ಸಾರಾಂಶ
ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ನಲ್ಲಿ ಕೃಷಿ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿಗೆ ಮಹತ್ವ ನೀಡುವ ಮೂಲಕ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮಹಿಳೆಯರಿಗೆ ವಿಶೇಷ ಆದ್ಯತೆ ನೀಡಿದ್ದಾರೆ ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ತಿಳಿಸಿದರು.
ಶಿರಸಿ: ಕೇಂದ್ರ ಸರ್ಕಾರ ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್‌ನ ಕುರಿತು ವಿರೋಧ ಪಕ್ಷಗಳು ದುರುದ್ದೇಶಪೂರ್ವಕ ಆರೋಪವನ್ನು ಮಾಡುತ್ತಿವೆ. ಜನರ ದಿಕ್ಕುತಪ್ಪಿಸುವ ಕೆಲಸ ಮಾಡಬಾರದು. ಅಂಕಿ- ಸಂಖ್ಯೆಗಳ ಮೂಲಕ ಮಾತನಾಡಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ನಲ್ಲಿ ಕೃಷಿ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿಗೆ ಮಹತ್ವ ನೀಡುವ ಮೂಲಕ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮಹಿಳೆಯರಿಗೆ ವಿಶೇಷ ಆದ್ಯತೆ ನೀಡಿ, ಸರ್ವಾಂಗೀಣ ಅಭಿವೃದ್ಧಿಯ ಕೇಂದ್ರ ಬಜೆಟ್ ಆಗಿದೆ. ೪.೧ ಕೋಟಿ ಯುವಕರಿಗೆ ೫ ವರ್ಷದ ಅವಧಿಯಲ್ಲಿ ಉದ್ಯೋಗ ಪ್ರಕಟಿಸಲಾಗಿದೆ. ಇದಕ್ಕಾಗಿ ₹೧.೪೮ ಲಕ್ಷ ಕೋಟಿ ಮೀಸಲಿಟ್ಟಿದೆ. ಮೊದಲ ಬಾರಿ ಉದ್ಯೋಗಕ್ಕೆ ಸೇರುವವರಿಗೆ ಪ್ರಥಮ ತಿಂಗಳ ಸಂಬಳವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಇದು ಸುವರ್ಣಾಕ್ಷರದಲ್ಲಿ ಬರೆದಿಡುವುದಾಗಿದೆ. ರಾಜ್ಯ ಸರ್ಕಾರದ ಉದ್ಯಮದ ಸಹಯೋಗದೊಂದಿಗೆ ೫ ವರ್ಷದಲ್ಲಿ ೨೦ ಲಕ್ಷ ಉದ್ಯೋಗವನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಗ್ರಾಮೀಣ ಭಾಗದ ಮೂಲ ಸೌಕರ್ಯ ಹಾಗೂ ಸರ್ವಋತು ರಸ್ತೆಗೆ ಪ್ರಧಾನ ಮಂತ್ರಿ ಗ್ರಾಮ್ ಸಡಕ್ ಯೋಜನೆಗೆ ದಾಖಲೆ ಪ್ರಮಾಣದಲ್ಲಿ ಹಣ ಮೀಸಲಿಟ್ಟಿದೆ ಎಂದರು.ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ, ಕಳೆದ ೧೫ ದಿನದಿಂದ ಉಂಟಾದ ಅತಿವೃಷ್ಟಿಯಿಂದ ಭೂ ಕುಸಿತ ಉಂಟಾಗಿ, ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಹಾನಿಗೊಳಗಾದ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ ಪರಿಹಾರ ನೀಡಲು ವಿಳಂಬ ಮಾಡುತ್ತಿದೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ, ಜಿಲ್ಲಾ ವಕ್ತಾರ ಸದಾನಂದ ಭಟ್ಟ ನಿಡಗೋಡ, ನಗರ ಮಂಡಲಾಧ್ಯಕ್ಷ ಆನಂದ ಸಾಲೇರ, ನಗರಸಭೆ ಮಾಜಿ ಅಧ್ಯಕ್ಷ ಗಣಪತಿ ನಾಯ್ಕ, ಜಿಲ್ಲಾ ಕಾರ್ಯಾಲಯದ ಕಾರ್ಯದರ್ಶಿ ಶ್ರೀರಾಮ ನಾಯ್ಕ ಇದ್ದರು.