ಗಾಂಜಾ ಮಾರಾಟ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ

| Published : Apr 19 2025, 12:36 AM IST

ಸಾರಾಂಶ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಾದಕ ವಸ್ತುಗಳ ನಿಯಂತ್ರಣ ಕುರಿತ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.

ಮಾದಕ ವಸ್ತುಗಳ ನಿಯಂತ್ರಣದ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್ ಸೂಚನೆಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಜಿಲ್ಲೆಯಲ್ಲಿ ಗಾಂಜಾ ಬೆಳೆಯುವುದು ಹಾಗೂ ಮಾರಾಟ ಮಾಡುವುದನ್ನು ತಡೆಯಲು ವಿವಿಧ ಇಲಾಖೆಗಳು ಪೊಲೀಸರೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ NCORD (Narco Coordination center) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಬಕಾರಿ, ಅರಣ್ಯ, ಕೃಷಿ ಹಾಗೂ ತೋಟಗಾರಿಕೆ ಅಧಿಕಾರಿಗಳು ಗಾಂಜಾ ಬೆಳೆಯುವ ಪ್ರದೇಶಗಳಲ್ಲಿ ಕಣ್ಗಾವಲು ಇರಿಸುವುದರೊಂದಿಗೆ, ಕೂಂಬಿಂಗ್ ಕಾರ್ಯಾಚರಣೆ ನಡೆಸಬೇಕು ಎಂದು ನಿರ್ದೇಶಿಸಿದರು

ಶಾಲಾ ಕಾಲೇಜುಗಳ ಆಡಳಿತ ಸಂಸ್ಥೆಗಳು ತಮ್ಮ ಶಿಕ್ಷಣ ಸಂಸ್ಥೆ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟ ಹಾಗೂ ಬಳಕೆ ಬಗ್ಗೆ ತೀವ್ರ ನಿಗಾ ವಹಿಸಬೇಕು. ಯಾವುದೇ ಅಕ್ರಮ ಚಟುವಟಿಕೆಗಳು, ವಿದ್ಯಾರ್ಥಿಗಳ ವರ್ತನೆಯಲ್ಲಿ ಅನುಮಾನ ಕಂಡುಬಂದರೆ ಕೂಡಲೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದರು.

ಹಿರಿಯೂರು ತಾಲೂಕು ಕಂದಿಕೆರೆ ಗ್ರಾಮದ ಪ್ರಾವಿಜನ್ ಸ್ಟೋರ್ ಒಂದರಲ್ಲಿ ಮದ್ಯ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಈಗಾಗಲೇ ಪ್ರಕರಣ ದಾಖಲಿಸಲಾಗಿದೆ. ಪ್ರಾವಿಜನ್ ಸ್ಟೋರ್‌ಗೆ ಮದ್ಯ ಸರಬರಾಜು ಮಾಡಿದ ಮದ್ಯದ ಅಂಗಡಿಯ ಲೈಸೆನ್ಸ್ (ಸನ್ನದು) ಅಮಾನತು ಮಾಡಲು ಶಿಫಾರಸ್ಸು ಮಾಡುವಂತೆ ಜಿಲ್ಲಾಕಾರಿ ಟಿ.ವೆಂಕಟೇಶ್ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ವೈದ್ಯರು ನೀಡುವ ಔಷಧ ಚೀಟಿ ಇಲ್ಲದೆ, ಪ್ರಲೋಭಕ ಔಷಧಗಳನ್ನು ಮಾರಾಟ ಮಾಡುವಂತಿಲ್ಲ. ಈ ಕುರಿತು ಜಿಲ್ಲೆಯ ಎಲ್ಲಾ ಔಷಧ ಅಂಗಡಿಗಳ ಮಾಲಿಕರೊಂದಿಗೆ ಸಭೆ ನಡೆಸಿ ಎಚ್ಚರಿಕೆ ನೀಡಬೇಕು. ಒಂದು ವೇಳೆ ವೈದ್ಯರ ಶಿಫಾರಸು ಚೀಟಿ ಇಲ್ಲದೆಯೇ ಪ್ರಲೋಭಕ ಔಷಧಗಳನ್ನು ಮಾರಾಟ ಮಾಡುವುದು ಕಂಡುಬಂದರೆ, ಅವರ ಪರವಾನಿಗೆಯನ್ನು ರದ್ದು ಪಡಿಸಲು ಶಿಫಾರಸ್ಸು ಮಾಡುವಂತೆ ಜಿಲ್ಲಾ ಔಷಧ ನಿಯಂತ್ರಕರಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾತನಾಡಿ, ಮಾದಕ ವ್ಯಸನ ಹಾಗೂ ಅಪರಾಧ ಕೃತ್ಯಗಳಿಗೆ ನೇರ ಸಂಬಂಧಿದೆ. ಮಾದಕ ವ್ಯಸನಿಗಳು ಮಾನಸಿಕ ಸ್ಥಿಮಿತ ಕಳೆದುಕೊಳ್ಳುವುದರಿಂದ ಕೊಲೆ, ಅತ್ಯಾಚಾರ ಮುಂತಾದ ಅಪರಾಧ ಕೃತ್ಯವೆಸಗುತ್ತಾರೆ. ಮಾದಕ ಸೇವನೆಯ ದುಷ್ಪರಿಣಾಮ, ಅಪರಾಧ ಹಾಗೂ ಕಾನೂನಿನ ಬಗ್ಗೆ ರಜೆಯ ಬಳಿಕ ಶಾಲಾ ಕಾಲೇಜುಗಳು ಪ್ರಾರಂಭಗೊಂಡ ನಂತರ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಹಮಿಕೊಳ್ಳಲಾಗುವುದು ಎಂದು ಹೇಳಿದರು.

