ಸಾರಾಂಶ
ಕನ್ನಡಪ್ರಭ ವಾರ್ತೆ ಹಾಸನ
ರಾಷ್ಟ್ರೀಯ ಹೆದ್ದಾರಿ ೭೫ರ ಚತುಷ್ಪಥ ರಸ್ತೆ ಅಗಲೀಕರಣಕ್ಕಾಗಿ ಶಿರಾಡಿಯ ದೊಡ್ಡತಪ್ಪಲೆ ಬಳಿ ಗುಡ್ಡಗಳನ್ನು ೯೦ ಡಿಗ್ರಿಯಲ್ಲಿ ಕಡಿದಾಗಿ ಸೀಳಿರುವುದು ಗುಡ್ಡ ಕುಸಿತಕ್ಕೆ ಇರುವ ಪ್ರಮುಖ ಕಾರಣಗಳಲ್ಲಿ ಒಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.ಭಾರೀ ಮಳೆಯಿಂದಾಗಿ ಸಕಲೇಶಪುರ ತಾಲೂಕಿನ ದೊಡ್ಡ ತಪ್ಪಲೆ ಬಳಿ ರಾಷ್ಟ್ರೀಯ ಹೆದ್ದಾರಿ 75ರ ಮೇಲೆ ಕಳೆದ ಹಲವು ದಿನಗಳಿಂದ ಗುಡ್ಡ ಕುಸಿಯುತ್ತಿದ್ದು, ಪರಿಸ್ಥಿತಿಯ ಗಂಭೀರತೆ ಅರಿತು ಶನಿವಾರ ಭೇಟಿ ನೀಡಿ ಭೂ ಕುಸಿತವಾಗಿರುವುದನ್ನು ವೀಕ್ಷಣೆ ಮಾಡಿ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ರಸ್ತೆ ಕಾಮಗಾರಿ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಿ.ಎಂ ಅವರಿಗೆ ವಿವರಿಸುತ್ತಾ, ಒಟ್ಟು ೪೫ ಕಿ.ಮೀನಲ್ಲಿ ೩೫ ಕಿ.ಮೀ ಹೈವೇ ಕಾಮಗಾರಿ ಮುಗಿದಿದೆ. ೧೦ ಕಿ.ಮೀ. ಬಾಕಿ ಇದೆ. ಆದರೆ ಇಲ್ಲಿಯವರೆಗೂ ಎಲ್ಲೂ ತಡೆಗೋಡೆಗಳನ್ಜು ನಿರ್ಮಿಸಿಲ್ಲ. ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿ ಅದರ ಆಧಾರದಲ್ಲಿ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಂತೆ ಇಲ್ಲ ಎಂದು ವಿವರಿಸಿದರು. ಗುಡ್ಡ ಕುಸಿತದ ಜಾಗದುದ್ದಕ್ಕೂ ನಡೆದು ಪರಿಶೀಲಿಸಿದ ಮುಖ್ಯಮಂತ್ರಿಗಳು ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ ಎಸ್‌ಡಿಆರ್‌ಎಫ್ ತಂಡದೊಂದಿಗೆ ಕೆಲ ಹೊತ್ತು ಚರ್ಚಿಸಿದರು. ೯೦ ಡಿಗ್ರಿಯಲ್ಲಿ ಗುಡ್ಡಗಳನ್ನು ಕತ್ತರಿಸಿದ್ದೀರಿ. ಇದು ಅವೈಜ್ಞಾನಿಕ ಕಾಮಗಾರಿ ಅಲ್ಲವೇ ಎಂದು ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರನ್ನು ಪ್ರಶ್ನಿಸಿದರು. ಗುಡ್ಡಗಳನ್ನು ೩ ರಿಂದ ೪೫ ಡಿಗ್ರಿಯಲ್ಲಿ ಕತ್ತರಿಸಿ ತಡೆಗೋಡೆ ನಿರ್ಮಿಸಿದ್ದರೆ ಮಣ್ಣು ಕುಸಿತವನ್ನು ತಡೆಯಬಹುದಿತ್ತಲ್ಲವೇ ಎಂದರಲ್ಲದೆ, ಕಾಮಗಾರಿ ಆರಂಭಿಸುವ ಮೊದಲು ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿದ್ದರೆ ಅದಕ್ಕೆ ತಕ್ಕಂತೆ ಮುಂಜಾಗ್ರತಾ ಕ್ರಮ ಏಕೆ ವಹಿಸಿಲ್ಲ ಎಂದು ಪ್ರಶ್ನಿಸಿದರು. ಇದರ ಸ್ಥಿತಿಗತಿ ಕುರಿತು ಕೇಂದ್ರ ಸಚಿವರಾದ ಗಡ್ಕರಿ ಅವರಿಗೆ ಪತ್ರ ಬರೆಯುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು. ನಂತರ ಮುಖ್ಯ ಮಂತ್ರಿ ಅವರು ಹಾರ್ಲೆಗೆ ಭೇಟಿ ನೀಡಿ ಭೂ ಕುಸಿತವಾಗಿರುವುದನ್ನು ವೀಕ್ಷಣೆ ಮಾಡಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ, ಲೋಕಸಭಾ ಸದಸ್ಯರಾದ ಶ್ರೇಯಸ್ ಪಟೇಲ್, ಕರ್ನಾಟಕ ರಾಜ್ಯ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಎಂ.ಶಿವಲಿಂಗೇಗೌಡ, ಶಾಸಕರಾದ ಸಿಮೆಂಟ್ ಮಂಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ ರಶ್ಮಿ ಮಹೇಶ್, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್, ಜಿಲ್ಲಾಧಿಕಾರಿ ಸತ್ಯಭಾಮ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮೊಹಮ್ಮದ್ ಸುಜೀತ, ಸಕಲೇಶಪುರ ಉಪ ವಿಭಾಗಾಧಿಕಾರಿ ಶೃತಿ, ತಹಸೀಲ್ದಾರ್ ಮೇಘನಾ ಮತ್ತಿತರ ಅಧಿಕಾರಿಗಳು ಹಾಜರಿದ್ದರು.