ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮತದಾನ ಜಾಗೃತಿಗಾಗಿ ಯಕ್ಷಗಾನ

| Published : Apr 06 2024, 12:51 AM IST

ಸಾರಾಂಶ

ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಭಾಗವಹಿಸುವಿಕೆಯನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮತದಾರರ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮತದಾನದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಆಕರ್ಷಕ ಯಕ್ಷಗಾನವನ್ನು ಪ್ರದರ್ಶಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಭಾಗವಹಿಸುವಿಕೆಯನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ, ಸ್ವೀಪ್ ಸಮಿತಿ ಮತ್ತು ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಣಿಪಾಲ ಆಸರೆ ವಿಶೇಷ ಶಾಲೆಗಳು ಜಂಟಿಯಾಗಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮತದಾರರ ಜಾಗೃತಿ ಅಭಿಯಾನ ಕಾರ್ಯಕ್ರಮ ಆಯೋಜಿಸಿತ್ತು.

ಉಡುಪಿ ಜಿ.ಪಂ. ಸಿಇಒ ಪ್ರತೀಕ್ ಬಾಯಲ್ ಮಾತನಾಡಿ, ಮತದಾನ ಕೇವಲ ಹಕ್ಕು ಅಲ್ಲ, ಎಲ್ಲರ ಜವಾಬ್ದಾರಿ ಕೂಡ ಹೌದು. ಮತದಾನದ ರಜೆ ಮೋಜು ಮಸ್ತಿಗೆ ಅಲ್ಲ, ಮತದಾನ ಕರ್ತವ್ಯ, ಪ್ರತಿಯೊಬ್ಬರೂ ಮತದಾನ ಮಾಡಿ ಎಂದರು.

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಮತದಾರರ ಜಾಗೃತಿಯನ್ನು ಬೆಳೆಸುವಲ್ಲಿ ಜಿಲ್ಲಾಡಳಿತದ ಪೂರ್ವಭಾವಿ ಪ್ರಯತ್ನಗಳನ್ನು ಶ್ಲಾಘಿಸಿದರು. ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಇಂತಹ ಉಪಕ್ರಮಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ ಎಂದರು.

ಕಾರ್ಯಕ್ರಮದಲ್ಲಿ ಮತದಾನದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಆಕರ್ಷಕ ಯಕ್ಷಗಾನವನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ರತ್ನ ಸುವರ್ಣ, ಸ್ವೀಪ್ ಸಮಿತಿಯ ಅನುರಾಧ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಚುನಾವಣಾ ಜಾಗೃತಿ ಭಿತ್ತಿ ಪತ್ರದೊಂದಿಗೆ ಆಸರೆ ವಿಶೇಷ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನಾ ಅಧಿಕಾರಿ ಶಿವಾಜಿಯವರ ಮಾರ್ಗದರ್ಶನದಲ್ಲಿ ಚುನಾವಣಾ ಪ್ರಕ್ರಿಯೆಯ ಪಾವಿತ್ರ್ಯತೆಯನ್ನು ಎತ್ತಿ ಹಿಡಿಯುವುದಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಸ್ತೂರ್ಬಾ ಆಸ್ಪತ್ರೆಯ ಮಾರುಕಟ್ಟೆ ವ್ಯವಸ್ಥಾಪಕ ಮೋಹನ್ ಶೆಟ್ಟಿ ಸ್ವಾಗತಿಸಿದರು. ಆಸರೆ ಅಧ್ಯಕ್ಷ ಜಯವಿಠಲ್ ವಂದಿಸಿದರು. ಶಿಕ್ಷಕ ರಮೇಶ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.