ಮಡಿಕೇರಿ: ಮಕ್ಕಳ ಮೇಲೆ ಒತ್ತಡ ಹೇರದೆ, ಒಳ್ಳೆಯ ಸಲಹೆ-ಮಾರ್ಗದರ್ಶನ ನೀಡುವ ಜೊತೆಗೆ ಧೈರ್‍ಯ ತುಂಬಿ ಮಕ್ಕಳ ಮನಸ್ಸನ್ನು ಪೋಷಕರು ಗೆಲ್ಲುವಂತಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್‍ಯದರ್ಶಿ ಶುಭ ಹೇಳಿದರು. ಕೊಡಗು ಜಿಲ್ಲಾಡಳಿತ, ನವದೆಹಲಿಯ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸಹಯೋಗದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಹಾಗೂ ವಿವಿಧ ಇಲಾಖೆಯ ಸಹಭಾಗಿತ್ವದಲ್ಲಿ ಮಕ್ಕಳ ಹಕ್ಕುಗಳನ್ನು ಅನುಷ್ಠಾನಗೊಳಿಸಲು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದ ವಿವಿಧ ಕಾಯ್ದೆಗಳ ಕುರಿತು ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ತರಬೇತಿ ಕಾರ್‍ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಎಲ್ಲರ ಕುಟುಂಬದಲ್ಲೂ ಮಕ್ಕಳ ಮೇಲೆ ಪ್ರತಿನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಒತ್ತಡ ಸೃಷ್ಟಿಸುತ್ತಿದ್ದು, ಇದರಿಂದ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ಮಕ್ಕಳಿಗೆ ಅಗತ್ಯ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು.ಮಕ್ಕಳಿಗೆ ಪರೀಕ್ಷೆ ಫಲಿತಾಂಶದ ಅಂಕ ಮತ್ತು ಅಕ್ಕಪಕ್ಕದ ವಿದ್ಯಾರ್ಥಿಗಳ ಜೊತೆ ಹೋಲಿಕೆ ಮಾಡುವುದು ಸರಿಯಲ್ಲ, ಇಂತಹ ಹೋಲಿಕೆಯು ಚಿಕ್ಕ ಮಕ್ಕಳಲ್ಲಿ ಹೆಚ್ಚಿನ ಪ್ರಭಾವ ಬೀರುತ್ತದೆ. ಆದ್ದರಿಂದ ವಿಶಾಲ ಹಾಗೂ ವಿಸ್ತಾರವಾಗಿ ಮಕ್ಕಳನ್ನು ಸ್ನೇಹಿತರಂತೆ ಕಾಣಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿವರಿಸಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಮಾತನಾಡಿ, ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಬೇಕು. ಮಕ್ಕಳ ಅಭಿವೃದ್ಧಿ ಮತ್ತು ವಿಕಾಸಕ್ಕೆ ಒತ್ತು ನೀಡಬೇಕು. ಜೊತೆಗೆ ಮೂಲ ಸೌಲಭ್ಯವನ್ನು ಕಲ್ಪಿಸಬೇಕು. ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ನಿಲ್ಲಬೇಕು. ಕಾನೂನಿನ ಬಗ್ಗೆ ಎಲ್ಲೆಡೆ ಮಾಹಿತಿ ನೀಡಬೇಕು. ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದಂತೆ ಇನ್ನಷ್ಟು ಜಾಗೃತಿ ಕಾರ್‍ಯಕ್ರಮ ನಡೆಯಬೇಕು ಎಂದು ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಹಕ್ಕುಗಳ ರಕ್ಷಣಾ ಘಟಕ, ಶಾಲಾ ಶಿಕ್ಷಣ ಇಲಾಖೆ, ಪೊಲೀಸ್, ಕಾರ್ಮಿಕ ಇಲಾಖೆ ಹೀಗೆ ವಿವಿಧ ಇಲಾಖೆಗಳು ಕೈಜೋಡಿಸಿ ಸಮನ್ವಯತೆಯಿಂದ ಕೆಲಸ ಮಾಡಬೇಕು. ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.
ಯುನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕ ಡಾ.ಕೆ. ರಾಘವೇಂದ್ರ ಭಟ್ ಅವರು ಬಾಲ ನ್ಯಾಯ ಕಾಯಿದೆ ಹಾಗೂ ಪೋಕ್ಸೊ ಕಾಯಿದೆ ಕುರಿತು ಮತ್ತು ಮಕ್ಕಳ ಹಕ್ಕುಗಳ ಕುರಿತು ವಿವರವಾಗಿ ತಿಳಿಸಿದರು.
ನವದೆಹಲಿಯ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸಲಹೆಗಾರರಾದ ಶುಭಿ ಶರ್ಮಾ ಅವರು ಮಕ್ಕಳ ಮೇಲೆ ದೈಹಿಕ ದಂಡನೆ ಕುರಿತ ಕಾಯ್ದೆ ಕುರಿತು ಮತ್ತು ಇದರಿಂದ ಮಕ್ಕಳ ಮೇಲಾಗುವ ದುಷ್ಪರಿಣಾಮಗಳ ಕುರಿತು ಮಾತನಾಡಿದರು. ಜಿ.ಪಂ. ಉಪ ಕಾರ್ಯದರ್ಶಿ ಚಂದ್ರಶೇಖರ್, ತಹಸೀಲ್ದಾರ್ ಶ್ರೀಧರ, ಡಯಟ್ ಕೂಡಿಗೆ ಪ್ರಾಂಶುಪಾಲ ಅರಸ್, ಇತರರು ಇದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಸ್. ಹೊನ್ನೇಗೌಡ ಸ್ವಾಗತಿಸಿದರು. ಮಧು ಪ್ರಾರ್ಥಿಸಿದರು. ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಬಿ.ಎಸ್. ಜಯಪ್ಪ ನಿರೂಪಿಸಿ, ವಂದಿಸಿದರು.
ಪ್ರತಿಯೊಂದು ಕುಟುಂಬಕ್ಕೂ ಹಾಗೂ ಸಮಾಜಕ್ಕೂ ಮಕ್ಕಳೇ ಸಂಪತ್ತಾಗಿದ್ದು, ಮಕ್ಕಳ ಸೂಕ್ಷ್ಮತೆಯನ್ನು ಅರ್ಥ ಮಾಡಿಕೊಂಡು ಮಕ್ಕಳ ಬೆಳವಣಿಗೆಗೆ ಪೂರಕವಾಗಿ ಕೆಲಸ ಮಾಡಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಮಯಕ್ಕೆ ತಕ್ಕಂತೆ ಫಲಿತಾಂಶ ಪಡೆದು ಬದುಕುವುದು ಅತ್ಯಗತ್ಯ. ಆದರೆ ಮಕ್ಕಳಲ್ಲಿ ಯಾವುದೇ ಕಾರಣಕ್ಕೂ ಒತ್ತಡ ತರಬಾರದು.
-ವೆಂಕಟೇಶ್ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