ಕಂಪ್ಲಿ: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಮಹಿಳೆಯರು ಪರಿಣಾಮಕಾರಿಯಾಗಿ ಬಳಸಿಕೊಂಡು ತಮ್ಮ ಆರ್ಥಿಕ ಹಾಗೂ ಸಾಮಾಜಿಕ ಸಬಲತೆ ಹೆಚ್ಚಿಸಿಕೊಳ್ಳಬೇಕು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಶ್ರೀನಿವಾಸರಾವ್ ಹೇಳಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಭಾನುವಾರ ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಠಾನ ಸಮಿತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳೆಯರು ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಕುಟುಂಬದ ಅಭಿವೃದ್ಧಿಗೆ ಜೊತೆಗೆ ಸಮಾಜದ ಅಭಿವೃದ್ಧಿಗೂ ಕೊಡುಗೆ ನೀಡಬಹುದು. ಶಿಕ್ಷಣ, ಉದ್ಯೋಗ, ಸ್ವ ಉದ್ಯೋಗ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಮುನ್ನಡೆಯುತ್ತಿರುವುದು ಶ್ಲಾಘನೀಯ. ಸರ್ಕಾರದ ಗ್ಯಾರಂಟಿ ಯೋಜನೆಗಳು ಮಹಿಳೆಯರ ಜೀವನಮಟ್ಟವನ್ನು ಉತ್ತಮಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಹೇಳಿದರು.

ತಾಪಂ ಸಿಇಒ ಆರ್.ಕೆ. ಶ್ರೀಕುಮಾರ್ ಮಾತನಾಡಿ, ಮಹಿಳೆಯರು ಶಿಕ್ಷಣ, ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚು ಗಮನ ಹರಿಸಿ ತಮ್ಮ ಪ್ರತಿಭೆ ಮೆರೆಯಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಉನ್ನತ ಶಿಕ್ಷಣ, ಉನ್ನತ ಹುದ್ದೆಗಳನ್ನು ಪಡೆಯುವತ್ತ ಮಹಿಳೆಯರು ಹೆಚ್ಚಿನ ಜಾಗೃತಿ ತೋರಬೇಕು. ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ತಾಯಂದಿರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮಕ್ಕಳಿಗೆ ಉತ್ತಮ ಸಂಸ್ಕಾರ, ಶಿಕ್ಷಣ ನೀಡುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಮಹಿಳೆಯರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮೇಲ್ವಿಚಾರಕಿಯರಾದ ಲತೀಫಾ ಬೇಗಮ್, ಎಮ್ಮಿಗನೂರಿನ ಏರಿಯಮ್ಮ ಸೇರಿದಂತೆ ಇತರರು ಮಾತನಾಡಿದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ಸಿ.ವಿಜಯಲಕ್ಷ್ಮಿ, ರೇಣುಕಮ್ಮ, ಎಂ. ರಾಜಭಕ್ಷಿ, ಅಧಿಕಾರಿಗಳಾದ ಕೆ.ಎಸ್. ಮಲ್ಲನಗೌಡ, ಶ್ರೀಶೈಲರೂಗಿ, ಜೆಸ್ಕಾಂ ಬಸಪ್ಪ, ದೇವರೆಡ್ಡಿ, ಕೆ.ವಿರುಪಾಕ್ಷಗೌಡ, ಮೋಹನ್ ಕಾಳಾಪುರ ಸೇರಿದಂತೆ ಗ್ಯಾರಂಟಿ ಸಮಿತಿಯ ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ವಿವಿಧ ಸ್ವಸಹಾಯ ಸಂಘಗಳ ಅಧ್ಯಕ್ಷರು ಮತ್ತು ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.