗಾರಿಗಳಿಗಾಗಿ ಮೀಸಲಿಡಲಾಗಿದೆ ಎಂದು ವಿವರಿಸಿದರು.

ಶಾಸಕ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ನಾವು ಸರ್ಕಾರದ ಯಾವುದೇ ಯೋಜನೆಗಳನ್ನು ವಿರೋಧ ಮಾಡಿಲ್ಲ. ಆದರೆ ಬಜೆಟ್‌ನಲ್ಲಿರುವ ಯೋಜನೆಗಳು ಜಾರಿಗೆ ಬರಬೇಕೆಂದು ಆಗ್ರಹಿಸಿದ್ದೆವು. ಯೋಜನೆಗಳು ಜನರಿಗೆ ಪೂರಕವಾಗಿರಬೇಕು. ಈ ಕಾರ್ಯಾಗಾರ ಒಂದು ಅವಲೋಕನ ಕಾರ್ಯಕ್ರಮವಾಗಿದ್ದು, ಯೋಜನೆಯಲ್ಲಿನ ಕೊರತೆಗಳ ಕಡೆಯೂ ಗಮನ ಹರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು, ಡಾ. ಎಚ್‌.ಪಿ.ವಾಸು ಮಾತನಾಡಿದರು. ಜಿಲ್ಲಾ ಮಟ್ಟದ ಗ್ಯಾರಂಟಿ ಯೊಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಸಿ ಎಸ್ ಚಂದ್ರಭೂಪಾಲ, ರಾಜ್ಯ ಎಸ್ಸಿ, ಎಸ್ಟಿ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ರಾಜ್ಯ ಜವಳಿ ಮೂಲ ಸೌಲಭ್ಯ(ವಿದ್ಯುತ್ ಮಗ್ಗಗಳ)ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಚೇತನ್, ಎಂಎಡಿಬಿ ಅಧ್ಯಕ್ಷ ಆರ್. ಎಂ.ಮಂಜುನಾಥಗೌಡ, ಜಿ.ಪಂ. ಸಿಇಓ ಎನ್‌. ಹೇಮಂತ್, ಪುಷ್ಪಾ ಅಮರನಾಥ, ಮತ್ತಿತರರು ಇದ್ದರು.

----

ನಾವು ಚೆನ್ನಾಗಿರಬೇಕೆಂದರೆ ಬ್ಲಡ್ ಮತ್ತು ದುಡ್ಡು ಬೇಕು. ಸರ್ಕಾರ ಮತ್ತು ಮಾರುಕಟ್ಟೆ ಚೆನ್ನಾಗಿರಬೇಕಾದರೆ ಮಹಿಳಾ ಸಬಲೀಕರಣ ಆಗಬೇಕು. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ 1,13,000 ಕೋಟಿ ರು. ಹಣವು ನೇರವಾಗಿ ಬಡವರ ಖಾತೆಗೆ ತಲುಪಿದೆ. ಹಾಗೂ ನಮ್ಮ ಜಿಲ್ಲೆಯಲ್ಲಿ 3023 .95 ಕೋಟಿ ರು. ಫಲಾನುಭವಿಗಳಿಗೆ ತಲುಪಿದೆ.

ಮಧು ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವ.