ಜುಲೈ 9ರಂದು ಕಾರ್ಮಿಕರ ಮಹಾಮುಷ್ಕರ: ಮಂಗಳೂರಲ್ಲಿ ಬೃಹತ್ ಪ್ರತಿಭಟನೆ

| Published : Jul 04 2025, 11:48 PM IST

ಜುಲೈ 9ರಂದು ಕಾರ್ಮಿಕರ ಮಹಾಮುಷ್ಕರ: ಮಂಗಳೂರಲ್ಲಿ ಬೃಹತ್ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಕೇಂದ್ರ ಕಾರ್ಮಿಕ ಸಂಘಟನೆಗಳು ಹಾಗೂ ರೈತ ಸಂಘಟನೆಗಳ ಸಂಯುಕ್ತ ಕಿಸಾನ್ ಮೋರ್ಚಾ ಜಂಟಿ ನೇತೃತ್ವದಲ್ಲಿ ಜು.9ರಂದು ಅಖಿಲ ಭಾರತ ಮಹಾಮುಷ್ಕರ ನಡೆಯಲಿದ್ದು, ಅಂದು ದ.ಕ. ಜಿಲ್ಲಾ ಮಟ್ಟದಲ್ಲೂ ಬೃಹತ್‌ ಪ್ರತಿಭಟನೆ ಏರ್ಪಡಿಸಲಾಗಿದೆ.

ಕನ್ನಡಪ್ರಭ ವಾರ್ತೆ ಮಂಗಳೂರು

ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕೇಂದ್ರ ಕಾರ್ಮಿಕ ಸಂಘಟನೆಗಳು ಹಾಗೂ ರೈತ ಸಂಘಟನೆಗಳ ಸಂಯುಕ್ತ ಕಿಸಾನ್ ಮೋರ್ಚಾ ಜಂಟಿ ನೇತೃತ್ವದಲ್ಲಿ ಜು.9ರಂದು ಅಖಿಲ ಭಾರತ ಮಹಾಮುಷ್ಕರ ನಡೆಯಲಿದ್ದು, ಅಂದು ಜಿಲ್ಲಾ ಮಟ್ಟದಲ್ಲೂ ಬೃಹತ್‌ ಪ್ರತಿಭಟನೆ ಏರ್ಪಡಿಸಲಾಗಿದೆ ಎಂದು ಸಿಐಟಿಯು ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್‌ ಕುಮಾರ್‌ ಬಜಾಲ್‌ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜು.9ರಂದು ಬೆಳಗ್ಗೆ 10ಕ್ಕೆ ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದಿಂದ ಕಾರ್ಮಿಕರ ಬೃಹತ್‌ ಪ್ರತಿಭಟನಾ ಮೆರವಣಿಗೆ ಹೊರಡಲಿದ್ದು, ಬಳಿಕ 10.30 ಗಂಟೆಗೆ ಕ್ಲಾಕ್‌ ಟವರ್‌ ಬಳಿ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ. ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.8 ಗಂಟೆ ಕೆಲಸದ ಅವಧಿ, ಖಾಯಂ ಕೆಲಸ, ಕೆಲಸಕ್ಕೆ ತಕ್ಕ ವೇತನ, ಮುಷ್ಕರದ ಹಕ್ಕು, ಸಂಘ ಕಟ್ಟುವ ಹಕ್ಕು ಇನ್ನಿತರ ಹಕ್ಕುಗಳನ್ನು ಇಲ್ಲವಾಗಿಸಿ ಕಾರ್ಮಿಕರನ್ನು ಗುಲಾಮರನ್ನಾಗಿಸುವ ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ರದ್ದುಪಡಿಸಬೇಕು. ಬೆಲೆ ಏರಿಕೆಗೆ ಅನುಗುಣವಾಗಿ ಎಲ್ಲ ವಿಭಾಗಗಳ ಕಾರ್ಮಿಕರಿಗೆ ರಾಷ್ಟ್ರವ್ಯಾಪಿ 26 ಸಾವಿರ ರು. ಹಾಗೂ ರಾಜ್ಯವ್ಯಾಪಿ 36 ಸಾವಿರ ರು. ಕನಿಷ್ಠ ವೇತನ ನಿಗದಿಪಡಿಸಬೇಕು. ಗುತ್ತಿಗೆ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ತಕ್ಷಣ ಜಾರಿ ಮಾಡಬೇಕು. ಹಳೆ ಪಿಂಚಣಿ ಯೋಜನೆ ಜಾರಿ ಮಾಡುವುದು, ಸಾರ್ವಜನಿಕ ಉದ್ದಿಮೆ, ನಿಗಮ ಮತ್ತು ಇಲಾಖೆಗಳನ್ನು ಖಾಸಗಿಕರಣಗೊಳಿಸುವ ರಾಷ್ಟ್ರೀಯ ನಗದೀಕರಣ ಪೈಪ್‌ಲೈನ್‌ ಯೋಜನೆಯನ್ನು ರದ್ದುಪಡಿಸಬೇಕು. ವಿದ್ಯುತ್‌ ಖಾಸಗಿಕರಣ ಮಾಡುವ ವಿದ್ಯುತ್‌ ತಿದ್ದುಪಡಿ ಮಸೂದೆ ಹಿಂಪಡೆಯಬೇಕು ಎಂದು ಸುನಿಲ್‌ ಕುಮಾರ್‌ ಆಗ್ರಹಿಸಿದರು.ಅಖಿಲ ಭಾರತ ಬ್ಯಾಂಕ್‌ ನೌಕರರ ಸಂಘಟನೆ ಪ್ರಧಾನ ಕಾರ್ಯದರ್ಶಿ ಫಣೀಂದ್ರ ರಾವ್‌, ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೀತಾರಾಮು ಬೆರಿಂಜ, ಎಐಕೆಎಸ್‌ ಜಿಲ್ಲಾಧ್ಯಕ್ಷ ಕೆ. ಯಾದವ ಶೆಟ್ಟಿ, ರಾಜ್ಯ ರೈತ ಸಂಘ ಜಿಲ್ಲಾಧ್ಯಕ್ಷ ಓಸ್ವಾಲ್ಡ್‌ ಫರ್ನಾಂಡಿಸ್‌, ಸಿಐಟಿಯು ಜಿಲ್ಲಾಧ್ಯಕ್ಷ ಜೆ. ಬಾಲಕೃಷ್ಣ ಶೆಟ್ಟಿ, ಎಐಟಿಯುಸಿ ಜಿಲ್ಲಾ ಉಪಾಧ್ಯಕ್ಷ ಕರುಣಾಕರ ಮಾರಿಪಳ್ಳ, ಸಿಐಟಿಯು ಜಿಲ್ಲಾ ಖಜಾಂಚಿ ಯೋಗೀಶ್ ಜಪ್ಪಿನಮೊಗರು ಇದ್ದರು.