ಚುನಾವಣಾ ಪ್ರಕ್ರಿಯೆಯು ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ನಡೆಯುವಂತೆ ಪ್ರತಿಯೊಬ್ಬ ಅಧಿಕಾರಿಯೂ ಅತ್ಯಂತ ಎಚ್ಚರಿಕೆ, ಜವಾಬ್ದಾರಿ ಹಾಗೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.

ಕನ್ನಡಪ್ರಭ ವಾರ್ತೆ ಗದಗ

ಚುನಾವಣಾ ಪ್ರಕ್ರಿಯೆಯು ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ನಡೆಯುವಂತೆ ಪ್ರತಿಯೊಬ್ಬ ಅಧಿಕಾರಿಯೂ ಅತ್ಯಂತ ಎಚ್ಚರಿಕೆ, ಜವಾಬ್ದಾರಿ ಹಾಗೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್‌ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಭಾರತ ಚುನಾವಣಾ ಆಯೋಗ ಹಾಗೂ ಜಿಲ್ಲಾಡಳಿತದ ವತಿಯಿಂದ ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ಕ್ಕೆ ಸಂಬಂಧಿಸಿದಂತೆ ಎಂಸಿಸಿ ನೋಡಲ್ ಅಧಿಕಾರಿಗಳು, ಫ್ಲೈಯಿಂಗ್ ಸ್ಕ್ವಾಡ್ ಟೀಮ್‌ (ಎಫ್‌ಎಸ್‌ಟಿ), ವೀಡಿಯೋ ಸರ್ವೆಲೆನ್ಸ್ ಟೀಮ್‌ (ವಿ‌ಎಸ್‌ಟಿ) ಹಾಗೂ ವೀಡಿಯೋ ವೀವಿಂಗ್ ಟೀಮ್‌ (ವಿ‌ವಿ‌ಟಿ) ತಂಡಗಳಿಗಾಗಿ ಬುಧವಾರ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಚುನಾವಣಾ ಸಂದರ್ಭ ಚುನಾವಣಾ ಆಯೋಗದ ಮಾರ್ಗಸೂಚಿಗಳು ಹಾಗೂ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅಧಿಕಾರಿಗಳ ಪ್ರಮುಖ ಜವಾಬ್ದಾರಿಯಾಗಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಅಕ್ರಮ, ನಿಯಮಬಾಹಿರ ಚಟುವಟಿಕೆ, ಮತದಾರರಿಗೆ ಆಮಿಷವೊಡ್ಡುವ ಪ್ರಯತ್ನ, ಅನುಮತಿ ಇಲ್ಲದೆ ಪ್ರಚಾರ ನಡೆಸುವುದು ಅಥವಾ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಕಂಡುಬಂದಲ್ಲಿ ಅದನ್ನು ನಿರ್ಲಕ್ಷಿಸದೆ ತಕ್ಷಣವೇ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು. ಅಂತಹ ಪ್ರಕರಣಗಳ ಕುರಿತು ನಿಯಮಾನುಸಾರ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ಸೂಕ್ತ ವರದಿ ಸಲ್ಲಿಸಬೇಕು ಸೂಚಿಸಿದರು.

ಎಫ್‌ಎಸ್‌ಟಿ ತಂಡಗಳು ತಮ್ಮ ವ್ಯಾಪ್ತಿಯಲ್ಲಿ ನಡೆಯುವ ಚುನಾವಣಾ ಸಂಬಂಧಿತ ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಬೇಕು. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುವ ಸಾಧ್ಯತೆ ಇರುವ ಘಟನೆಗಳು ಕಂಡುಬಂದಲ್ಲಿ ತ್ವರಿತವಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಗತ್ಯವಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದರು.

ಚುನಾವಣಾ ಕಾರ್ಯದಲ್ಲಿ ನಿಯೋಜನೆಗೊಂಡಿರುವ ಪ್ರತಿಯೊಬ್ಬ ಅಧಿಕಾರಿ ಹಾಗೂ ಸಿಬ್ಬಂದಿ ಪಾತ್ರ ಮಹತ್ವದ್ದಾಗಿದೆ. ಯಾವುದೇ ಒಂದು ತಂಡದ ಕಾರ್ಯನಿರ್ವಹಣೆಯಲ್ಲಿ ಉಂಟಾಗುವ ಲೋಪವು ಚುನಾವಣಾ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರಬಹುದಾದ್ದರಿಂದ, ಎಲ್ಲರೂ ಪರಸ್ಪರ ಸಮನ್ವಯ ಹಾಗೂ ಸೂಕ್ತ ಸಹಕಾರದೊಂದಿಗೆ ಕಾರ್ಯನಿರ್ವಹಿಸಬೇಕು ಎಂದರು.

ಚುನಾವಣಾ ಕರ್ತವ್ಯ ನಿರ್ವಹಿಸುವಾಗ ಅಧಿಕಾರಿಗಳು ಯಾವುದೇ ವ್ಯಕ್ತಿ, ಸಂಘಟನೆ ಅಥವಾ ರಾಜಕೀಯ ಪಕ್ಷದ ಪರವಾಗಿ ಅಥವಾ ವಿರುದ್ಧವಾಗಿ ವರ್ತಿಸದೆ, ಸಂಪೂರ್ಣ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಚುನಾವಣಾ ಆಯೋಗದ ನಿರ್ದೇಶನಗಳು ಹಾಗೂ ಸಂಬಂಧಿಸಿದ ನಿಯಮಗಳನ್ನು ತಿಳಿದುಕೊಂಡು ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಪಂ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಡಿವೈಎಸ್ಪಿ ಮಹಾಂತೇಶ್ ಸಜ್ಜನ್ ಸೇರಿ ಅಧಿಕಾರಿಗಳು ಇದ್ದರು.