ಸಾರಾಂಶ
ಧಾರವಾಡ:
ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿರುವುದು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಸರ್ಕಾರದ ಈ ಕ್ರಮ ಖಂಡಿಸಿ ಜೆಡಿಎಸ್ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಚಿವ ಅಲ್ಕೋಡ್ ಹನುಮಂತಪ್ಪ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೈಲ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಸಾಗಾಣಿಕೆ ದರ ಸಹ ಏರಲಿದೆ. ಇದರಿಂದ ಜೀವನಾವಶ್ಯಕ ವಸ್ತುಗಳ ಬೆಲೆ ಸಹಜವಾಗಿಯೇ ಹೆಚ್ಚಳವಾಗಲಿದೆ. ಕಾಂಗ್ರೆಸ್ ಸರ್ಕಾರ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ನಿರ್ವಹಿಸಲು ಈ ರೀತಿ ತೈಲ, ಬಾಂಡ್ ಹಾಗೂ ಇತರೆ ವಸ್ತುಗಳ ಬೆಲೆ ಏರಿಕೆ ಮಾಡುವುದು ತಪ್ಪು. ಜತೆಗೆ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ. ಶಕ್ತಿ ಯೋಜನೆಯ ಅನುಷ್ಠಾನದಿಂದ ಬಸ್‌ಗಳ ಸಂಖ್ಯೆ ಕಡಿಮೆ ಮಾಡಲಾಗಿದೆ. ಇದರಿಂದ ಮತ್ತೊಂದು ಊರಿಗೆ ಹೋಗಿ ಕಲಿಯುವ ವಿದ್ಯಾರ್ಥಿಗಳಿಗೆ ಅತೀವ ತೊಂದರೆಯಾಗಿದೆ ಎಂದು ಆರೋಪಿಸಿದರು.ಜಿಲ್ಲೆಯಲ್ಲಿ ಹಾಸ್ಟೆಲ್ ಬೇಡಿಕೆ ಹೆಚ್ಚಾಗಿದ್ದು, ವಿದ್ಯಾರ್ಥಿಗಳಿಗೆ ಹಾಸ್ಟೆಲ್ ದೊರೆಯುತ್ತಿಲ್ಲ. ನೂತನ ಹಾಸ್ಟೆಲ್ ನಿರ್ಮಿಸುವುದರೊಂದಿಗೆ ಈಗಿನ ಹಾಸ್ಟೆಲ್ ದುರಸ್ತಿಗೆ ಕ್ರಮಕೈಗೊಳ್ಳಬೇಕು. ಮಕ್ಕಳಿಗೆ ಮೂಲಭೂತ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಪಕ್ಷದ ಮುಖಂಡ ಮಂಜುನಾಥ ಹಗೇದಾರ ಮಾತನಾಡಿ, ಜಿಲ್ಲೆಯಲ್ಲಿ ಜೆಡಿಎಸ್ ಬಲಪಡಿಸಲು ಪಕ್ಷದ ಹಿರಿಯರು ನಿರ್ಧರಿಸಿದ್ದು, ಕೇಂದ್ರ ಸಚಿವ ಎಚ್.ಡಿ. ಕುಮಾರ ಸ್ವಾಮಿ ಸಹ ಈ ಬಗ್ಗೆ ಮಾರ್ಗದರ್ಶನ ಮಾಡಿದ್ದಾರೆ. ಈ ದಿಸೆಯಲ್ಲಿ ಅಲ್ಕೋಡ ಹನುಮಂತಪ್ಪ ಅವರ ಮಾರ್ಗದರ್ಶನದಲ್ಲಿ ಪದಾಧಿಕಾರಿಗಳ ನೇಮಕ ಮಾಡಲಾಗುವುದು. ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿ ಖಂಡಿಸಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಮಹ್ಮದ್‌ಗೌಸ್ ನದಾಫ್, ಶಾಹೀದ್ ನದಾಫ್, ಅನಿಲಕುಮಾರ ಇದ್ದರು.