ಮಕ್ಕಳ ಕುರಿತು ಬದ್ಧತೆಯಿಂದ ಕೆಲಸ ನಿರ್ವಹಿಸಿ

| Published : Jul 13 2024, 01:36 AM IST

ಸಾರಾಂಶ

ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿ ಪೋಕ್ಸೋ ಕಾಯ್ದೆ-2021 ಹಾಗೂ ಹದಿಹರೆಯದ ಮಕ್ಕಳ ಪ್ರಕರಣಗಳ ಕುರಿತ ಪರಿಶೀಲನಾ ಕಾರ್ಯಾಗಾರವನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಅವರು ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕ ರಾಜ್ಯ 2016ರಲ್ಲಿ ಮಕ್ಕಳ ಹಕ್ಕುಗಳ ಕಾಯ್ದೆಗೆ ತಿದ್ದುಪಡಿ ತಂದಿದೆ. ಮಕ್ಕಳ ಬಗೆಗೆ ಬದ್ಧತೆಯಿಂದ ಕೆಲಸ ನಿರ್ವಹಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ತಿಳಿಸಿದರು. ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಪೋಕ್ಸೋ ಕಾಯ್ದೆ-2021 ಹಾಗೂ ಹದಿಹರೆಯದ ಮಕ್ಕಳ ಪ್ರಕರಣಗಳ ಕುರಿತ ಪರಿಶೀಲನಾ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ ತಡೆಯಲು ಎಲ್ಲರೂ ಕಾರ್ಯ ಪ್ರವೃತ್ತರಾಗಬೇಕು. ಮಕ್ಕಳನ್ನು ನಮ್ಮ ಮಕ್ಕಳಂತೆ ನೋಡಿಕೊಂಡರೆ ಮಾತ್ರ ದೌರ್ಜನ್ಯಕ್ಕೆ ಒಳಗಾಗುವ ಮಗುವಿಗೆ ನ್ಯಾಯ ಒದಗಿಸಲು ಸಾಧ್ಯ. ಮಕ್ಕಳ ಶಿಕ್ಷಣ, ರಕ್ಷಣೆ, ಪೋಷಣೆ, ಆರೋಗ್ಯದ ವೃದ್ಧಿಗೆ ಮೊದಲ ಆದ್ಯತೆ ನೀಡಬೇಕು ಎಂದರು.

ಮಕ್ಕಳ ಹಕ್ಕುಗಳ ಒಡಂಬಡಿಕೆ 1989ರಲ್ಲಿ ಜಾರಿಯಾದಾಗಿನಿಂದ 6 ಬಾರಿ ನಮ್ಮ ದೇಶದಿಂದ ಮಕ್ಕಳ ಹಕ್ಕುಗಳ ಬಗೆಗಿನ ವರದಿಯನ್ನು ವಿಶ್ವಸಂಸ್ಥೆಗೆ ನೀಡಲಾಗಿದೆ. ಲೈಂಗಿಕ ದೌರ್ಜನ್ಯ, ಬಾಲ್ಯ ವಿವಾಹದಿಂದ ಹದಿಹರೆಯದ ವಯಸ್ಸಿನಲ್ಲಿಯೇ ಮಕ್ಕಳು ತಾಯಂದಿರಾಗುತ್ತಿರುವ ಪ್ರಕರಣಗಳು ಕಂಡು ಬರುತ್ತಿವೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಇದನ್ನು ತಡೆಯಲು ವಿವಿಧ ಇಲಾಖೆಗಳು ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ತಿಳಿಸಿದರು.

ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಸ್.ಚಿದಂಬರ ಅವರು, ಸಮಾಜದ ಸುಸ್ಥಿರ ಬೆಳವಣಿಗೆಗೆ ಸರ್ಕಾರದ ಕಾನೂನುಗಳ ಬಗ್ಗೆ ತಿಳಿದುಕೊಂಡು ಅದನ್ನು ಕಾರ್ಯರೂಪಕ್ಕೆ ತರಬೇಕು. ಬಾಲ್ಯವಿವಾಹಗಳಿಗೆ ಕಡಿವಾಣ ಹಾಕಬೇಕು. ಮಕ್ಕಳು ಶಾಲೆ ಬಿಡದ ರೀತಿ ನೋಡಿಕೊಳ್ಳಬೇಕು. ಮಕ್ಕಳು ವಿದ್ಯಾವಂತರಾದರೆ ಬಾಲ್ಯ ವಿವಾಹ ಕಡಿಮೆಯಾಗುತ್ತದೆ. ಪೋಕ್ಸೋ ಕಾಯ್ದೆ ಬಗ್ಗೆ ಪೋಷಕರಿಗೆ ಅರಿವು ಮೂಡಿಸಬೇಕು ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಮೈಸೂರಿನ ಸಹಾಯಕ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿ ಜಿ.ಎಸ್ ಪ್ರಸನ್ನಕುಮಾರ್ ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಎನ್.ಎಂ ಸರಸ್ವತಿ ಅವರು ವಿಶೇಷ ಉಪನ್ಯಾಸ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಮಂಜುನಾಥ, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯಾಧಿಕಾರಿ ಡಾ.ಮಂಜುನಾಥ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎನ್.ಚಲುವರಾಜ್, ಡಾ.ಅಂಕಪ್ಪ ಇತರರು ಕಾರ್ಯಗಾರದಲ್ಲಿ ಉಪಸ್ಥಿತರಿದ್ದರು.