ಸಾರಾಂಶ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಉಸ್ತುವಾರಿ ಕಾರ್ಯದರ್ಶಿ ಸೂಚನೆ ಕನ್ನಡಪ್ರಭ ವಾರ್ತೆ ರಾಯಚೂರು
ಜಿಲ್ಲೆಯಲ್ಲಿರುವ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಯ ಅಧೀನದಲ್ಲಿರುವ ಕಾಮಗಾರಿಗಳು, ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಮತ್ತು ಹೆಚ್ಚಿನ ಪ್ರಗತಿ ಸಾಧಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಜೆ.ರವಿಶಂಕರ ಅವರು ಅಧಿಕಾರಿಗಳಿಗೆ ಸೂಚಿಸಿದರು.ಸ್ಥಳೀಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಂಗಳವಾರ ಮಾತನಾಡಿದರು.ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ಜಿಲ್ಲೆಯ ವಸತಿನಿಲಯಗಳ ಪೈಕಿ 50 ವಸತಿ ನಿಲಯಗಳು ಸ್ವಂತ ಕಟ್ಟಡದಲ್ಲಿದ್ದು, 29 ಬಾಡಿಗೆ ಕಟ್ಟಡದಲ್ಲಿವೆ. ಇಲಾಖೆಯಿಂದ ನಿರ್ಮಾಣ ಹಂತದಲ್ಲಿ 10 ವಸತಿ ನಿಲಯಗಳಿದ್ದು, ಬಾಡಿಗೆ ರಹಿತ 4 ವಸತಿ ನಿಲಯಗಳಿದ್ದು, ಕೂಡಲೇ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಅದರಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ಒಟ್ಟು 68 ವಸತಿ ನಿಲಯಗಳ ಪೈಕಿ 54 ಸ್ವಂತ ಕಟ್ಟಡದಲ್ಲಿದ್ದು, 14 ಬಾಡಿಗೆಯಲ್ಲಿವೆ. ಉಳಿದಂತೆ ನಿರ್ಮಾಣ ಹಂತದಲ್ಲಿರುವ 4 ಕಟ್ಟಗಳ ಬಾಕಿ ಕಾಮಗಾರಿಗಳನ್ನು ಕುಡಲೇ ಪೂರ್ಣಗೊಳಿಸುವಂತೆ ತಿಳಿಸಿದರು.ಆರೋಗ್ಯ ಇಲಾಖೆಯ ವ್ಯಾಪ್ತಿಯಲ್ಲಿರುವ 7 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪೈಕಿ 2 ಕಟ್ಟಡಗಳು ಮಾತ್ರ ಪೂರ್ನಗೊಮಡಿದ್ದು, ಉಳಿದ ಐದು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು 1 ಹಳೆಯ ಆರೋಗ್ಯ ಕೇಂದ್ರದ ದುರಸ್ಥಿ ಕಾರ್ಯ ಸೇರಿದಂತೆ 26 ಹೊಸ ಆರೋಗ್ಯ ಕೇಂದ್ರಗಳನ್ನು ಶೀಘ್ರವೇ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಬೆಳೆ ಹಾನಿಯಾಗಿರುವ ರೈತರಿಗೆ ಪರಿಹಾರ ಒದಗಿಸುವ ಹಿನ್ನಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ರೈತರಿಗೆ ಬೆಳೆ ವಿಮೆ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು ಸರ್ಕಾರದಿಂದ ರೈತರಿಗಾಗಿ ಇರುವ ಯೋಜನೆಗಳನ್ನು ರೈತರಿಗೆ ಮುಟ್ಟಿಸುವಲ್ಲಿ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಕಾಳಜಿಯಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು.ಸರ್ಕಾರದಿಂದ ಜಾರಿಗೊಳಿಸಲಾದ ಯೋಜನೆಗಳಲ್ಲಿ ಯಾವುದೇ ಲೋಪದೋಷಗಳಾಗದಂತೆ ಕ್ರಮ ಕೈಗೊಳ್ಳಬೇಕು ಮತ್ತು ಗೃಹಲಕ್ಷ್ಮೀ ಯೋಜನೆಯಲ್ಲಿ ಸಾಕಷ್ಟು ವಿಳಂಬವಾಗುತ್ತಿದ್ದು, ಇದಕ್ಕೆ ಸೂಕ್ತ ಪರಿಹಾರ ನೀಡಲು ಮೇಲಾಧಿಕಾರಿಗಳೊಂದಿಗೆ ಚರ್ಚಿಸಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ, ಸಹಾಯಕ ಆಯುಕ್ತೆ ಮಹಿಬೂಬಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಯೋಜನಾ ನಿರ್ದೇಶಕ ಪ್ರಕಾಶ.ವಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ- ಸಿಬ್ಬಂದಿ ವರ್ಗದವರು ಹಾಜರಿದ್ದರು.