ಸಾರಾಂಶ
ಬಸನಗೌಡ ಯತ್ನಾಳ್ ಅವರು ಹೊಸ ಪಕ್ಷ ಕಟ್ಟುವ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಬಿಜೆಪಿ ಮುಖಂಡ ಅಮ್ಮನಪುರ ಮಲ್ಲೇಶ್ ಮನವಿ ಮಾಡಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಬಸನಗೌಡ ಯತ್ನಾಳ್ ಅವರು ಹೊಸ ಪಕ್ಷ ಕಟ್ಟುವ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಬಿಜೆಪಿ ಮುಖಂಡ ಅಮ್ಮನಪುರ ಮಲ್ಲೇಶ್ ಮನವಿ ಮಾಡಿದರು.ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆಯಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹಿಂದೂ ಪಕ್ಷ ಎಂದು ಹೊಸ ಪಕ್ಷವನ್ನು ಕಟ್ಟಲು ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರಿಂದ ಬಿಜೆಪಿ ಮತಗಳು ವಿಭಜನೆಗೊಂಡು ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಆರ್ಥಿಕವಾಗಿ ದಿವಾಳಿಯಾಗಿದೆ. ಸರ್ಕಾರಿ ನೌಕರರಿಗೆ ವೇತನ ಸರಿಯಾಗಿ ನೀಡುತ್ತಿಲ್ಲ, ಅಲ್ಲದೇ ಸಚಿವ ರಾಜಣ್ಣನವರ ಮಗನನ್ನು ಕೊಲೆ ಮಾಡಲು ಸುಪಾರಿ ನೀಡಿದ್ದಾರೆ ಎಂದು ತುಮಕೂರು ಎಸ್ಪಿ ಅವರಿಗೆ ದೂರು ನೀಡಿದ್ದಾರೆ. ಜನರ ಹಿತದೃಷ್ಟಿಯಿಂದ ನೂತನ ಪಕ್ಷ ಕಟ್ಟುವುದನ್ನು ಕೈಬಿಡಬೇಕು ಎಂದರು.ಉಚ್ಚಾಟನೆಯಾಗಿರುವುದನ್ನು ಹಿಂಪಡೆಯಲು ಬಿಜೆಪಿಯ ರಮೇಶ್ ಜಾರಕಿಹೊಳಿ, ಶ್ರೀರಾಮುಲು ಕೇಂದ್ರದ ವರಿಷ್ಠರ ಜತೆ ಚರ್ಚಿಸಿ ಉಚ್ಚಾಟನೆಯನ್ನು ಮತ್ತೆ ಮರು ಪರಿಶೀಲನೆ ಮಾಡುವಂತೆ ಆಗ್ರಹಿಸಿದ್ದಾರೆ. ಆತುರದ ನಿರ್ಧಾರವನ್ನು ತೆಗೆದುಕೊಳ್ಳದೇ ಸಲಹೆ ಸ್ವೀಕರಿಸಬೇಕು ಎಂದರು.
ಲಿಂಗಾಯತ ಸಮುದಾಯವನ್ನು 2ಎ ಪಟ್ಟಿಗೆ ಸೇರಿಸಲು ಹೋರಾಟವನ್ನು ಮಾಡಿದ ಯತ್ನಾಳ್ ಅವರನ್ನು ಸಮುದಾಯದವರು ಕೈಬಿಡುವುದಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಭೆ ನಡೆಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಮನವಿ ಸಲ್ಲಿಸುತ್ತೇವೆ ಎಂದರು.ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡ ವೀರನಪುರ ಮಹದೇವಸ್ವಾಮಿ, ಸತೀಶ್, ಲೋಕೇಶ್, ಸುಭಾಷ್ ಇದ್ದರು.