ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ: ಸೋಮಶೇಖರ ಬಿ.

| Published : Oct 16 2025, 02:00 AM IST

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ: ಸೋಮಶೇಖರ ಬಿ.
Share this Article
  • FB
  • TW
  • Linkdin
  • Email

ಸಾರಾಂಶ

ಹಾವೇರಿ ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ಜಿಲ್ಲೆಯ ಕುರುಬ ಸಮುದಾಯದ ಪ್ರಮುಖರ ಸಭೆ ನಡೆಯಿತು. ರಾಜ್ಯ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೋಮಶೇಖರ ಬಿ. ಪಾಲ್ಗೊಂಡಿದ್ದರು.

ಹಾವೇರಿ: ಕುರುಬ ಸಮುದಾಯ ಬಹಳ ನಂಬಿಕಸ್ಥ ಸಮುದಾಯವಾಗಿದೆ. ಸಮಾಜದ ಕಾರ್ಯಕರ್ತರು, ಮುಖಂಡರು ಬಿಜೆಪಿಯೊಂದಿಗೆ ಕೈಜೋಡಿಸಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲುವಂತೆ ನೋಡಿಕೊಳ್ಳಬೇಕಾಗಿದೆ ಎಂದು ರಾಜ್ಯ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೋಮಶೇಖರ ಬಿ. ಹೇಳಿದರು.

ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ಜಿಲ್ಲೆಯ ಕುರುಬ ಸಮುದಾಯದ ಪ್ರಮುಖರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಕುರುಬ ಸಮಾಜವು ಯಾವುದೇ ಚುನಾವಣೆ ಇರಲಿ, ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಮುಂದಿನ ದಿನಮಾನಗಳಲ್ಲಿ ನಮ್ಮ ಸಮುದಾಯದವರು ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ, ಪಕ್ಷದ ಅಭ್ಯರ್ಥಿಗಳು ಗೆಲ್ಲುವ ನಿಟ್ಟಿನಲ್ಲಿ ಶ್ರಮ ವಹಿಸಬೇಕು. ಈಗಾಗಲೇ ರಾಜಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಕುರುಬ ಸಮಾಜವನ್ನು ಗೌರವಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಂತೆ ಈಗಿನ ರಾಜ್ಯಾಧ್ಯಕ್ಷರು ಕೂಡಾ ಸಮಾಜಕ್ಕೆ ಗೌರವ ಕೊಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಸಮಾಜಕ್ಕೆ ಎಲ್ಲ ರೀತಿಯ ಸ್ಥಾನಮಾನಗಳನ್ನು ಕಲ್ಪಿಸುತ್ತಾರೆ. ಹಾಗಾಗಿ ಸ್ಥಳೀಯ ಸಂಸ್ಥೆಗಳ ಮೇಲೆ ಹೆಚ್ಚು ನಿಗಾವಹಿಸಿ ಕಾರ್ಯನಿರ್ವಹಿಸೋಣ ಎಂದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ಈ ಹಿಂದೆ ನಾನು ಶಾಸಕನಾಗಿ ಆಯ್ಕೆಯಾಗುವಲ್ಲಿಯೂ ಕುರುಬ ಸಮುದಾಯದವರು ನನ್ನ ಗೆಲುವಿಗೆ ಶ್ರಮಿಸಿದ್ದಾರೆ. ಸಮಾಜ ಬಾಂಧವರ ಜತೆಗೆ ನಿರಂತರ ಒಡನಾಟ ಹೊಂದಿದ್ದು, ಜಿಲ್ಲೆಯಲ್ಲಿ ಹೆಚ್ಚಿನ ಮಂಡಲ ಅಧ್ಯಕ್ಷ ಸ್ಥಾನವನ್ನು ಕುರುಬ ಸಮುದಾಯಕ್ಕೆ ನೀಡಿದ್ದೇವೆ. ಮಾಜಿ ಸಿಎಂ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು ಕುರುಬ ಸಮುದಾಯದ ಅಭಿವೃದ್ಧಿ ಮತ್ತು ಪ್ರಾಧಿಕಾರಕ್ಕೆ ಅನುದಾನ ನೀಡಿದ್ದಾರೆ. ಕನಕ ಜಯಂತಿ ಆಚರಣೆ ಮಾಡಲು ರಜೆ ಘೋಷಣೆ ಮಾಡಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಎಂದು ಸ್ಮರಿಸಿದರು.

ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಕುರುಬ ಸಮುದಾಯಕ್ಕೆ, ಕನಕ ಪ್ರಾಧಿಕಾರಕ್ಕೆ ಹಾಗೂ ಸಮಾಜದ ಮಠ-ಮಾನ್ಯಗಳಿಗೆ ಹೆಚ್ಚಿನ ಅನುದಾನ ನೀಡಿದೆ. ಸಮುದಾಯವನ್ನು ಎಸ್‌ಟಿಗೆ ಸೇರಿಸಬೇಕೆಂಬ ಬೇಡಿಕೆಯನ್ನು ಬೊಮ್ಮಾಯಿ ಅವರು ಸಿಎಂ ಇದ್ದ ಅವಧಿಯಲ್ಲಿ ಕೇಂದ್ರಕ್ಕೆ ಶಿಫಾರಸು ಮಾಡಿದ್ದಾರೆ. ಸಮುದಾಯವನ್ನು ಗಮನದಲ್ಲಿಟ್ಟು ಬಿಜೆಪಿ ಅನೇಕ ಸ್ಥಾನಮಾನಗಳನ್ನು ಕಲ್ಪಿಸಿದ್ದು, ಸಮಾಜದವರು ಹೆಚ್ಚಿನ ಪ್ರಮಾಣದಲ್ಲಿ ಪಕ್ಷ ಸಂಘಟನೆ ಮಾಡಬೇಕು ಎಂದು ಕೋರಿದರು.

ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ನೀಲಪ್ಪ ಚಾವಡಿ, ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣನವರ ಮಾತನಾಡಿದರು. ಮಾಜಿ ಶಾಸಕ ಶಿವರಾಜ ಸಜ್ಜನ, ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ಶಿವಕುಮಾರ ರಾಜನಹಳ್ಳಿ, ರಾಜ್ಯ ಪ್ರಕೋಷ್ಠ ಸಂಚಾಲಕ ಭೋಜರಾಜ ಕರೂದಿ, ವಿನಯ ತಳಗೇರಿ ಇದ್ದರು. ಜಗದೀಶ ದೊಡ್ಡಮನಿ ಕಾರ್ಯಕ್ರಮ ನಿರೂಪಿಸಿದರು.