ಸಾರಾಂಶ
ವಿವಿಧ ಯೋಜನೆಗಳ ಮೂಲಕ ಫಲಾನುಭವಿಗಳನ್ನು ತಲುಪಲು ಅನುದಾನದ ಕೊರತೆ ಇದೆ. ಈಗ ನೀಡುವ 95 ಕೋಟಿ ರುಪಾಯಿ ಅನುದಾನದಲ್ಲಿ ಯೋಜನೆ ಮತ್ತು ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಹೆಚ್ಚು ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಕಳೆದ ಮೂರು ವರ್ಷಗಳ ಹಿಂದೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಕ್ಕೆ 300- 400 ಕೋಟಿ ರುಪಾಯಿ ಅನುದಾನ ದೊರೆಯುತ್ತಿತ್ತು. ಈ ವರ್ಷ ಸರ್ಕಾರ ನಿಗಮಕ್ಕೆ ಕೇವಲ 95 ಕೋಟಿ ರುಪಾಯಿ ಅನುದಾನವನ್ನು ಬಿಡುಗಡೆ ಮಾಡಿದೆ. ಮಹಿಳಾ ಸಬಲೀಕರಣದ ದೃಷ್ಟಿಯಿಂದ ಹೆಚ್ಚು ಅನುದಾನ ಒದಗಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ ತಿಳಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರವಾಸ ಕೈಗೊಂಡು ಜಿಲ್ಲಾಡಳಿತ ಭವನದಲ್ಲಿ ನಿಗಮದ ಜಿಲ್ಲಾ ಮಟ್ಡದ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ಅವರು ಮಾತನಾಡಿ, ರಾಜ್ಯದಲ್ಲಿ ಅಸಹಾಯಕರು, ಶೋಷನೀಯ ಸ್ಥಿತಿಯಲ್ಲಿರುವ ಮಹಿಳೆಯರಿಗೆ ಸೌಲಭ್ಯ ಸೇರಿದಂತೆ ಹಲವು ಯೋಜನೆಗಳ ಮೂಲಕ ಸಹಾಯ ಮಾಡಿ ಅವರನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ಜೊತೆಗೆ ಮುಖ್ಯವಾಹಿನಿಗೆ ತರುವ ಕೆಲಸವನ್ನು ಮಹಿಳಾ ಅಭಿವೃದ್ಧಿ ನಿಗಮ ಮಾಡುತ್ತಿದೆ ಎಂದರು.ಯೋಜನೆ ಜಾರಿಗೆ ಹಣದ ಕೊರತೆ
ಆದರೆ, ವಿವಿಧ ಯೋಜನೆಗಳ ಮೂಲಕ ಫಲಾನುಭವಿಗಳನ್ನು ತಲುಪಲು ಮತ್ತು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಅನುದಾನದ ಕೊರತೆ ಇದೆ. ಈಗ ನೀಡುವ 95 ಕೋಟಿ ರುಪಾಯಿ ಅನುದಾನ ನೀಡಿದ್ದು, ಇದರಲ್ಲಿ 55 ಕೋಟಿ ರುಪಾಯಿ ಕೆಎಸ್‌ಎಫ್‌ಸಿಗೆ ಮತ್ತು 5 ಕೋಟಿ ಸಿಬ್ಬಂದಿ ವೇತನಕ್ಕೆ ವೆಚ್ಚವಾಗುತ್ತಿದೆ. ಉಳಿದ 35 ಕೋಟಿ ರೂಪಾಯಿಗಳಲ್ಲಿ ಯೋಜನೆ ಮತ್ತು ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ನಿಗಮಕ್ಕೆ ಹೆಚ್ಚು ಅನುದಾನ ಬಿಡುಗಡೆ ಮಾಡುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.ಈ ಹಿಂದೆ ಮಾಜಿ ದೇವದಾಸಿಯರಿಗೆ ಪ್ರತಿ ತಿಂಗಳು 1,500 ರು.ಗಳ ಮಾಸಾಶನ ನೀಡಲಾಗುತ್ತಿತ್ತು. ಈಗ ಮಾಸಾಶನವನ್ನು 2,000 ರುಪಾಯಿಗೆ ಹೆಚ್ಚಿಸಲಾಗಿದೆ. ರಾಜ್ಯದಲ್ಲಿರುವ ಲಿಂಗತ್ವ ಅಲ್ಪಸಂಖ್ಯಾತರನ್ನು ಭಿಕ್ಷಾಟನೆಯಿಂದ ದೂರ ಮಾಡಿ ಸ್ವಾವಲಂಬಿಗಳನ್ನಾಗಿಸಲು ಅವರಿಗೂ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ತಲುಪಿಸಲು ನಿಗಮ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಜಿಲ್ಲೆಯಲ್ಲಿ ಒಟ್ಟು 2407 ಲಿಂಗತ್ವ ಅಲ್ಪ ಸಂಖ್ಯಾತರಿದ್ದು, ಈ ಪೈಕಿ 13 ಜನರಿಗೆ ವಸತಿಗಾಗಿ ಉಚಿತ ನಿವೇಶನ ಮತ್ತು 34 ಜನರಿಗೆ ಗೃಹಲಕ್ಷ್ಮಿ ಯೋಜನೆ ತಲುಪುತ್ತಿದೆ. ಮುಂದಿನ ದಿನಗಳಲ್ಲಿ 3 ಸಾವಿರ ನಿವೇಶನಗಳನ್ನು ವಿತರಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.ಸಮಸ್ಯೆ ಅರಿಯಲು ಪ್ರವಾಸ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ 40 ದಿನಗಳಲ್ಲಿ 8 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಮಾಜಿ ದೇವದಾಸಿಯರ ಸಮಸ್ಯೆಗಳನ್ನು ಅರಿಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಜಿಲ್ಲೆಯಲ್ಲಿ ಧನಶ್ರೀ ಯೋಜನೆಯಡಿ 9 ಅರ್ಜಿಗಳು ಸ್ವೀಕೃತವಾಗಿವೆ. ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಹಾಗೂ ವಿಕಲ ಚೇತನ ಯೋಜನೆಯಡಿ ಅರ್ಹ 16 ಫಲಾನುಭವಿಗಳಿಗೆ ಸವಲತ್ತು ನೀಡಲಾಗಿದೆ. ಉದ್ಯೋಗಿನಿ ಯೋಜನೆಯಡಿ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು 13 ಅರ್ಜಿಗಳು ಆಯ್ಕೆಯಾಗಿವೆ ಎಂದರು.ಈ ವೇಳೆ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಸೌಲಭ್ಯ ಪಡೆದ ವಿವಿಧ ಯೋಜನೆಯ ಅರ್ಹ ಫಲಾನುಭವಿಗಳ ಗುರುತಿನ ಚೀಟಿ ವಿತರಣೆ ಮಾಡಲಾಯಿತು.
ಪ್ರತಿಕಾ ಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಪಿ. ಎನ್ ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕರಾದ ಅಕ್ಕ ಮಹಾದೇವಿ, ಮಹಿಳಾ ಮಕ್ಕಳ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ನಿಗಮಗಳ ಅಧಿಕಾರಿಗಳು ಇದ್ದರು.