ನಾರ್ಕೋಟಿಕ್ ವಿಭಾಗದ ಪೊಲೀಸ್ ಇನ್ಸಪೆಕ್ಟರ್ ವೆಂಕಟೇಶ್ ರೆಡ್ಡಿ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ 40 ಹಾಗೂ ಪ್ರಸಕ್ತ ಸಾಲಿನಲ್ಲಿ 30 ಗಾಂಜಾ ಸೇವನೆ ಪ್ರಕರಣಗಳು ದಾಖಲಾಗಿವೆ. ಯಾವುದೇ ರೀತಿಯ ವೈದ್ಯಕೀಯ ಹಾಗೂ ರಾಸಾಯನಿಕ ಮಾದಕ ವಸ್ತುಗಳ ಸೇವನೆ ಅಥವಾ ಮಾರಾಟದ ಪ್ರಕರಣಗಳು ದಾಖಲಾಗಿಲ್ಲ. ನಾಯಕನಹಟ್ಟಿ, ರಾಂಪುರ, ರಾಮಗಿರಿ ಬೆಟ್ಟದ ಸುತ್ತಮುತ್ತಲಿನ ಪ್ರದೇಶದಲ್ಲಿ ಚೆಂಡೂ ಹೂ, ತೊಗರಿ ಬೆಳೆಗಳ ಮದ್ಯ ಹಾಗೂ ಅರಣ್ಯ ಪ್ರದೇಶದಲ್ಲಿ ಗಾಂಜಾ ಬೆಳೆಯಲಾಗುತ್ತದೆ. ಈ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ ಕೂಂಬಿಂಗ್ ನಡೆಸಲಾಗಿದೆ. ಇದರ ಹೊರತಾಗಿ ನಗರ ಪ್ರದೇಶದಲ್ಲಿ ಮಾತ್ರೆ ಹಾಗೂ ಕೆಲವು ಕೆಮ್ಮಿನ ಔಷಧ, ಸಲ್ಯೂಷನ್‍ಗಳ ಸೇವೆನೆ ಮಾಡುತ್ತಿರುವುದು ಬೆಳಕಿಗೆ ಬಂದಿವೆ. ಪದೇ ಪದೇ ಗಾಂಜಾ ಸೇವಿಸುವರನ್ನು ಜಿಲ್ಲಾಸ್ಪತ್ರೆಯ ವ್ಯಸನ ಮುಕ್ತ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆದರೆ ಆಸ್ಪತ್ರೆಯಲ್ಲಿ ವ್ಯಸನಿಗಳಿಗೆ ಸಮರ್ಪಕ ಚಿಕಿತ್ಸೆ ದೊರಕುತ್ತಿಲ್ಲ ಎಂದು ಮಾಹಿತಿ ನೀಡಿದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಜಿಲ್ಲಾ ಔಷಧ ನಿಯಂತ್ರಕ ಗಿರೀಶ್ ಸೇರಿದಂತೆ ವಿವಿಧ ಶಾಲಾ ಕಾಲೇಜುಗಳು ಪ್ರಾಂಶುಪಾಲರು ಉಪಸ್ಥಿತರಿದ್ದರು.