ಸಾರಾಂಶ
ಆಶ್ರಮ ಶಾಲೆ, ವಸತಿ ನಿಲಯಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಪ್ರಾರ್ಥನೆ ವೇಳೆಯಲ್ಲಿ ಕುಷ್ಠರೋಗದ ಬಗ್ಗೆ ಅರಿವು ಮೂಡಿಸಬೇಕು.
ಹೊಸಪೇಟೆ: ಕುಷ್ಠರೋಗ ಬಾಧಿತ ಪ್ರದೇಶದಲ್ಲಿ ಹೆಚ್ಚಿನ ಜನ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆಯೊಂದಿಗೆ ವಿವಿಧ ಇಲಾಖೆಗಳು ಒಟ್ಟಾಗಿ ಶ್ರಮಿಸೋಣ ಎಂದು ಜಿಪಂ ಸಿಇಒ ಅಕ್ರಂ ಶಾ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಸಿಇಒ ಕಚೇರಿಯಲ್ಲಿ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ನಿಮಿತ್ತ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು.ಕುಷ್ಠರೋಗ ಪ್ರಕರಣಗಳು ಪತ್ತೆಯಾದ ಪ್ರದೇಶ, ವಾರ್ಡ್‌ಗಳಿಗೆ ಹೆಚ್ಚಿನ ಆದ್ಯತೆ ನೀಡಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ತಾಲೂಕು, ಗ್ರಾಮ ಪಂಚಾಯಿತಿಗಳಲ್ಲಿ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ-2025ರ ಕುರಿತು ಕಾರ್ಯಕ್ರಮಗಳನ್ನು ಗ್ರಾಮ ಪಂಚಾಯಿತಿವಾರು, ಆಯಾ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಸಹಯೋಗದಲ್ಲಿ ವಿಶೇಷ ಗ್ರಾಮಸಭೆ, ಆಯಾ ಗ್ರಾಮಗಳಲ್ಲಿ ಶಾಲಾ, ಕಾಲೇಜು ಮಕ್ಕಳಿಂದ ಜಾಥಾ ಕಾರ್ಯಕ್ರಮ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಬೇಕು ಎಂದರು.ಜಿಲ್ಲೆಯ ಆಶ್ರಮ ಶಾಲೆ, ವಸತಿ ನಿಲಯಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಪ್ರಾರ್ಥನೆ ವೇಳೆಯಲ್ಲಿ ಕುಷ್ಠರೋಗದ ಬಗ್ಗೆ ಅರಿವು ಮೂಡಿಸಬೇಕು. ಸಾರ್ವಜನಿಕರಿಗೆ ಕುಷ್ಠರೋಗದ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಬೇಕು. ಕುಷ್ಠರೋಗ ಸಂಪೂರ್ಣ ವಾಸಿಯಾಗಬಲ್ಲದಾಗಿದ್ದು, ವೈಜ್ಞಾನಿಕವಾಗಿ ನಿರಂತರ ಚಿಕಿತ್ಸೆಯ ಅಗತ್ಯವಿದೆ ಎಂಬುದನ್ನು ರೋಗಿಗೆ ಹಾಗೂ ರೋಗಿಯ ಕುಟುಂಬಕ್ಕೆ ಮನದಟ್ಟು ಮಾಡಬೇಕು. ರೋಗದ ಲಕ್ಷಣಗಳು ಕಂಡುಬರುವವರಿಗೆ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆ ಮತ್ತು ಚಿಕಿತ್ಸೆ ಪಡೆದುಕೊಳ್ಳುವಂತೆ ಅರಿವು ಮೂಡಿಸಬೇಕಿದೆ ಎಂದರು.
ಬಳಿಕ ಜಿಪಂ ಸಿಇಒ ಪ್ರತಿಜ್ಞಾವಿಧಿ ಬೋಧಿಸಿದರು. ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಕೆ.ರಾಧಿಕಾ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಸಕ್ತ ವರ್ಷದಲ್ಲಿ 103 ಹೊಸ ಕುಷ್ಠರೋಗಿಗಳನ್ನು ಪತ್ತೆ ಹಚ್ಚಿದ್ದು, 76 ಕುಷ್ಠರೋಗ ಫಲಾನುಭವಿಗಳಿಗೆ ಕುಷ್ಠರೋಗದಿಂದ ಗುಣಮುಖಗೊಳಿಸಲಾಗಿದೆ. 111 ಕುಷ್ಠರೋಗಿಗಳು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲೆಯ ಎಲ್ಲ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಭಾಗವಹಿಸಿದ್ದರು.