ಅನೀಮಿಯ ಮುಕ್ತ ಜಿಲ್ಲೆ ನಿರ್ಮಾಣಕ್ಕಾಗಿ ಶ್ರಮಿಸಿಬೇಕು: ಡಾ.ಸೆಲ್ವಮಣಿ

| Published : Nov 14 2023, 01:15 AM IST / Updated: Nov 14 2023, 01:16 AM IST

ಅನೀಮಿಯ ಮುಕ್ತ ಜಿಲ್ಲೆ ನಿರ್ಮಾಣಕ್ಕಾಗಿ ಶ್ರಮಿಸಿಬೇಕು: ಡಾ.ಸೆಲ್ವಮಣಿ
Share this Article
  • FB
  • TW
  • Linkdin
  • Email

ಸಾರಾಂಶ

ಡಿಸಿ ಕಚೇರಿ ಸಭಾಂಗಣ

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಶಿವಮೊಗ್ಗವನ್ನು ಅನೀಮಿಯಮುಕ್ತ ಜಿಲ್ಲೆಯನ್ನಾಗಿ ರೂಪಿಸುವಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಾರ್ವಜನಿಕರೂ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.

ನಗರದಲ್ಲಿ ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆರೋಗ್ಯ ಇಲಾಖೆ ಅನೀಮಿಯ(ರಕ್ತಹೀನತೆ) ಮುಕ್ತ ಪೌಷ್ಠಿಕ ಜಿಲ್ಲೆ, ರಾಷ್ಟ್ರೀಯ ನವಜಾತ ಶಿಶುಸಪ್ತಾಹ ಆಚರಣೆ ಹಾಗೂ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕದ ಅಂಗವಾಗಿ ಏರ್ಪಡಿಸಿದ್ದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಮಹಿಳೆ ಮತ್ತು ಮಕ್ಕಳಿಗೆ ಸಕಾಲದಲ್ಲಿ ಅನೀಮಿಯ ತಪಾಸಣೆ ನಡೆಸಿ, ರಕ್ತಹೀನತೆಯಿಂದ ಬಳಲುತ್ತಿರುವವರನ್ನು ಗುರುತಿಸಿ, ಅದರ ವಿಧಗಳಲ್ಲಿ ಸಾಮಾನ್ಯದಿಂದ ಗಂಭೀರ ಸ್ವರೂಪದ ಕಾಯಿಲೆಗಳಿಗೆ ಜಿಲ್ಲೆಯ ಯಾವುದೇ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದರು.

ಈ ದಿಸೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷಿಸಿದಲ್ಲಿ ಫಲಿತಾಂಶ ನಿರಾಶಾದಾಯಕ ಆಗಿರಲಿದೆ. ಗರ್ಭಿಣಿ ಸ್ತ್ರೀಯರು, ಹದಿಹರೆಯದ ಗಂಡುಮಕ್ಕಳು, ಹೆಣ್ಣುಮಕ್ಕಳು, ಎಲ್ಲ ಪುರುಷರು, ಮಹಿಳೆಯರು, ಮಕ್ಕಳು ಮತ್ತು ವಿಶೇಷವಾಗಿ ಅಪೌಷ್ಠಿಕ ಮಕ್ಕಳು ತಮ್ಮ ಆರೋಗ್ಯ ತಪಾಸಿಸಿಕೊಂಡು ಸಕಾಲಿಕ ಚಿಕಿತ್ಸೆ ಪಡೆದು, ಉತ್ತಮ ಆರೋಗ್ಯ ಹೊಂದಬೇಕು. ರಕ್ತಹೀನತೆಯನ್ನು ನಿವಾರಿಸಲು ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಪ್ರತಿ ತಿಂಗಳು ರಕ್ತಪರೀಕ್ಷೆ ನಡೆಸಿ, ಸೂಕ್ತ ಚಿಕಿತ್ಸೆ ಮತ್ತು ಅಗತ್ಯವಿದ್ದಲ್ಲಿ ರಕ್ತ ಒದಗಿಸಲು ಕ್ರಮ ವಹಿಸಲಾಗುವುದು ಎಂದರು.

ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಿಗೆ ಸೂಕ್ತ ಪರೀಕ್ಷೆಯೊಂದಿಗೆ ಚಿಕಿತ್ಸೆ ನೀಡಿ, ಪೌಷ್ಠಿಕತೆಯ ಅರಿವು ಮೂಡಿಸಲಾಗುವುದು. ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತು ಪ್ರೌಢಶಾಲಾ ಮತ್ತು ಅಂಗನವಾಡಿಗಳ ಅಡಿಯಲ್ಲಿ ಶಾಲೆಗಳಿಂದ ಹೊರಗುಳಿದ ವಿದ್ಯಾರ್ಥಿಗಳಿಗೆ ರಕ್ತಪರೀಕ್ಷೆ ನಡೆಸಿ, ಅಗತ್ಯ ಔಷಧಗಳನ್ನು, ಜಂತುಹುಳು ನಿವಾರಣೆ ಮಾತ್ರೆಗಳನ್ನು ವಿತರಿಸಲಾಗುವುದು ಎಂದು ಹೇಳಿದರು.

ಅಲ್ಲದೇ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಅಧಿಕಾರಿ-ಸಿಬ್ಬಂದಿ ಮನೆ ಭೇಟಿ ಸಂದರ್ಭ ಹಾಗೂ ಆರೋಗ್ಯ ಕಾರ್ಯಕ್ರಮಗಳಲ್ಲಿ ಪೌಷ್ಠಿಕ ಆಹಾರದ ಬಗ್ಗೆ ಅರಿವು ಜಾಗೃತಿ ಮೂಡಿಸುವುದು, ವೈಯಕ್ತಿಕ ಸ್ವಚ್ಛತೆ, ನೈರ್ಮಲ್ಯ, ಕೈ ತೊಳೆಯುವ ವಿಧಾನದ ಬಗ್ಗೆ ಹೆಚ್ಚು ಆರೋಗ್ಯ ಶಿಕ್ಷಣ ನೀಡುವಂತೆ ಸೂಚಿಸಲಾಗಿದೆ. ಜಿಲ್ಲೆಯ ಎಲ್ಲ ಶಾಲೆಗಳಲ್ಲಿಯೂ ಕೈ ತೊಳೆಯುವ ವಿಧಾನವನ್ನು ತಿಳಿಸುವುದರ ಜೊತೆಗೆ ವಿದ್ಯಾರ್ಥಿಗಳು, ನಿರಂತರ ಅನುಸರಿಸುವಂತೆ ಕ್ರಮ ಕೈಗೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಮಕ್ಕಳಿಗೆ ಕೈತೊಳೆಯುವ ಕ್ರಮದ ಬಿತ್ತಿಪತ್ರವನ್ನು ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ ಬಿಡುಗಡೆಗೊಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗೀಹಳ್ಳಿ, ಆರ್.ಸಿ.ಎಚ್. ಅಧಿಕಾರಿ ಡಾ.ನಾಗರಾಜ ನಾಯ್ಕ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಆರ್. ಪರಮೇಶ್ವರಪ್ಪ, ವಿವಿಧ ಇಲಾಖೆಗಳ ಅಧಿಕಾರಿಗಳು-ಸಿಬ್ಭಂದಿ ಉಪಸ್ಥಿತರಿದ್ದರು.

- - -

ಕೋಟ್‌ ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೈಗೊಳ್ಳಲಾಗುವ ಆರೋಗ್ಯ ಸಂಬಂಧಿ ಕಾರ್ಯಕ್ರಮಗಳು, ಯೋಜನೆಗಳು, ಅರಿವು ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನಗೊಳಿಸಲು ಆರೋಗ್ಯ ಇಲಾಖಾ ಸಿಬ್ಬಂದಿಗೆ ಈಗಾಗಲೇ ತರಬೇತಿಗಳನ್ನು ನೀಡಿ ಸಜ್ಜುಗೊಳಿಸಲಾಗಿದೆ

- ಡಾ. ಆರ್‌.ಸೆಲ್ವಮಣಿ, ಜಿಲ್ಲಾಧಿಕಾರಿ

- - -

-13ಎಸ್‌ಎಂಜಿಕೆಪಿ01:

ಶಿವಮೊಗ್ಗ ಡಿಸಿ ಕಚೇರಿ ಸಭಾಂಗಣದ ಸಭೆಯಲ್ಲಿ ಮಕ್ಕಳಿಗೆ ಕೈ ತೊಳೆಯುವ ಕ್ರಮದ ಬಿತ್ತಿಪತ್ರವನ್ನು ಜಿಲ್ಲಾಧಿಕಾರಿ ಡಾ. ಆರ್‌.ಸೆಲ್ವಮಣಿ ಬಿಡುಗಡೆಗೊಳಿಸಿದರು.