ಶಿಗ್ಗಾಂವಿ: ಮಹಿಳೆಯರು ಶಿಕ್ಷಣ, ಜ್ಞಾನ ಹಾಗೂ ಸಾಮಾಜಿಕ ಜಾಗೃತಿಯನ್ನು ಮೈಗೂಡಿಸಿಕೊಂಡು ಸ್ವಾವಲಂಬಿ ಜೀವನ ನಡೆಸುವ ಮೂಲಕ ಕುಟುಂಬದ ಹಾಗೂ ಸಮಾಜದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಭಾರತ್ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ್ ದುಂಡಿಗೌಡ್ರ ಹೇಳಿದರು.
ತಾಲೂಕಿನ ಗಂಜಿಗಟ್ಟಿ ಗ್ರಾಮದ ಶ್ರೀ ಚರಮೂರ್ತೇಶ್ವರ ಮಠದ ಸಭಾಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮಹಿಳೆಯರಲ್ಲಿರುವ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವಾಗಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಹಿಳೆಯರು ಶಿಕ್ಷಣದ ಜೊತೆಗೆ ಆರ್ಥಿಕ, ಸಾಮಾಜಿಕ ಹಾಗೂ ಕೌಟುಂಬಿಕ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು. ಮಹಿಳೆಯರು ಸಂಘಟಿತರಾಗಿ ಪರಸ್ಪರ ಸಹಕಾರದೊಂದಿಗೆ ಮುನ್ನಡೆದಾಗ ಸಮಾಜದಲ್ಲಿ ಉತ್ತಮ ಬದಲಾವಣೆ ತರಲು ಸಾಧ್ಯ ಅದಕ್ಕೆ ಪೂರಕವಾಗಿ ಧರ್ಮಸ್ಥಳ ಸಂಸ್ಥೆಯ ಕಾರ್ಯ ಪ್ರಶಂಸಿಸಿದರು.
ಜನಜಾಗೃತಿ ವೇದಿಕೆಯ ಸದಸ್ಯ ಶಿವಾನಂದ ಮ್ಯಾಗೇರಿ ಮಾತನಾಡಿ, ಸಮಾಜದಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮಹಿಳೆಯರು ಮೂಢನಂಬಿಕೆಗಳಿಂದ ದೂರವಿದ್ದು, ಶಿಕ್ಷಣ, ಆರೋಗ್ಯ, ಸ್ವಚ್ಛತೆ ಹಾಗೂ ಸಾಮಾಜಿಕ ಮೌಲ್ಯಗಳ ಕುರಿತು ಅರಿವು ಹೊಂದಬೇಕು. ಕುಟುಂಬದಲ್ಲಿ ಉತ್ತಮ ಸಂಸ್ಕಾರ ಬೆಳೆಸುವ ಜವಾಬ್ದಾರಿ ಮಹಿಳೆಯರ ಮೇಲಿದೆ. ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಇಂತಹ ಕಾರ್ಯಕ್ರಮಗಳು ಸಮಾಜದ ಆರೋಗ್ಯಕರ ಬೆಳವಣಿಗೆಗೆ ಸಹಕಾರಿಯಾಗುತ್ತವೆ ಎಂದರು.ಧಾರವಾಡ ಯೋಜನಾಧಿಕಾರಿ ಸುಧಾ ನಾಯಕ್ ಹಾಗೂ ಸಂಸನ್ಮೂಲ ವ್ಯಕ್ತಿಯಾಗಿ ಶೈಲಜಾ ಹುದ್ದಾರ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮದ ಮುಖಂಡ ಕಲ್ಲಪ್ಪ ಮಾರನಬೀಡ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿಗ್ಗಾಂವಿ ಯೋಜನಾಧಿಕಾರಿ ಶೇಖರ್ ನಾಯಕ್ ಸೇರಿದಂತೆ ಮಹಿಳಾ ಜ್ಞಾನ ವಿಕಾಸ ಕೇಂದ್ರದ ಸದಸ್ಯರು, ಸ್ವಸಹಾಯ ಸಂಘಗಳ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು.