ಶ್ರೀ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ದೂರದೃಷ್ಠಿ, ಸಮಾಜಮುಖಿ ಚಿಂತನೆಗಳ ಫಲವಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಮನ ಗೆದ್ದಿದೆ. ಈ ಸಂಸ್ಥೆಯಡಿ ಗ್ರಾಮೀಣ ಭಾಗದ ಸಾವಿರಾರು ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗಿದೆ ಎಂದು ಹೊನ್ನಾಳಿ ಹಿರೇಕಲ್ಮಠದ ಡಾ.ಒಡೆಯರ್‌ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿ ಅಭಿಪ್ರಾಯಪಟ್ಟಿದ್ದ್ದಾರೆ.

- ಜೀನಹಳ್ಳಿಯಲ್ಲಿ ಪದಾಧಿಕಾರಿಗಳ ಪದಗ್ರಹಣ-ಸಾಧನ ಸಮಾವೇಶದಲ್ಲಿ ಹಿರೇಕಲ್ಮಠ ಶ್ರೀ

- - -

ಕನ್ನಡಪ್ರಭ ವಾರ್ತೆ ನ್ಯಾಮತಿ

ಶ್ರೀ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ದೂರದೃಷ್ಠಿ, ಸಮಾಜಮುಖಿ ಚಿಂತನೆಗಳ ಫಲವಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಮನ ಗೆದ್ದಿದೆ. ಈ ಸಂಸ್ಥೆಯಡಿ ಗ್ರಾಮೀಣ ಭಾಗದ ಸಾವಿರಾರು ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗಿದೆ ಎಂದು ಹೊನ್ನಾಳಿ ಹಿರೇಕಲ್ಮಠದ ಡಾ.ಒಡೆಯರ್‌ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು.

ತಾಲೂಕಿನ ಜೀನಹಳ್ಳಿ ಗ್ರಾಮದ ಈಶ್ವರ ಸಮುದಾಯ ಭವನದಲ್ಲಿ ಶನಿವಾರ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ಮತ್ತು ಸ್ವಸಹಾಯ ಸಂಘಗಳ ಒಕ್ಕೂಟ ಹೊಸೂರು ವಲಯದ ಪದಾಧಿಕಾರಿಗಳ ಪದಗ್ರಹಣ ಮತ್ತು ಸಾಧನ ಸಮಾವೇಶ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ ಡಾ.ವೀರೇಂದ್ರ ಹೆಗ್ಗಡೆ ಅವರು ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ. ಧರ್ಮಸ್ಥಳ ಸಂಸ್ಥೆಯಡಿ ಮಹಿಳೆಯರು ತಮ್ಮ ಕುಟುಂಬ ನಿರ್ವಹಣೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿ, ಆರ್ಥಿಕ ಸ್ಥಿತಿ ಸುಧಾರಿಸಿಕೊಂಡಿದ್ದಾರೆ ಎಂದು ಶ್ಲಾಘಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ನ್ಯಾಮತಿ ಠಾಣೆಯ ಪಿಐ ಸಿದ್ದೇಗೌಡ ಮಾತನಾಡಿ, ಬಾಲ್ಯವಿವಾಹ ನಿಷೇಧ ಕಾಯ್ದೆ ಪ್ರಕಾರ 18 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಮತ್ತು 21 ವರ್ಷದೊಳಗಿನ ಗಂಡು ಮಕ್ಕಳಿಗೆ ಮದುವೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಬಾಲ್ಯವಿವಾಹ ಮಾಡಿಸುವ ಪೋಷಕರು, ಪ್ರೋತ್ಸಾಹಿಸುವವರು, ಭಾಗವಹಿಸುವವರಿಗೆ ಜೈಲು ಶಿಕ್ಷೆ, ದಂಡ ವಿಧಿಸಲು ಸಹ ಕಾನೂನಿನಲ್ಲಿ ಅವಕಾಶವಿದೆ. ವಿದ್ಯಾರ್ಥಿಗಳು ಮತ್ತು ಯುವಕರು ಮದ್ಯಪಾನ, ಧೂಮಪಾನ, ತಂಬಾಕು ಹಾಗೂ ಮಾದಕ ವಸ್ತುಗಳಿಂದ ದೂರವಿರಬೇಕು. ಯಾವುದೇ ದುಶ್ಚಟಗಳಿಗೆ ಬಲಿಯಾಗದೇ ಉತ್ತಮ ಶಿಕ್ಷಣ ಮತ್ತು ಕ್ರೀಡೆಯತ್ತ ಗಮನ ಹರಿಸಬೇಕು ಎಂದು ಹೇಳಿದರು.

ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿರಸಿ ಜಿಲ್ಲಾ ನಿರ್ದೇಶಕ ದಿನೇಶ್‌ ಎಂ., ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಸಂಚಾಲಕ ಶಾಸ್ತ್ರಿ ಹೊಳೆಮಠ, ಅಧ್ಯಕ್ಷತೆ ವಹಿಸಿದ್ದ ಶ್ರೀ ರಾಬತಿ ದೇಗುಲಗಳ ಅಭಿವೃದ್ಧಿ ಟ್ರಸ್ಟ್‌ ಅಧ್ಯಕ್ಷ ರಮೇಶ್‌ ಪಾಟೀಲ್‌, ಶಿರಸಿ ಜಿಲ್ಲಾ ಜನಜಾಗೃತಿ ನಿರ್ದೇಶಕ ಪ್ರೇಮ್‌ಕುಮಾರ್‌, ಉಪಾಧ್ಯಕ್ಷೆ ಪ್ರಮೀಳಾ, ಹೊಸೂರು ವಲಯದ ನಿಕಟಪೂರ್ವ ಅಧ್ಯಕ್ಷ ಶಿವಮೂರ್ತಿ ಮಾತನಾಡಿದರು.

ಈ ಸಂದರ್ಭ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿ ಬಂಧು ಮತ್ತು ಸ್ವಸಹಾಯ ಸಂಘಗಳ ಒಕ್ಕೂಟಗಳ ಪದಾಧಿಕಾರಿಗಳ ಪದಗ್ರಹಣ ನಡೆದು ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಕಾರ್ಯಕ್ರಮದಲ್ಲಿ ಶ್ರೀ ರಾಬತಿ ದೇಗುಲ ಅಭಿವೃದ್ಧಿ ಟ್ರಸ್ಟ್‌ ಕಾರ್ಯದರ್ಶಿ ನಾಗೇಂದ್ರಪ್ಪ, ತಾಲೂಕು ಯೋಜನಾಧಿಕಾರಿ ಆರ್‌.ನಂಜುಂಡಿ, ಮೇಲ್ವಿಚಾರಕಾರದ ಜಯಶ್ರೀ, ವಿಜಯಕುಮಾರ್‌, ಸೇವಾ ಪ್ರತಿನಿಧಿಗಳು ಮತ್ತಿತರರಿದ್ದರು.

- - -

-ಚಿತ್ರ:

ಕಾರ್ಯಕ್ರಮವನ್ನು ನ್ಯಾಮತಿ ಠಾಣೆಯ ಪಿಐ ಸಿದ್ದೇಗೌಡ ಉದ್ಘಾಟಿಸಿದರು.