ಕನ್ನಡಪ್ರಭ ವಾರ್ತೆ ವಿಜಯಪುರ

ತಾಲೂಕು ಕಚೇರಿಗಳಿಂದ ಹೋಬಳಿ ಮಟ್ಟಕ್ಕೆ ಸರ್ಕಾರದ ಪ್ರತಿಯೊಂದೂ ಯೋಜನೆ ತಲುಪಬೇಕು. ಜನರಿಗಾಗಿ ಈ ಸರ್ಕಾರವಿದೆ. ಹಾಗಾಗಿ ಅಧಿಕಾರಿಗಳು ಸರ್ಕಾರ ಆಶಯಕ್ಕೆ ತಕ್ಕುದಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಭಾನುವಾರ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಜೊತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ನಡೆದ ವಿಡಿಯೋ ಸಂವಾದ ಸಭೆಯ ಬಳಿಕ ಜಿಲ್ಲಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಈ ಸೂಚನೆ ನೀಡಿದರು. ಸ್ಥಳೀಯ ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕುಡಿಯುವ ನೀರಿನ ಬಗ್ಗೆ ಕ್ರಮ ವಹಿಸಬೇಕು. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಹಾಗೂ ಸಚಿವರು ನೀಡಿದ ಸಲಹೆ ಸೂಚನೆಗಳನ್ವಯ ಕಡ್ಡಾಯವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಮುಳವಾಡ ಏತ ನೀರಾವರಿ ಕ್ಯಾನಲ್ ಮೇಲಿನ 23 ಕೆರೆಗಳನ್ನು ಮುಖ್ಯವಾಗಿ ಹಂಜಗಿ ಕೆರೆ ತುಂಬಿಸಲು ಕ್ರಮವಹಿಸಿ. ಮುಂದಿನ ಹತ್ತು ದಿನಗಳಲ್ಲಿ ನೀರು ತುಂಬಿಸಬೇಕು. 1.5 ಟಿಎಂಸಿ ನೀರು ಸಿಂದಗಿ ಆಲಮೇಲ ಹಾಗೂ ಇಂಡಿ ನಾರಾಯಣಪುರ ಜಲಾಶಯದಿಂದ ನೀರು ಹರಿಸಲಾಗುತ್ತಿದೆ ಮಾಹಿತಿ ಸಭೆಗೆ ನೀಡಲಾಯಿತು.

ಜಿಲ್ಲೆಯ ಎಲ್ಲ ಅಂಗನವಾಡಿ ಹಾಗೂ ಶಾಲೆಗಳಲ್ಲಿ ಕುಡಿಯುವ ನೀರಿನ ಲಭ್ಯತೆ ಪಟ್ಟಿ ಮಾಡಿ ಸಿಇಒ ಅವರಿಗೆ ವರದಿ ನೀಡಬೇಕು ಎಂದು ಸೂಚಿಸಿದ ಜಿಲ್ಲಾಧಿಕಾರಿಗಳು, ಶಾಲೆಗಳಲ್ಲಿ ಮಕ್ಕಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಕಟ್ಟಪ್ಪಣೆ ಮಾಡಿದರು. ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿ ಹಾಗೂ ಸಚಿವರು ಹಿರಿಯ ಅಧಿಕಾರಿಗಳು ಇಂದಿನ ವಿಡಿಯೋ ಸಂವಾದ ಸಭೆಯಲ್ಲಿ ನೀಡಿದ ಸೂಚನೆ ಎಲ್ಲ ಅಧಿಕಾರಿಗಳು ಕಟ್ಟುನಿಟ್ಟಾಗಿ ನಿರ್ವಹಿಸಬೇಕು ಎಂದರು.


ವಿಡಿಯೋ ಸಂವಾದ ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಪ್ರೊಬೆಷನರಿ ಐಎಎಸ್ ಅಧಿಕಾರಿ ಅಭಿಷೇಕ ಸೆಹರ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಪ್ರಕಾಶ ವಡ್ಡರ, ಎಡಿಸಿ ಔದ್ರಾಮ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಕೃಷಿ ಜಂಟಿನಿರ್ದೇಶಕ ಶಿವನಗೌಡ ಪಾಟೀಲ, ತೋಟಗಾರಿಕಾ ಜಂಟಿ ನಿರ್ದೇಶಕ ಸಿದ್ರಾಮಯ್ಯ ಬರಗಿಮಠ, ಆಹಾರ ಇಲಾಖೆ ಉಪನಿರ್ದೇಶಕ ವಿನಕುಮಾರ ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಬದ್ರುದ್ದಿನ ಸೌದಾಗರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕುಡಿಯುವ ನೀರಿಗೆ ಆದ್ಯತೆ ನೀಡಿ: ಜಿಲ್ಲೆಯಲ್ಲಿ ಮಳೆ ಅಭಾವದಿಂದಾಗಿ ಜನತೆಯ ಹಿತದೃಷ್ಟಿಯಿಂದ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಮತ್ತು ಉದ್ಯೋಗ ಖಾತ್ರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ತೀವ್ರ ನಿಗಾ ವಹಿಸಬೇಕು. ಸಮಸ್ಯೆ ಇರುವ ಕಡೆಗಳಲ್ಲಿ ತಕ್ಷಣವೇ ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಕುಡಿಯುವ ನೀರಿಗೆ ಸಂಬಂಧಿಸಿದಂತೆ ವಿಳಂಬವಿಲ್ಲದೆ ತಕ್ಷಣವೇ ಜನರ ಸಮಸ್ಯೆಗೆ ಸ್ಪಂದಿಸಬೇಕು. ಜಿಲ್ಲೆಯಲ್ಲಿ ಮೇವಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಗ್ರಾಮೀಣ ಭಾಗದ ಜನರು ಉದ್ಯೋಗ ಅರಸಿ ಬೇರೆಡೆ ಗುಳೆ ಹೋಗದಂತೆ ತಡೆಯಲು ಗ್ರಾಮ ಪಂಚಾಯತಿ ಮಟ್ಟದಲ್ಲಿ ವಿಬಿಜಿ ರಾಜ್ ಜಿ ಯೋಜನೆ ಕುರಿತ ವ್ಯಾಪಕ ಪ್ರಚಾರ ಕೈಗೊಂಡು ಸ್ಥಳೀಯವಾಗಿ ಉದ್ಯೋಗಗಳನ್ನು ಸೃಷ್ಟಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.