ದೈಹಿಕ ಶಿಕ್ಷಣವು ಮಕ್ಕಳ ಸವಾಂಗೀಣ ಬೆಳವಣಿಗೆಗೆ ಅತ್ಯಗತ್ಯವಾಗಿದ್ದು, ಅದರ ಜವಾಬ್ದಾರಿಯನ್ನು ಪಠ್ಯ ಶಿಕ್ಷಕರು ನಿಭಾಯಿಸಬೇಕಾಗಿ ಬಂದಾಗ ಶಿಕ್ಷಣದ ಗುಣಮಟ್ಟ ಮತ್ತು ಶಿಕ್ಷಕರ ಆರೋಗ್ಯ ಎರಡರ ಮೇಲೂ ಪರಿಣಾಮ ಬೀರುತ್ತದೆ. ವಿದ್ಯಾರ್ಥಿಗಳಲ್ಲಿ ಪ್ರಾಥಮಿಕ ಹಂತದಲ್ಲಿಯೇ ಕ್ರೀಡಾಸಕ್ತಿಯನ್ನು ಬೆಳೆಸುವುದು ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅತ್ಯಂತ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಪ್ರತಿ ಕ್ಲಸ್ಟರ್ ಒಬ್ಬರಂತೆ ದೈಹಿಕ ಶಿಕ್ಷಕರನ್ನು ನೇಮಿಸಲು ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.
ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ತಾಲೂಕಿನ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ಕೊರತೆಯಿಂದಾಗಿ ಲಭ್ಯವಿರುವ ಪಠ್ಯ ಶಿಕ್ಷಕರ ಮೇಲೆ ಕೆಲಸದ ಒತ್ತಡ ಗಣನೀಯವಾಗಿ ಹೆಚ್ಚಾಗಿದೆ. ಇದು ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಎದುರಾಗುತ್ತಿರುವ ಪ್ರಮುಖ ಸವಾಲುಗಳಲ್ಲಿ ಒಂದಾಗಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಬೇಸರ ವ್ಯಕ್ತಪಡಿಸಿದರು.ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಾರ್ಯಾಲಯ ಹಾಗೂ ಕರ್ನಾಟಕ ಪಬ್ಲಿಕ್ ಶಾಲೆ, (ಪ್ರಾಥಮಿಕ ಶಾಲಾ ವಿಭಾಗ) ಪೇಟೆ ಇವರ ಸಂಯುಕ್ತಾಶ್ರಯದಲ್ಲಿ ೨೦೨೬-೨೭ನೇ ಸಾಲಿನ ಕಸಬಾ ಹೋಬಳಿ ಮಟ್ಟದ ೧೪ ವರ್ಷದ ವಯೋಮಾನದೊಳಗಿನ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಾಲೂಕಿನಲ್ಲಿ ಬಹುತೇಕ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಕೊರತೆ ಹೆಚ್ಚಾಗಿದೆ. ಶಿಕ್ಷಣ ಇಲಾಖೆಯ ಮಾಹಿತಿಯಂತೆ ತಾಲೂಕಿನಲ್ಲಿ ಒಟ್ಟು ೧೫೦ ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, ೫ ದೈಹಿಕ ಶಿಕ್ಷಣ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕರ ಕೊರತೆಯಿಂದ ಸರ್ಕಾರಿ ಶಾಲೆಗಳಲ್ಲಿ ಕ್ರೀಡಾ ತರಬೇತಿ ನೀಡುವ ಜವಾಬ್ದಾರಿಯೂ ಸಾಮಾನ್ಯ ಶಿಕ್ಷಕರ ಮೇಲಿದೆ. ದೈಹಿಕ ಶಿಕ್ಷಣವು ಮಕ್ಕಳ ಸವಾಂಗೀಣ ಬೆಳವಣಿಗೆಗೆ ಅತ್ಯಗತ್ಯವಾಗಿದ್ದು, ಅದರ ಜವಾಬ್ದಾರಿಯನ್ನು ಪಠ್ಯ ಶಿಕ್ಷಕರು ನಿಭಾಯಿಸಬೇಕಾಗಿ ಬಂದಾಗ ಶಿಕ್ಷಣದ ಗುಣಮಟ್ಟ ಮತ್ತು ಶಿಕ್ಷಕರ ಆರೋಗ್ಯ ಎರಡರ ಮೇಲೂ ಪರಿಣಾಮ ಬೀರುತ್ತದೆ. ವಿದ್ಯಾರ್ಥಿಗಳಲ್ಲಿ ಪ್ರಾಥಮಿಕ ಹಂತದಲ್ಲಿಯೇ ಕ್ರೀಡಾಸಕ್ತಿಯನ್ನು ಬೆಳೆಸುವುದು ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅತ್ಯಂತ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಪ್ರತಿ ಕ್ಲಸ್ಟರ್ ಒಬ್ಬರಂತೆ ದೈಹಿಕ ಶಿಕ್ಷಕರನ್ನು ನೇಮಿಸಲು ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.
ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ಕ್ರೀಡೆಗಳು ಮಹತ್ವದ ಪಾತ್ರ ವಹಿಸುತ್ತವೆ. ಪ್ರತಿಯೊಬ್ಬರು ದೈಹಿಕವಾಗಿ ಬಲಿಷ್ಠರಾದಾಗ ಮಾತ್ರ ಮಾನಸಿಕವಾಗಿ ಏನಾದರೂ ಸಾಧಿಸಲು ಸಾಧ್ಯ. ಆದ್ದರಿಂದ ಪಾಠದೊಂದಿಗೆ ಪಠ್ಯೇತರ ಚಟುವಟಿಕೆ ಅತಿ ಪ್ರಮುಖ. ವಿದ್ಯಾರ್ಥಿಗಳು ಕಲಿಕಾಸಕ್ತಿ ಜತೆಗೆ ಕ್ರೀಡೆಗಳಲ್ಲಿ ಪಾಲ್ಗೊಂಡು ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯನ್ನು ಇನ್ನಷ್ಟು ವೃದ್ಧಿಸಿಕೊಳ್ಳಬೇಕು. ಕ್ರೀಡೆಗಳಿಂದ ಬುದ್ಧಿ ಚುರಾಕಾಗುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಸ್ಪರ್ಧಾಸ್ಫೂರ್ತಿಯಿಂದ ಭಾಗವಹಿಸಬೇಕು, ಶಿಕ್ಷಣದಷ್ಟು ಆದ್ಯತೆ ಕ್ರೀಡೆಗಳಿಗೂ ಇರಬೇಕು. ಯುವ ಪ್ರತಿಭೆಗಳು ಶಾಲೆಗಳಲ್ಲಿ ಆಯೋಜಿಸುವ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು. ಕ್ರೀಡೆಯಲ್ಲಿ ರಾಜ್ಯಮಟ್ಟವನ್ನು ಪ್ರತಿನಿಧಿಸುವವರಿಗೆ ವಿಶೇಷ ನೆರವು ನೀಡಲಾಗುವುದು. ಮಕ್ಕಳ ಆಸಕ್ತಿಯನ್ನು ಗಮನಿಸಿ ಶಿಕ್ಷಕರು ಅವರನ್ನು ಪ್ರೋತ್ಸಾಹಿಸಬೇಕು, ಸೋಮವಾರ ಪ್ರೌಢಶಾಲಾ ಹಂತದ ತಾಲೂಕು ಮಟ್ಟದ ಕ್ರೀಡಾಕೂಟ ನಡೆಯಲಿದ್ದು ಎಲ್ಲ ಸಹಕಾರ ನೀಡಲಾಗುವುದು. ಕ್ರೀಡೆಯಲ್ಲಿ ಎಲ್ಲರೂ ಗೆಲ್ಲಲು ಸಾಧ್ಯವಿಲ್ಲ. ಸೋಲು ಯಾವುದೇ ಕಾರಣಕ್ಕೂ ನಿರಾಶೆ ಉಂಟು ಮಾಡದೇ ಪುನಃ ಗೆಲ್ಲುವ ಛಲ ಹುಟ್ಟಿಸಬೇಕು ಎಂದು ತಿಳಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಚ್.ಸತೀಶ್ ಕ್ರೀಡಾಧ್ವಜಾರೋಹಣ ನೆರವೇರಿಸಿದರು. ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ಕೆ.ಎನ್.ಅನಿಲ್ ತಂಡಗಳ ಪರಿಚಯ ಮಾಡಿಕೊಂಡರು, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಹಡೇನಹಳ್ಳಿ ಲೋಕೇಶ್ ಕ್ರೀಡಾಜ್ಯೋತಿ ಸ್ವಾಗತಿಸಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಕೆ. ಟಿ. ಆನಂದ್, ಅನ್ನದಾಸೋಹ ಸಹಾಯಕ ನಿರ್ದೇಶಕ ಎಚ್. ಡಿ. ಉಮಾಶಂಕರ್, ಟಿಎಪಿಸಿಎಂಎಸ್ ಅಧ್ಯಕ್ಷ ಎಚ್. ಆರ್. ವೆಂಕಟೇಶಮೂರ್ತಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಸಿ. ಎನ್. ಗೋಪಾಲ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ಟಿ. ಮಂಜೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಜಿ.ದ್ಯಾವೇಗೌಡ, ಪ್ರಧಾನ ಕಾರ್ಯದರ್ಶಿ ಸಿ.ಆರ್. ಮಂಜುನಾಥ, ಸಂಘಟನಾ ಕಾರ್ಯದರ್ಶಿ ರೇವಣ ಸ್ವಾಮಿ, ರಾಜ್ಯ ಪರಿಷತ್ ಸದಸ್ಯ ಎ.ಎಸ್.ಪ್ರಮೋದ್, ಶಿಕ್ಷಣ ಸಂಯೋಜಕ ಜಿ. ಇ. ಲೋಕೇಶ್, ಹೋಬಳಿ ಶಿಕ್ಷಣ ಸಂಯೋಜಕರು, ಸಮೂಹ ಸಂಪನ್ಮೂಲ ವ್ಯಕ್ತಿಗಳು ಶಿಕ್ಷಕರ ಸಂಘದ ಪದಾಧಿಕಾರಿಗಳು ಸೇರಿದಂತೆ ೭೦೦ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು.