ಕನ್ನಡಪ್ರಭ ವಾರ್ತೆ ಬೆಂಗಳೂರು

ನಾಲ್ಕು ಲೇಬರ್‌ ಕೋಡ್‌ ರದ್ದತಿ ಹಾಗೂ ಮನರೇಗಾ ಮರುಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಕರೆದಿದ್ದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ರಾಜ್ಯದಲ್ಲಿ ನಿರೀಕ್ಷಿತ ಬೆಂಬಲ ಸಿಗಲಿಲ್ಲ. ರಾಜ್ಯದಲ್ಲಿ ಕಾರ್ಮಿಕ ಸಂಘಗಳ ಜಂಟಿ ಸಮಿತಿ (ಜೆಸಿಟಿಯು) ಹಾಗೂ ಸಂಯುಕ್ತ ಹೋರಾಟ ಕರ್ನಾಟಕ (ಎಸ್‌ಎಚ್‌ಕೆ) ಸಂಘಟನೆಗಳ ಹೋರಾಟ ಬಹುತೇಕ ಪ್ರತಿಭಟನೆಗೆ ಸೀಮಿತವಾಯಿತು. ಐಎನ್‌ಟಿಯುಸಿ, ಎಐಟಿಯುಸಿ, ಸಿಐಟಿಯು, ಎಐಯುಟಿಯುಸಿ, ಟಿಯುಸಿಸಿ, ಬಿಸಿಯೂಟ ತಯಾರಕರ ಸಂಘ ಸೇರಿ ಹಲವು ಕಾರ್ಮಿಕ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿ ಆಗಿದ್ದವು. ಬೈಕ್‌ ರ್‍ಯಾಲಿ, ಸಂಚಾರ ತಡೆ, ಬಹಿರಂಗ ಸಭೆಗೆ ಮಾತ್ರ ಮುಷ್ಕರ ಸೀಮಿತ ಆಗುವಂತೆ ಪೊಲೀಸರು ಕ್ರಮ ಕೈಗೊಂಡಿದ್ದರು.

ಇನ್ನು ಮಂಗಳೂರಿನ ಪ್ರಮುಖ ವಾಣಿಜ್ಯ ಕೇಂದ್ರವಾದ ಹಳೆ ಬಂದರು ಸಗಟು ಮಾರುಕಟ್ಟೆಯ ವ್ಯಾಪಾರ ವಹಿವಾಟು ಸ್ತಬ್ಧವಾಗಿತ್ತು. ಬೆಂಗಳೂರಿನಲ್ಲಿ ಮುಷ್ಕರಕ್ಕೆ ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆಯುವ ವೇಳೆ ವಾಗ್ವಾದ ನಡೆಯಿತು. ಮಂಗಳೂರಿನಲ್ಲಿ ಅಂಚೆ ಕಚೇರಿಗೆ ಮುತ್ತಿಗೆ ಹಾಕಲು ಕಾರ್ಮಿಕರು ಯತ್ನಿಸಿದರು. ಇನ್ನುಳಿದಂತೆ ವಿವಿಧ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಕಾರ್ಮಿಕರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಚಾಮರಾಜನಗರದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಮೆರವಣಿಗೆ ನಡೆಸಿದರು. ಮಾನವ ಸರಪಳಿ ನಿರ್ಮಿಸಿ ಕೆಲಕಾಲ ರಸ್ತೆ ತಡೆ ನಡೆಸಿದರು. ಬಳಿಕ ಭಿತ್ತಿಪತ್ರಕ್ಕೆ ಬೆಂಕಿಹಚ್ಚಿ ಅಕ್ರೋಶ ವ್ಯಕ್ತಪಡಿಸಿದರು. ಚಿಕ್ಕಮಗಳೂರಿನಲ್ಲಿಯೂ ಅಂಚೆ ಕಚೇರಿಗೆ ಮುತ್ತಿಗೆ ಹಾಕಲು ಪ್ರತಿಭಟನಾನಿರತರು ಯತ್ನಿಸಿದರಾದರೂ ಪೊಲೀಸರು ಇದಕ್ಕೆ ಅವಕಾಶ ನೀಡಲಿಲ್ಲ.

ನಿರುದ್ಯೋಗ ಸಮಸ್ಯೆ ಅತ್ಯಂತ ಗಂಭೀರ ಸ್ವರೂಪ ತಾಳಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಶಿಕ್ಷಣ ಮತ್ತು ಆರೋಗ್ಯದ ಖಾಸಗೀಕರಣ, ವ್ಯಾಪಾರೀಕರಣದಿಂದಾಗಿ ಆರ್ಥಿಕ ಅಸಮಾನತೆ ಹೆಚ್ಚುತ್ತಿದೆ. ಇದರಿಂದ ಜನ ತೀವ್ರ ಸಂಕಷ್ಟಕ್ಕೆ ತಳ್ಳಲ್ಪಟ್ಟಿದ್ದಾರೆ. ನರೇಗಾ ಯೋಜನೆಯನ್ನು ವಿಬಿ ಜಿ ರಾಮ್ ಜಿ ಎಂಬುದಾಗಿ ಬದಲಿಸಿ, ಉದ್ಯೋಗ ಖಾತ್ರಿ ಹಕ್ಕನ್ನೇ ಕಸಿದು, ಹಳ್ಳಿಗಳ ಬಡಜನರ ಆಸರೆ ಕಿತ್ತುಕೊಂಡಿದೆ ಎಂದು ಪ್ರತಿಭಟನಾಕಾರರು ದೂರಿದರು.