ಸಾರಾಂಶ
ಉಡುಪಿ ಜಿಲ್ಲಾ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಆಶ್ರಯದಲ್ಲಿ ಮಂಗಳೂರಿನ ಯೇನೆಪೋಯ ಮೆಡಿಕಲ್ ಕಾಲೇಜು ಸಹಯೋಗದಲ್ಲಿ ಕ್ಯಾನ್ಸರ್ ಜಾಗೃತಿ ಅರಿವು ಕಾರ್ಯಕ್ರಮ ನಡೆಯಿತು. ರೆಡ್ ಕ್ರಾಸ್ ಜಿಲ್ಲಾ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿಇಲ್ಲಿನ ನೇತ್ರ ಜ್ಯೋತಿ ಕಾಲೇಜು ಆಫ್ ಪ್ಯಾರಾ ಮೆಡಿಕಲ್ ಸೈನ್ಸ್, ನೇತ್ರ ಜ್ಯೋತಿ ಇನ್‌ಸ್ಟಿಟ್ಯೂಟ್ ಆಫ್ ಎಲಾಯ್ಡ್ ಹೆಲ್ತ್ ಸೈನ್ಸ್, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮತ್ತು ಉಡುಪಿ ಜಿಲ್ಲಾ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಆಶ್ರಯದಲ್ಲಿ ಮಂಗಳೂರಿನ ಯೇನೆಪೋಯ ಮೆಡಿಕಲ್ ಕಾಲೇಜು ಸಹಯೋಗದಲ್ಲಿ ಕ್ಯಾನ್ಸರ್ ಜಾಗೃತಿ ಅರಿವು ಕಾರ್ಯಕ್ರಮ (ಉಚಿತ ಮಹಿಳಾ ಸ್ವಾಸ್ಥ್ಯ ಸಂರಕ್ಷಣೆ) ನಡೆಯಿತು.
ರೆಡ್ ಕ್ರಾಸ್ ಜಿಲ್ಲಾ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಉದ್ಘಾಟಿಸಿದರು. ಬಳಿಕ ಮಾತನಾಡಿ, 2000ನೇ ಇಸವಿಯ ಫೆ.4ರಂದು ಪ್ಯಾರಿಸ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ವಿಶ್ವ ಕ್ಯಾನ್ಸರ್ ದಿನವು ಹುಟ್ಟಿಕೊಂಡಿತು. ಕ್ಯಾನ್ಸರ್ ರೋಗಿಗಳ ಜೀವನ ಗುಣಮಟ್ಟ ಸುಧಾರಣೆ, ಕ್ಯಾನ್ಸರ್ ಪತ್ತೆ ಮತ್ತು ಚಿಕಿತ್ಸೆಯ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ವಿಶ್ವಾದ್ಯಂತ ಆಚರಿಸಲಾಗುತ್ತಿದೆ ಎಂದರು.ಮುಖ್ಯ ಅತಿಥಿಗಳಾಗಿ ರೆಡ್‌ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ.ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ, ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುವ ಮಾನವೀಯ ಗುಣವನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮನುಕುಲದ ಬಹುದೊಡ್ಡ ಶತ್ರು ಕ್ಯಾನ್ಸರ್ ರೋಗದ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸುವ ಮೂಲಕ ಸಮಾಜದ ಋಣವನ್ನು ತೀರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಯೇನೆಪೋಯ ಕಾಲೇಜಿನ ವೈದ್ಯರಾದ ಡಾ. ರಚನಾ ಪ್ರಭು, ಡಾ. ಪ್ರಜ್ಞ ಕಿಣಿ, ಮಹಿಳಾ ಸ್ತನ ಕ್ಯಾನ್ಸರ್ ಮತ್ತು ಗರ್ಭಕೋಶದ ಕ್ಯಾನ್ಸರ್, ಬಾಯಿ ಕ್ಯಾನ್ಸರ್‌ಗಳ ಬಗ್ಗೆ ಮಾಹಿತಿ ನೀಡಿದರು.ಅಧ್ಯಕ್ಷತೆಯನ್ನು ಪ್ರಸಾದ್ ನೇತ್ರಾಲಯದ ಆಡಳಿತಾಧಿಕಾರಿ ರಶ್ಮಿ ಕೃಷ್ಣಪ್ರಸಾದ್ ವಹಿಸಿದ್ದರು. ವಿಜಯಾ ಬ್ಯಾಂಕಿನ ಮಾಜಿ ನಿರ್ದೇಶಕ ಹರೀಶ್ ಬಲ್ಲಾಳ್ ಉಪಸ್ಥಿತರಿದ್ದರು. ಪ್ರಸಾದ್ ನೇತ್ರಾಲಯದ ೨೦೦ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಂಡರು.