ಹೊಸದುರ್ಗ ತಾಲೂಕಿನ ಕಸಬಾ ಹೋಬಳಿಯ ದೇವಿಗೆರೆ ಗ್ರಾಮದಲ್ಲಿ ನಡೆದ ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಹೊಳಲ್ಕೆರೆ ಶಾಸಕ ಎಂ ಚಂದ್ರಪ್ಪ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಹೊಸದುರ್ಗ

ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೆ.ಎಂ. ಸುರೇಶ್ ಅವರನ್ನು ಗೆಲ್ಲಿಸುವ ಮೂಲಕ ಮೈತ್ರಿಯ ಶಕ್ತಿಯನ್ನು ಸಾಬೀತುಪಡಿಸಬೇಕು ಎಂದು ಹೊಳಲ್ಕೆರೆ ಶಾಸಕ ಡಾ. ಎಂ ಚಂದ್ರಪ್ಪ ಕರೆ ನೀಡಿದರು.

ತಾಲೂಕಿನ ಕಸಬಾ ಹೋಬಳಿಯ ದೇವಿಗೆರೆ ಗ್ರಾಮದಲ್ಲಿ ನಡೆದ ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಈ ನಿಟ್ಟಿನಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದರು.

ವಿದ್ಯಾವಂತ ಮತದಾರರು ದೇಶದ ಪ್ರಸ್ತುತ ವಿದ್ಯಮಾನಗಳು, ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಗಮನದಲ್ಲಿಟ್ಟುಕೊಂಡು ತಮ್ಮ ಅಮೂಲ್ಯ ಮತದಾನದ ಹಕ್ಕನ್ನು ಚಲಾಯಿಸಬೇಕು ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಟಿ. ಕುಮಾರಸ್ವಾಮಿ ಮಾತನಾಡಿ, ಪದವೀಧರ ಕ್ಷೇತ್ರದ ಚುನಾವಣೆಯೊಂದಿಗೆ ಮುಂದಿನ ಜಿಲ್ಲಾ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನೂ ಗಮನದಲ್ಲಿಟ್ಟುಕೊಂಡು ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಬಲಪಡಿಸಬೇಕು. ಕಾರ್ಯಕರ್ತರು ಗ್ರಾಮಮಟ್ಟದಲ್ಲಿ ಜನರೊಂದಿಗೆ ನಿರಂತರ ಸಂಪರ್ಕವಿಟ್ಟುಕೊಂಡು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದರು.

ಈ ವೇಳೆ ಜಿಲ್ಲಾ ಬಿಜೆಪಿ ಪ್ರ.ಕಾ ವೆಂಕಟೇಶ್ ಯಾದವ್, ಮಂಡಲ ಅಧ್ಯಕ್ಷ ಅಣ್ಣಪ್ಪಸ್ವಾಮಿ, ಜಿಪಂ ಮಾಜಿ ಸದಸ್ಯ ಗುರುಸ್ವಾಮಿ, ಹನುಮಂತಪ್ಪ, ಹೆಬ್ಬಳ್ಳಿ ಮಲ್ಲಿಕಾರ್ಜುನ್, ಬಿ.ಎಸ್. ದ್ಯಾಮಪ್ಪ, ಕೋಡಿಹಳ್ಳಿ ತಮ್ಮಣ್ಣ, ದೊಡ್ಡಘಟ್ಟ ಲಕ್ಷ್ಮಣ್ ಹಲವು ಮುಖಂಡರು ಹಾಗೂ ಪದವೀಧರ ಮತದಾರರು ಉಪಸ್ಥಿತರಿದ್ದರು.