ಸಾರಾಂಶ
ಕನ್ನಡಪ್ರಭ ವಾರ್ತೆ ಪಾಂಡವಪುರ
ಮುಂಬರುವ ಜಿಲ್ಲಾ ಸಹಕಾರ ಬ್ಯಾಂಕ್ (ಡಿಸಿಸಿ) ಮತ್ತು ಟಿಎಪಿಸಿಎಂಎಸ್ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಶ್ರಮಿಸಬೇಕು ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಕಾರ್ಯಕರ್ತರಿಗೆ ಕರೆ ನೀಡಿದರು.ಪಟ್ಟಣದ ಟಿಎಪಿಸಿಎಂಎಸ್ ರೈಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಜನರೊಂದಿಗೆ ಜನತಾದಳ ಸದಸ್ಯತ್ವ ನೋಂದಣಿ, ಡಿಸಿಸಿ ಬ್ಯಾಂಕ್ ಮತ್ತು ಟಿಎಪಿಸಿಎಂಎಸ್ ಚುನಾವಣಾ ಸಂಬಂಧ ಕರೆಯಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು.
ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 35 ಸಹಕಾರ ಸಂಘಗಳಲ್ಲಿ ಜೆಡಿಎಸ್ 24 ಸಹಕಾರ ಸಂಘಗಳಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿದೆ. ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಸಂಘದ ಆಡಳಿತ ಮಂಡಳಿ ತಮ್ಮ ತಮ್ಮ ಡೆಲಿಗೇಟ್ಸ್ (ಪ್ರತಿನಿಧಿ) ಗಳನ್ನು ಆಯ್ಕೆ ಮಾಡಿದ್ದಾರೆ. ಜತೆಗೆ ಸೆ.28 ರಂದು ಟಿಎಪಿಸಿಎಂಎಸ್‌ಗೆ ಚುನಾವಣೆ ಕೂಡ ನಿಗದಿಯಾಗಿದೆ ಎಂದರು.ಚುನಾವಣೆ ಹಿನ್ನೆಲೆಯಲ್ಲಿ ಆಕಾಂಕ್ಷಿತರು ತಮ್ಮ ಅಭಿಪ್ರಾಯ ತಿಳಿಸಿದ್ದೀರಿ. ಪಕ್ಷದ ಮುಖಂಡರು ಯಾರನ್ನೇ ಅಭ್ಯರ್ಥಿಯಾಗಿ ಘೋಷಣೆ ಮಾಡಿದರೂ ಸಹ ಅಭ್ಯರ್ಥಿಯ ಗೆಲುವಿಗೆ ಎಲ್ಲರು ಸಹಕಾರ ನೀಡಬೇಕು ಎಂದರು.
ಮೇಲುಕೋಟೆ ಕ್ಷೇತ್ರದಲ್ಲಿ ಅಭಿವೃದ್ಧಿ ಕುಂಠಿತ:ಜಿಪಂ ಮಾಜಿ ಸದಸ್ಯ ಎಚ್.ಮಂಜುನಾಥ್ ಮಾತನಾಡಿ, ಮೇಲುಕೋಟೆ ಕ್ಷೇತ್ರವು ಅಭಿವೃದ್ಧಿಯಲ್ಲಿ ಕುಂಠಿತವಾಗಿದೆ. ಶಾಸಕರು ತಮ್ಮ ಸ್ವಂತ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನೇ ಅಭಿವೃದ್ದಿಪಡಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಕಿಡಿಕಾರಿದರು.
ಕ್ಷೇತ್ರದ ಎಲ್ಲಿ ನೋಡಿದರು ಗುಂಡಿರಸ್ತೆಗಳು ಜನತೆಗೆ ಸಾಕಷ್ಟು ತೊಂದರೆ ನೀಡುತ್ತಿವೆ. ಕ್ಷೇತ್ರದ ಜನತೆ ನೆನೆಪಿನಲ್ಲಿ ಇಟ್ಟಿಕೊಳ್ಳುವ ಒಂದೇ ಒಂದು ಅಭಿವೃದ್ಧಿ ಕಾರ್ಯಕ್ರಮವು ನಡೆಯುತ್ತಿಲ್ಲ. ಸರಕಾರದಿಂದ ಕ್ಷೇತ್ರಕ್ಕೆ ಸೂಕ್ತವಾದ ಅನುದಾನ ನೀಡುತ್ತಿಲ್ಲ ಎಂದರು.ತಾಲೂಕಿನಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಅಧಿಕಾರಗಳು ಶಾಸಕರ ಮಾತನೇ ಕೇಳುತ್ತಿಲ್ಲ. ಹಣಕೊಟ್ಟು ಅಧಿಕಾರಕ್ಕೆ ಬಂದಿರುವ ಅಧಿಕಾರಿಗಳು ಜನರಿಂದ ಸುಲಿಗೆ ಮಾಡುತ್ತಿದ್ದಾರೆ. ಕಾಂಗ್ರೆಸ್ ನ ಪುಕ್ಕಟೆ ಗ್ಯಾರೆಂಟಿ ಭಾಗ್ಯದ ಮೂಲಕ ಜನರ ಮತ ಖರೀದಿ ಮಾಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಜನರಿಂದ ಸುಲಿಗೆ ಮಾಡುತ್ತಿದೆ ಎಂದು ದೂರಿದರು.
ಕಳೆದ ಚುನಾವಣೆಯಲ್ಲಿ ಮಾಡಿದ ತಪ್ಪು ಕ್ಷೇತ್ರದ ಜನರಿಗೆ ಈಗಾಗಲೇ ಅರಿವಾಗಿದೆ. ಮುಂಬರುವ ಸ್ಥಳೀಯ ಸಂಸ್ಥೆಯ ಚುನಾವಣೆಗಳಲ್ಲಿ ಗೆಲುವು ಸಾಧಿಸಿದರೆ ಮುಂದಿನ ಜಿಪಂ, ತಾಪಂ ಚುನಾವಣೆ ಎದುರಿಸಲು ಅನುಕೂಲವಾಗುತ್ತದೆ ಎಂದರು.ಸಭೆಯಲ್ಲಿ ಜೆಡಿಎಸ್ ಅಧ್ಯಕ್ಷ ಎಸ್.ಎ.ಮಲ್ಲೇಶ್ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಅಧ್ಯಕ್ಷೆ ಜ್ಯೋತಿಲಕ್ಷ್ಮಿ, ಟಿಎಪಿಸಿಎಂಎಸ್ ಅಧ್ಯಕ್ಷ ಡಿ.ಶ್ರೀನಿವಾಸ್, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಚಲುವೇಗೌಡ, ಸುಶೀಲಮ್ಮ, ಲಿಂಗರಾಜು, ದ್ಯಾವಪ್ಪ, ನಂಜೇಗೌಡ, ಗಿರೀಶ್, ಸೋಮಶೇಖರ್ , ದುದ್ದ ಹೋಬಳಿ ಮುಖಂಡರಾದ ಮಾದೇಗೌಡ್ರು, ಕೃಷ್ಣಕುಮಾರ್, ಶಶಿಕುಮಾರ್, ಚಂದ್ರಶೇಖರ್, ಶಿವಶಂಕರ್ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.