ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆಗಳು ಸಮೀಪಿಸುತ್ತಿದ್ದು, ಈ ಚುನಾವಣೆಯಲ್ಲಿ ಪಕ್ಷ ಜಯಭೇರಿ ಬಾರಿಸುವ ನಿಟ್ಟಿನಲ್ಲಿ ಮಹಿಳಾ ಕಾರ್ಯಕರ್ತೆಯರು ಶ್ರಮಿಸಬೇಕು ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಕರೆ ನೀಡಿದರು.ನಗರದ ಸ್ಟಾರ್ ಸಭಾಂಗಣದಲ್ಲಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆ ರಮೀಜಾ ನದಾಫ್ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿದೆ. ಈ ಎಲ್ಲ ಜನಪರ ಕಾರ್ಯಗಳನ್ನು ಮಹಿಳಾ ಕಾರ್ಯಕರ್ತೆಯರು ಜನರ ಮನೆ ಮನೆಗೆ ತಿಳಿಸುವ ಕಾರ್ಯ ಮಾಡಬೇಕು. ಆ ಮೂಲಕ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆಗಳಲ್ಲಿ ಹೆಚ್ಚು ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಆಯ್ಕೆಯಾಗಲು ಶ್ರಮಿಸಬೇಕು. ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಗೃಹಲಕ್ಷ್ಮಿ ಯೋಜನೆ ಹಣ ಆರ್ಥಿಕ ಸಬಲೀಕರಣದಲ್ಲಿ ಪ್ರಧಾನ ಪಾತ್ರ ವಹಿಸಿದೆ ಎಂದರು.
ಕೆಪಿಸಿಸಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಯುಕ್ತಾ ಪಾಟೀಲ ಮಾತನಾಡಿ, ಇಂದು ಮಹಿಳೆ ಹಿಂದೆಂದಿಗಿಂತಲೂ ದೊಡ್ಡ ಸವಾಲು ಎದುರಿಸುತ್ತಿದ್ದಾಳೆ. ಪ್ರತಿ ನಿಮಿಷಕ್ಕೆ ಮಹಿಳೆ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ ಕಾಲಘಟ್ಟದಲ್ಲಿ ಮಹಿಳೆ ರಾಜಕೀಯವಾಗಿಯೂ ಪ್ರಬಲಗೊಳ್ಳಬೇಕು. ಇಂದಿಗೂ ಶಾಸನ ಸಭೆಗಳಲ್ಲಿ ಮಹಿಳಾ ಪ್ರಾತಿನಿಧ್ಯ ಕಡಿಮೆ. ಮಹಿಳೆಗೆ ಈ ಪ್ರಾತಿನಿಧ್ಯ ದೊರಕಿದಾಗ ಮಾತ್ರ ಮಹಿಳಾ ಸಮಸ್ಯೆಗಳಿಗೆ ಕಡಿವಾಣ ಬೀಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.ನಿಕಟಪೂರ್ವ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ವಿದ್ಯಾರಾಣಿ ತುಂಗಳ, ನೂತನ ಜಿಲ್ಲಾಧ್ಯಕ್ಷೆ ರಮೀಜಾ ನದಾಫ್, ಜಿಪಂ 0ಮಾಜಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ಮಹಾದೇವಿ ಗೋಕಾಕ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ನಗರ ಬ್ಲಾಕ್ ಕಾಂಗ್ರೆಸ್ ಸಮೀತಿ ಅಧ್ಯಕ್ಷ ಸೈಯದ್ ಜಮೀರ್ ಬಕ್ಷಿ, ಕೆಪಿಸಿಸಿ ಸದಸ್ಯ ಅಬ್ದುಲ್ ಹಮೀದ್ ಮುಶ್ರೀಫ್, ಡಾ.ಪ್ರಭುಗೌಡ ಪಾಟೀಲ ಲಿಂಗದಳ್ಳಿ, ಬಿ.ಆರ್.ಪಾಟೀಲ ಯಾಳಗಿ, ಮಹಮ್ಮದ ರಫೀಕ್ ಟಪಾಲ್, ವಸಂತ ಹೊನಮೊಡೆ, ಶ್ರೀದೇವಿ ಉತ್ಲಾಸರ ಉಪಸ್ಥಿತರಿದ್ದರು.