ಪರಿಸರದ ಮೇಲೆ ಪ್ರತಿಯೊಬ್ಬರಿಗೂ ಹಕ್ಕಿರುವಂತೆಯೇ ಅದನ್ನು ರಕ್ಷಿಸುವ ಜವಾಬ್ದಾರಿಯೂ ಇದೆ. ಆ ಜವಾಬ್ದಾರಿಯಿಂದ ನುಣುಚಿಕೊಂಡರೆ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ ಎಂದು ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರುಥ್ರನ್ ಪಿ. ಹೇಳಿದರು.

ಕುಂದಾಪುರ: ಪರಿಸರದ ಮೇಲೆ ಪ್ರತಿಯೊಬ್ಬರಿಗೂ ಹಕ್ಕಿರುವಂತೆಯೇ ಅದನ್ನು ರಕ್ಷಿಸುವ ಜವಾಬ್ದಾರಿಯೂ ಇದೆ. ಆ ಜವಾಬ್ದಾರಿಯಿಂದ ನುಣುಚಿಕೊಂಡರೆ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಪರಿಸರ ಸಂರಕ್ಷಣೆಯ ವಿಷಯದಲ್ಲಿ ನಾವು ನಮ್ಮ ಹಕ್ಕು ಮತ್ತು ಜವಾಬ್ದಾರಿ ಮರೆಯಬಾರದು ಎಂದು ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರುಥ್ರನ್ ಪಿ. ಹೇಳಿದರು.

ಅವರು ಬುಧವಾರ ಬಸ್ರೂರಿನ ಶ್ರೀ ಶಾರದಾ ಕಾಲೇಜಿನಲ್ಲಿ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಅರಣ್ಯ ಇಲಾಖೆ ಹಾಗೂ ಶ್ರೀ ಶಾರದಾ ಕಾಲೇಜು ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಪರಿಸರ ಜಾಗೃತಿ ಕಾರ್ಯಕ್ರಮಕ್ಕೆ ಗಿಡ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.ಸಭಾ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಜಾನ್ ಡಿಸೋಜ ಅವರಿಗೆ ಗಿಡ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದ ಆರ್‌ಎಫ್‌ಒ ರಾಘವೇಂದ್ರ ನಾಯ್ಕ್ ಮಾತನಾಡಿ, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದರು.

ಶ್ರೀ ಶಾರದಾ ಕಾಲೇಜಿನ ಸಂಚಾಲಕಿ ಅನುಪಮಾ ಎಸ್. ಶೆಟ್ಟಿ, ಪ್ರಾಂಶುಪಾಲ ಡಾ. ದಯಾನಂದ ಎನ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ (ಸುಜಿ ಕುರ್ಯ) ಮಾತನಾಡಿದರು.

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ರಾಯಪ್ಪನಮಠ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಆಡಳಿತ ಮಂಡಳಿ ಸದಸ್ಯ ಸುಭಾಷ್ಚಂದ್ರ ಶೆಟ್ಟಿ ಬಾಂಡ್ಯ, ಜಿಲ್ಲಾ ಸಂಘದ ಕಾರ್ಯದರ್ಶಿ ಟಿ. ಲೋಕೇಶ್ ಆಚಾರ್ಯ ಇದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಬೀಜಾಡಿ ಸ್ವಾಗತಿಸಿದರು. ಕೋಶಾಧಿಕಾರಿ ಶ್ರೀಕಾಂತ ಹೆಮ್ಮಾಡಿ ವಂದಿಸಿದರು. ಉಪನ್ಯಾಸಕ ಅಕ್ಷಯ ಹೆಗ್ಡೆ ಮೊಳಹಳ್ಳಿ ನಿರೂಪಿಸಿದರು.ರಾಜ್ಯ ಹಾಗೂ ಜಿಲ್ಲಾ ಸಂಘದ ನಿರ್ದೇಶನದಂತೆ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ 33 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಕಾಲೇಜಿನ ಕ್ರೀಡಾಂಗಣದ ಸುತ್ತ 33 ಹಣ್ಣಿನ ಗಿಡಗಳನ್ನು ನೆಡುವ ಮೂಲಕ ವಿಶೇಷ ಪರಿಸರ ಅಭಿಯಾನ ನಡೆಸಲಾಯಿತು.