ಎಚ್ಡಿಕೆ ಹೇಳಿಕೆ ಖಂಡಿಸಿ ಮಹಿಳೆಯರ ಪ್ರತಿಭಟನೆ

| Published : Apr 15 2024, 01:26 AM IST

ಸಾರಾಂಶ

ಚನ್ನಪಟ್ಟಣ: ಕಾಂಗ್ರೆಸ್ ಗ್ಯಾರಂಟಿ ಕುರಿತು ಮಾತನಾಡುವಾಗ ಮಹಿಳೆಯರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ನೀಡಿದ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಮಹಿಳಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ಚನ್ನಪಟ್ಟಣ: ಕಾಂಗ್ರೆಸ್ ಗ್ಯಾರಂಟಿ ಕುರಿತು ಮಾತನಾಡುವಾಗ ಮಹಿಳೆಯರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ನೀಡಿದ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಮಹಿಳಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಗಾಂಧಿ ಭವನದ ಮುಂದೆ ಜಮಾಯಿಸಿದ ಕಾಂಗ್ರೆಸ್ ಮಹಿಳಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತೆಯರು ಕುಮಾರಸ್ವಾಮಿ ಹೇಳಿಕೆ ವಿರುದ್ಧ ಘೋಷಣೆ ಕೂಗಿದರು.

ಎಚ್‌ಡಿಕೆ ಕ್ಷಮೆಗೆ ಆಗ್ರಹ: ಚುನಾವಣಾ ಪ್ರಚಾರದ ವೇಳೆ ಕುಮಾರಸ್ವಾಮಿ ಕಾಂಗ್ರೆಸ್ ಗ್ಯಾರಂಟಿಗಳಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಕೆ ನೀಡಿರುವುದು ಅಕ್ಷಮ್ಯ ಅಪರಾಧ. ರಾಜ್ಯದ ಮುಖ್ಯಮಂತ್ರಿಯಾಗಿದ್ದವರು ಈ ರೀತಿ ಮಹಿಳೆಯರ ವಿರುದ್ಧ ಹೇಳಿಕೆ ನೀಡುವುದು ಸರಿಯಲ್ಲ. ಈ ಕೂಡಲೇ ಕುಮಾರಸ್ವಾಮಿಯವರು ತಮ್ಮ ಹೇಳಿಕೆ ಹಿಂಪಡೆದು, ರಾಜ್ಯದ ಮಹಿಳೆಯರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಅನುಕೂಲವಾಗಿದ್ದು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಇದನ್ನು ಸಹಿಸದ ಕುಮಾರಸ್ವಾಮಿ ಅವರು ಈ ರೀತಿ ಮಾತನಾಡಿದ್ದಾರೆ. ಯಾವ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಅವರು ಸ್ಪಷ್ಟಪಡಿಸಬೇಕು. ಕುಮಾರಸ್ವಾಮಿಯವರ ಹೇಳಿಕೆ ಇಡೀ ನಾರಿಕುಲಕ್ಕೆ ಮಾಡಿದ ಅಪಮಾನವಾಗಿದೆ. ಮಹಿಳೆಯರ ವಿರುದ್ಧ ಹಗುರವಾಗಿ ಮಾತನಾಡುವ ಮುನ್ನ ಅವರು ತಮ್ಮ ಮನೆಯಲ್ಲೂ ಮಹಿಳೆಯರಿದ್ದಾರೆ ಎಂಬುದನ್ನು ಮರೆಯಬಾರದು. ಇನ್ನು ೨೪ ಗಂಟೆಯೊಳಗೆ ಕುಮಾರಸ್ವಾಮಿ ತಮ್ಮ ಹೇಳಿಕೆ ಹಿಂದಕ್ಕೆ ಪಡೆದು ಕ್ಷಮೆಯಾಚಿಸದಿದ್ದಲ್ಲಿ ರಾಜ್ಯಾದ್ಯಂತ ಮಹಿಳೆಯರು ಅವರ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಮಹಿಳಾ ಘಟಕದ ಕೆ.ಟಿ.ಲಕ್ಷ್ಮಮ್ಮ, ಕೋಕಿಲಾರಾಣಿ ಮುಂತಾದವರು ಉಪಸ್ಥಿತರಿದ್ದರು.ಪೋಟೊ೧೪ಸಿಪಿಟಿ೨:

ಚನ್ನಪಟ್ಟಣದ ಗಾಂಧಿ ಭವನದ ಬಳಿ ಕುಮಾರಸ್ವಾಮಿ ಹೇಳಿಕೆ ಖಂಡಿಸಿ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.