ನಿವೃತ್ತ ನೌಕರರ ಹಿತಾಸಕ್ತಿ ಕಾಪಾಡುವುದರ ಜತೆಗೆ ಸಂಘದ ಅಭಿವೃದ್ಧಿ ಹಾಗೂ ಬಲವರ್ಧನೆಗೆ ನೂತನ ಪದಾಧಿಕಾರಿಗಳು ಮತ್ತು ಸದಸ್ಯರು ಒಗ್ಗಟ್ಟಿನಿಂದ ಶ್ರಮಿಸಬೇಕು.
ಕನ್ನಡಪ್ರಭ ವಾರ್ತೆ ಶಿರಹಟ್ಟಿ
ನಿವೃತ್ತ ನೌಕರರ ಹಿತಾಸಕ್ತಿ ಕಾಪಾಡುವುದರ ಜತೆಗೆ ಸಂಘದ ಅಭಿವೃದ್ಧಿ ಹಾಗೂ ಬಲವರ್ಧನೆಗೆ ನೂತನ ಪದಾಧಿಕಾರಿಗಳು ಮತ್ತು ಸದಸ್ಯರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ನಿವೃತ್ತ ನೌಕರ ಸಂಘದ ಜಿಲ್ಲಾ ಅಧ್ಯಕ್ಷ ಕೆ.ಎಚ್. ಬೇಲೂರ ಕರೆ ನೀಡಿದರು.ಪಟ್ಟಣದಲ್ಲಿ ನಿವೃತ್ತ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ನೂತನ ಸದಸ್ಯರ ಆಯ್ಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರಿ ಸೇವೆಯಲ್ಲಿ ಹಲವು ವರ್ಷಗಳ ಕಾಲ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ನೌಕರರು ಸಮಾಜದ ಆಸ್ತಿಯಾಗಿದ್ದಾರೆ. ತಮ್ಮ ಸೇವಾ ಅವಧಿಯಲ್ಲಿ ಗಳಿಸಿರುವ ಅನುಭವ, ಜ್ಞಾನ ಹಾಗೂ ಸೇವಾ ಮನೋಭಾವವನ್ನು ಸಮಾಜದ ಒಳಿತಿಗಾಗಿ ಬಳಸಿಕೊಳ್ಳಬೇಕು ಎಂದರು.
ನಿವೃತ್ತಿಯ ನಂತರವೂ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಪರಸ್ಪರ ಸಹಕಾರ, ಸ್ನೇಹ ಮತ್ತು ಸೌಹಾರ್ದತೆಯನ್ನು ಬೆಳೆಸಿಕೊಳ್ಳಬೇಕು. ನಿವೃತ್ತ ನೌಕರರು ಎದುರಿಸುತ್ತಿರುವ ಪಿಂಚಣಿ, ಆರೋಗ್ಯ, ಸೌಲಭ್ಯಗಳು ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸಂಘವು ಧ್ವನಿಯಾಗಬೇಕು. ಸದಸ್ಯರ ಸಮಸ್ಯೆಗಳಿಗೆ ಸ್ಪಂದಿಸಿ ನ್ಯಾಯಯುತ ಪರಿಹಾರ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ಅಧಿಕಾರ ಮತ್ತು ಸ್ಥಾನಮಾನಕ್ಕೆ ಸೀಮಿತವಾಗದೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಸಂಘದ ಸದಸ್ಯತ್ವವನ್ನು ಹೆಚ್ಚಿಸುವುದರ ಜತೆಗೆ ಸಂಘದ ಚಟುವಟಿಕೆಗಳನ್ನು ವಿಸ್ತರಿಸಿ, ಸಂಘಕ್ಕೆ ಉತ್ತಮ ಹೆಸರು ತರುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು. ಹಿರಿಯರು ಮತ್ತು ಕಿರಿಯ ಸದಸ್ಯರ ನಡುವೆ ಉತ್ತಮ ಬಾಂಧವ್ಯ ಬೆಳೆಸಿ ಸಂಘವನ್ನು ಮಾದರಿ ಸಂಘಟನೆಯನ್ನಾಗಿ ರೂಪಿಸಬೇಕು ಎಂದು ಆಶಯ ವ್ಯಕ್ತಪಡಿಸಿದರು.
ನೂತನ ನಿವೃತ್ತ ನೌಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ಪಿ.ಎಫ್. ಬಂತಿ ಮಾತನಾಡಿ, ನಿವೃತ್ತ ನೌಕರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಘಟಿತರಾಗಿ ಹೋರಾಟ ನಡೆಸುವುದು ಇಂದಿನ ಅಗತ್ಯವಾಗಿದೆ. ನಿವೃತ್ತಿಯ ನಂತರವೂ ನೌಕರರು ಹಲವು ಆಡಳಿತಾತ್ಮಕ ಹಾಗೂ ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಪಿಂಚಣಿ ವಿಳಂಬ, ಪಿಂಚಣಿ ಪರಿಷ್ಕರಣೆ, ವೈದ್ಯಕೀಯ ಸೌಲಭ್ಯ, ಬಾಕಿ ಸೌಲಭ್ಯಗಳ ಬಿಡುಗಡೆ ಸೇರಿದಂತೆ ವಿವಿಧ ಸಮಸ್ಯೆಗಳು ಅವರನ್ನು ಕಾಡುತ್ತಿವೆ. ಇಂತಹ ಸಮಸ್ಯೆಗಳಿಗೆ ಸ್ಪಂದಿಸಿ ನ್ಯಾಯ ಒದಗಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.ಸಂಘಟನೆ ಎಂಬುದು ಕೇವಲ ಸಭೆ, ಸಮಾರಂಭಗಳಿಗೆ ಸೀಮಿತವಾಗದಂತೆ ಸದಸ್ಯರ ಸಂಕಷ್ಟಗಳಿಗೆ ಸ್ಪಂದಿಸುವ, ಅವರ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹಾಗೂ ಸರ್ಕಾರದ ಗಮನ ಸೆಳೆಯುವ ಶಕ್ತಿಯುತ ವೇದಿಕೆಯಾಗುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ. ಹಿರಿಯ ನಿವೃತ್ತ ನೌಕರರ ಅನುಭವ ಹಾಗೂ ಮಾರ್ಗದರ್ಶನವನ್ನು ಪಡೆದುಕೊಂಡು ಸಂಘದ ಚಟುವಟಿಕೆಗಳನ್ನು ವಿಸ್ತರಿಸುವುದಾಗಿ ಹೇಳಿದರು.
ನೂತನ ಪ್ರಧಾನ ಕಾರ್ಯದರ್ಶಿಯಾಗಿ ಎಚ್.ಎಂ. ಪಲ್ಲೇದ ಪ್ರಾಸ್ತಾವಿಕ ಮಾತನಾಡಿದರು. ನಿಕಟಪೂರ್ವ ಅಧ್ಯಕ್ಷ ಎಚ್.ಎಂ. ದೇವಗೀರಿ ಅಧ್ಯಕ್ಷತೆ ವಹಿಸಿದ್ದರು. ಡಿ.ಎಚ್. ಸರಖವಾಸ್, ಎ.ಸಿ. ಪಾಟೀಲ, ಸಿ.ಪಿ. ಕಾಳಗಿ, ವಾಸುದೇವ ಕಲಾಲ, ಐ.ಜಿ. ಬಡಿಗೇರ ಇತರರು ಕಾರ್ಯಕ್ರಮದಲ್ಲಿ ಇದ್ದರು.