ಕಾರ್ಮಿಕ ಇಲಾಖೆಯ ಯೋಜನೆಗಳಲ್ಲಿ ಯಾವುದೇ ಲೋಪದೋಷಗಳಿದ್ದರೆ ಅಥವಾ ಸೌಲಭ್ಯ ಪಡೆಯುವಲ್ಲಿ ಸಮಸ್ಯೆಗಳು ಎದುರಾದರೆ ತಮ್ಮ ಗಮನಕ್ಕೆ ತರಬೇಕು.
ಕಂಪ್ಲಿ: ಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಅವರ ಭವಿಷ್ಯ ಉಜ್ವಲಗೊಳಿಸಲು ಆದ್ಯತೆ ನೀಡಬೇಕು. ಬಡತನ ಶಾಪವೆಂದು ಭಾವಿಸದೆ ಆದರಿಂದ ಹೊರಬರಲು ಶಿಕ್ಷಣ ಮತ್ತು ಕೌಶಲ ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಶಾಸಕ ಜೆ.ಎನ್. ಗಣೇಶ್ ಹೇಳಿದರು.
ಪಟ್ಟಣದ ಸಕ್ಕರೆ ಕಾರ್ಖಾನೆಯ ರಾಮದೇವರ ಗುಡಿ ಆವರಣದಲ್ಲಿ ರಾಜ್ಯ ಶ್ರಮಜೀವಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸೇವಾ ಸಂಘದ ಪ್ರಥಮ ವಾರ್ಷಿಕೋತ್ಸವ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಾರ್ಮಿಕರ ಹಿತದೃಷ್ಟಿಯಿಂದ ಹಲವು ಉತ್ತಮ ಯೋಜನೆ ರೂಪಿಸಿದ್ದು, ಸರ್ಕಾರ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಆದ್ಯತೆ ನೀಡುತ್ತಿದೆ. ಕಾರ್ಮಿಕ ಇಲಾಖೆಯ ಯೋಜನೆಗಳಲ್ಲಿ ಯಾವುದೇ ಲೋಪದೋಷಗಳಿದ್ದರೆ ಅಥವಾ ಸೌಲಭ್ಯ ಪಡೆಯುವಲ್ಲಿ ಸಮಸ್ಯೆಗಳು ಎದುರಾದರೆ ತಮ್ಮ ಗಮನಕ್ಕೆ ತರಬೇಕು. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದರು.
ಕಾರ್ಮಿಕರು ಹಗಲಿರುಳು ಶ್ರಮಿಸಿ ಕುಟುಂಬ ನಿರ್ವಹಿಸುತ್ತಿದ್ದು, ಅವರ ದುಡಿಮೆಗೆ ತಕ್ಕ ಗೌರವ ಮತ್ತು ಸಾಮಾಜಿಕ ಭದ್ರತೆ ದೊರೆಯಬೇಕು. ಆರ್ಥಿಕ ಸಂಕಷ್ಟದಿಂದ ಹೊರಬರಲು ದುಡಿಮೆಯ ಜತೆಗೆ ಕೌಶಲಾಭಿವೃದ್ಧಿಗೂ ಒತ್ತು ನೀಡಬೇಕು. ಅನಗತ್ಯ ಸಾಲ ಮಾಡುವುದನ್ನು ತಪ್ಪಿಸಿ, ಗಳಿಕೆಗೆ ಅನುಗುಣವಾಗಿ ಜೀವನ ನಡೆಸುವ ಆರ್ಥಿಕ ಶಿಸ್ತು ಬೆಳೆಸಿಕೊಳ್ಳಬೇಕು. ದುಡಿಮೆಯಿಂದ ಬಂದ ಹಣ ಕುಟುಂಬದ ಅಭಿವೃದ್ಧಿ ಹಾಗೂ ಮಕ್ಕಳ ಶಿಕ್ಷಣಕ್ಕೆ ವಿನಿಯೋಗಿಸಬೇಕು ಎಂದು ಸಲಹೆ ನೀಡಿದರು.ಕೆಲಸದ ಒತ್ತಡ ಮತ್ತು ದೈಹಿಕ ಶ್ರಮದಿಂದ ಉಂಟಾಗುವ ಆಯಾಸ ಮರೆಯಲು ದುಶ್ಚಟಗಳಿಗೆ ಬಲಿಯಾಗಬಾರದು. ಮದ್ಯಪಾನ ಸೇರಿದಂತೆ ಆರೋಗ್ಯಕ್ಕೆ ಹಾನಿಕಾರಕ ಅಭ್ಯಾಸಗಳಿಂದ ದೂರವಿದ್ದು, ಕುಟುಂಬದೊಂದಿಗೆ ಆರೋಗ್ಯಕರ ಜೀವನ ನಡೆಸಬೇಕು. ಕಾರ್ಮಿಕ ಇಲಾಖೆಯಿಂದ ದೊರೆಯುವ ವಿವಿಧ ಸೌಲಭ್ಯ ಮತ್ತು ಯೋಜನೆಗಳ ಕುರಿತು ಮಾಹಿತಿ ಪಡೆದು ಅವುಗಳನ್ನು ಸದ್ಬಳಕೆ ಮಾಡಿಕೊಂಡು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷ ಶಿವಕುಮಾರಗೌಡ ಮಾತನಾಡಿ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಸಮಾಜದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದರೂ ಅವರಿಗೆ ಅಗತ್ಯ ಮೂಲಸೌಕರ್ಯ ಹಾಗೂ ಆರೋಗ್ಯ ಭದ್ರತೆ ಸಮರ್ಪಕವಾಗಿ ದೊರೆಯುತ್ತಿಲ್ಲ. ಕಾರ್ಮಿಕರು ರಾಜ್ಯದ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಕೂಲವಾಗುವಂತಹ ಸಮಗ್ರ ಆರೋಗ್ಯ ಸೌಲಭ್ಯ ಕಲ್ಪಿಸಬೇಕು. ನಿವೇಶನ, ವಸತಿ ಸೌಲಭ್ಯ, ಪಿಂಚಣಿ ಹಾಗೂ ಆರೋಗ್ಯ ವಿಮೆ ಒದಗಿಸುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ ವಿಶೇಷ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.ಸಂಘದ ಚಟುವಟಿಕೆ ವಿಸ್ತರಿಸಲು ಹಾಗೂ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಲು ಸ್ವಂತ ಕಟ್ಟಡದ ಅಗತ್ಯವಿದ್ದು, ಸಂಘದ ಕಟ್ಟಡ ನಿರ್ಮಾಣಕ್ಕೆ ನಿವೇಶನ ಮಂಜೂರು ಮಾಡಬೇಕು ಎಂದು ಶಾಸಕರಿಗೆ ಮನವಿ ಸಲ್ಲಿಸಿದರು.
ಕಾರ್ಯಕ್ರಮದ ಅಂಗವಾಗಿ ವೈದ್ಯ ಡಾ. ಮಂಜುನಾಥ ಪಾಟೀಲ್ ಅವರು 150ಕ್ಕೂ ಹೆಚ್ಚು ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿ ಆರೋಗ್ಯದ ಬಗ್ಗೆ ಅಗತ್ಯ ಸಲಹೆ ನೀಡಿದರು.ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ, ಸಂಘದ ತಾಲೂಕಾಧ್ಯಕ್ಷ ಶ್ರೀಹರಿ, ಕೊಪ್ಪಳ ಜಿಲ್ಲಾಧ್ಯಕ್ಷ ಪಂಪಾಪತಿ ಇಂಗಳಗಿ, ಗಂಗಾವತಿ ತಾಲೂಕಾಧ್ಯಕ್ಷ ಹನುಮಂತಪ್ಪ ಡಣಾಪುರ, ಕಾರಟಗಿ ಅಧ್ಯಕ್ಷ ಬಾಬು ಮೇಸ್ತ್ರಿ, ಪದಾಧಿಕಾರಿ ಸೋಮಣ್ಣ ಶ್ರೇಷ್ಠಿ, ಜಿ.ಸುರೇಶ್, ಮಹೇಶಗೌಡ, ಸೆಲ್ವರಾಜು, ಹನುಮೇಶ್, ಬಾಬು, ದೇವದಾಸ್, ಶ್ರೀನಿವಾಸ್ ಸೇರಿದಂತೆ ಸಂಘದ ಸದಸ್ಯರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.